ಸ್ಪರ್ಧಾತ್ಮಕ ಪರೀಕ್ಷೆಗಳ ಯಶಸ್ಸಿಗೆ ಅವಿರತ ಶ್ರಮ ಅಗತ್ಯ: ಪ್ರಶಾಂತ್ ಕುಮಾರ್ ಮಿಶ್ರಾ
ಬಳ್ಳಾರಿ: ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು ಉನ್ನತ ಗುರಿ ಹೊಂದಲು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಹೊಂದಲು ಅವಿರತವಾಗಿ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಕರೆ ನೀಡಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಖನಿಜ ಪ್ರತಿಷ್ಠಾನ ಸಹಯೋಗದಲ್ಲಿ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹೊಂಗಿರಣದಲ್ಲಿ ಕೆಎಎಸ್ ಪರೀಕ್ಷೆಗೆ ಉಚಿತವಾಗಿ ತರಬೇತಿ ಪಡೆಯಲು ಆಯ್ಕೆಯಾದ ಅಭ್ಯರ್ಥಿಗಳಿಗೆ 5 ತಿಂಗಳ ಕೆಎಎಸ್ ಪರೀಕ್ಷಾ ಉಚಿತ ಪೂರ್ವ ತರಬೇತಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಪ್ರಸ್ತುತ ಜಗತ್ತು ಸ್ಪರ್ಧಾತ್ಮಕವಾಗಿದ್ದು, ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆ ಸಾಮಾನ್ಯವಾಗಿದೆ. ವಿದ್ಯಾರ್ಥಿಗಳು ಮತ್ತು ಆಕಾಂಕ್ಷಿಗಳು ಸ್ಪರ್ಧಾ ಮನೋಭಾವವನ್ನು ಬೆಳೆಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದರು.
ಯಶಸ್ಸಿಗೆ ದಿನಕ್ಕೆ 5 ರಿಂದ 6 ಗಂಟೆಗಳ ಏಕಾಗ್ರ ಅಧ್ಯಯನ ಅಗತ್ಯವಾಗಿದ್ದು, ಅಧ್ಯಯನದ ಹೊರತಾಗಿ ಆಕಾಂಕ್ಷಿಗಳು ಸಹನೆಯನ್ನು ಬೆಳೆಸಿಕೊಳ್ಳಬೇಕು ಮತ್ತು ಶ್ರಮದಿಂದ ಹಿಂದೆ ಸರಿಯಬಾರದು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಮಾತನಾಡಿ, ವಿದ್ಯಾರ್ಥಿಗಳು ಹೊಸದನ್ನು ಕಲಿಯುವ ಕುತೂಹಲವನ್ನು ಬೆಳೆಸಿಕೊಳ್ಳಬೇಕು ಮತ್ತು ಆಲೋಚನೆಗಳು ಮತ್ತು ಮಾಹಿತಿಗೆ ತೆರೆದುಕೊಳ್ಳಬೇಕು ಎಂದರು.
ಆಕಾಂಕ್ಷಿಗಳು ತಮ್ಮ ಪ್ರಚಲಿತ ವಿದ್ಯಮಾನಗಳ ಜ್ಞಾನವನ್ನು ಹೆಚ್ಚಿಸಲು ಪತ್ರಿಕೆಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಮತ್ತು ಆಕಾಂಕ್ಷಿಗಳು ಕಠಿಣ ಪರಿಶ್ರಮ ಅಥವಾ ವೈಫಲ್ಯದ ಭಯದಿಂದ ಹಿಂಜರಿಯಬಾರದು. ವೈಫಲ್ಯವು ಯಶಸ್ಸಿನ ಮೆಟ್ಟಿಲು ಎಂಬುದನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು ಎಂದರು.
ಬಳ್ಳಾರಿಯ ಗ್ರಾಮೀಣ ಮತ್ತು ನಗರ ಪ್ರದೇಶದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆವುಳ್ಳ ಯುವಕ-ಯುವತಿಯರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅನುಕೂಲಕ್ಕಾಗಿ ಡಿಎಂಎಫ್ ವತಿಯಿಂದ ತರಬೇತಿ ನೀಡಲಾಗುತ್ತಿದ್ದು, ಇದರ ಸದುಪಯೋಗ ಪಡೆಯಬೇಕು ಎಂದರು.
ಕೆಎಎಸ್ ಪರೀಕ್ಷಾ ಉಚಿತ ಪೂರ್ವ ತರಬೇತಿಗೆ ಒಟ್ಟು 192 ವಿದ್ಯಾರ್ಥಿಗಳು/ಆಕಾಂಕ್ಷಿಗಳು ಆಯ್ಕೆಯಾಗಿದ್ದು, ಅವರಿಗೆ ಇಂದಿನಿಂದ 5 ತಿಂಗಳವರೆಗೂ ಬೆಳಿಗ್ಗೆ 08.30 ರಿಂದ ಮಧ್ಯಾಹ್ನ 02.30 ರವರೆಗೆ ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹೊಂಗಿರಣ ಸಭಾಂಗಣದಲ್ಲಿ ತರಬೇತಿ ನೀಡಲಾಗುವುದು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಾಣೇಶ್ ಸೇರಿದಂತೆ ಆಕಾಂಕ್ಷಿಗಳು ಹಾಗೂ ಇತರರು ಹಾಜರಿದ್ದರು.




