ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ 2ನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

2 years ago

ಬೆಂಗಳೂರು: ಉತ್ತರ ಕರ್ನಾಟಕದ ಬೆಳಗಾವಿ, ಕಾರವಾರ, ಕಲಬುರಗಿ ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ನಡೆಯಲಿರುವ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿದೆ.

ಇಂದಿನಿಂದ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭಗೊಂಡಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ, ಶಾಸಕ ತುಕಾರಾಮ್, ವಿಧಾನಸಭೆ ಮಾಜಿ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಸೇರಿದಂತೆ ಹಲವರು ನಾಮಪತ್ರ ಸಲ್ಲಿಸಿದರು.

ಕರ್ನಾಟಕದಲ್ಲಿ ಇದೇ ಏಪ್ರಿಲ್ 27ಕ್ಕೆ ಮೊದಲ ಹಂತದಲ್ಲಿ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ದಿನದಿಂದ ದಿನಕ್ಕೆ ಕಾವು ಏರುತ್ತಿರುವ ಮಧ್ಯೆಯೇ ಎರಡನೇ ಹಂತದ ನಾಮಪತ್ರ ಸಲ್ಲಿಕೆ ಕಾರ್ಯ ಭರಾಟೆ ಪಡೆದುಕೊಂಡಿದೆ.

ಎರಡನೇ ಹಂತದಲ್ಲಿ ಕರಾವಳಿಯ ಉತ್ತರ ಕನ್ನಡ, ಮಲೆನಾಡಿನ ಶಿವಮೊಗ್ಗ, ಮಧ್ಯ ಕರ್ನಾಟಕದ ದಾವಣಗೆರೆ, ಕಲ್ಯಾಣ ಹಾಗೂ ಕಿತ್ತೂರು ಕರ್ನಾಟಕದ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ. ಬಿಜೆಪಿ–ಜೆಡಿಎಸ್ ನಡುವೆ ಲೋಕಸಭಾ ಚುನಾವಣಾ ಮೈತ್ರಿಯಾಗಿ ಕ್ಷೇತ್ರಗಳ ಹಂಚಿಕೆ ಮಾಡಿಕೊಂಡಿವೆ. ಜೆಡಿಎಸ್ಗೆ ಬಿಟ್ಟುಕೊಟ್ಟ ಯಾವ ಕ್ಷೇತ್ರಗಳೂ ಎರಡನೇ ಹಂತದಲ್ಲಿ ಇಲ್ಲ. ಹೀಗಾಗಿ, ಎಲ್ಲ 14 ಕ್ಷೇತ್ರಗಳಲ್ಲೂ ಕಾಂಗ್ರೆಸ್–ಬಿಜೆಪಿ ಮಧ್ಯೆ ನೇರ ಹಣಾಹಣಿ ಇದೆ. ಆದರೆ, ನಾಲ್ಕು ಕ್ಷೇತ್ರಗಳಲ್ಲಿ ಬಂಡಾಯದ ಕಹಳೆ ಮೊಳಗಿಸಿರುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರೆ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ ಇದೆ.

ಕಲಬುರಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ನಾಮಪತ್ರ ಸಲ್ಲಿಕೆಗೂ ಮುನ್ನ ಕಲಬುರಗಿಯ ಡಾ.ಬಿ.ಆರ್. ಅಂಬೇಡ್ಕರ್, ಬಸವೇಶ್ವರ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಗಳಿಗೆ ಮಾಲಾರ್ಪಣೆ ಮಾಡಿದರು. ಬಳಿಕ ಶರಣಬಸವೇಶ್ವರರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ಮೆರವಣಿಗೆಯಲ್ಲಿ ಸಾಗಿ ಬಂದು ನಾಮಪತ್ರ ಸಲ್ಲಿಸಿದರು.

ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ರಾಜ್ಯ ರೇಷ್ಮೆ ಉದ್ಯಮಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕನೀಜ್ ಫಾತಿಮಾ, ಶಾಸಕ ಎಂ.ವೈ. ಪಾಟೀಲ ಹಾಗೂ ಮುಖಂಡ ಬಾಬುರಾವ ಚಿಂಚನಸೂರ ಉಪಸ್ಥಿತರಿದ್ದರು.

ಕಾಗೇರಿ ನಾಮಪತ್ರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಕಾರವಾರದ ದೈವಜ್ಞ ಸಭಾಭವನದ ಎದುರಿನಲ್ಲಿ ಗೋ ಪೂಜೆ ಮಾಡಿ ನಾಮಪತ್ರ ಸಲ್ಲಿಕೆಯ ಮೆರವಣಿಗೆಗೆ ಚಾಲನೆ ನೀಡಿದರು. ನಗರದಲ್ಲಿ ರೋಡ್ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಿದರು.

ಈ ವೇಳೆ, ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್, ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ಸುನಿಲ್ ಕುಮಾರ್, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಕೆ ನಂತರ ಮಾತನಾಡಿದ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್, ಕಾಂಗ್ರೆಸ್ ಜಾತಿ, ಧರ್ಮದ ಆಧಾರದಲ್ಲಿ ಸಮಾಜ ಒಡೆಯುತ್ತಿದೆ. ಬಿಜೆಪಿ ಸಮಾಜದ ಪ್ರಮುಖ ಸ್ಥರವಾಗಿರುವ ಮಹಿಳೆಯರು, ಯುವಕರ ಪರವಾಗಿ ಕೆಲಸ ಮಾಡುತ್ತಿದೆ ಎಂದರು.

ಅಲ್ಪಸಂಖ್ಯಾತರ ಮತ ಬ್ಯಾಂಕ್ ಆಸೆಗೋಸ್ಕರ ಕಾಂಗ್ರೆಸ್ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ಭಾವನೆಯೊಂದಿಗೆ ಚೆಲ್ಲಾಟವಾಡುತ್ತಿದೆ. ಆ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕು ಎಂದರು.

ಶಿವಮೊಗ್ಗದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಹಿರಿಯ ನಾಯಕ ಈಶ್ವರಪ್ಪ ನಾಮಪತ್ರ ಸಲ್ಲಿಸಿದರು. ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಸೇರಿದಂತೆ ಹಲವು ಮುಖಂಡರೊಂದಿಗೆ, ರಾಮಣ್ಣಶ್ರೇಷ್ಠಿ ಪಾರ್ಕ್ನ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಕುಟುಂಬ ಸಮೇತ ಆಗಮಿಸಿದ ಈಶ್ವರಪ್ಪ ನಾಮಪತ್ರ ಸಲ್ಲಿಸಿದರು.

ಮರವಣಿಗೆ ವಾಹನದಲ್ಲಿ ಪ್ರಧಾನಿ ನರೇಂದ್ರಮೋದಿ ಅವರ ಪೋಟೋ ಹಾಕಲಾಗಿದ್ದು, ಮೆರವಣಿಗೆಯಲ್ಲಿ ಸಾವಿರಾರು ಜನ ಪಾಲ್ಗೊಂಡಿದ್ದು, ಕೇಸರಿ ಧ್ವಜ, ಹಿಂದೂತ್ವ ಪರ ಘೋಷಣೆಗಳು ಮೊಳಗಿದವು.

ರಾಜ್ಯದಲ್ಲಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಹಾಗೂ ಕೇಂದ್ರದಲ್ಲಿನ ಆಡಳಿತಾರೂಢ ಬಿಜೆಪಿ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿವೆ. ಶಿವಮೊಗ್ಗ ಹಾಗೂ ಧಾರವಾಡ ಕ್ಷೇತ್ರಗಳಲ್ಲಿ ಬಿಜೆಪಿಗೆ, ಬಾಗಲಕೋಟೆ ಹಾಗೂ ದಾವಣಗೆರೆಯಲ್ಲಿ ಕಾಂಗ್ರೆಸ್ಗೆ ಬಂಡಾಯದ ಕಾವು ಎದುರಾಗಿದೆ.

Leave a Reply