ಬಳ್ಳಾರಿ: ನಗರದ ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ಎಲ್ಲಾ ಸರ್ಕಾರಿ ಇಲಾಖೆಗಳು, ಸರ್ಕಾರಿ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ನಾಮಫಲಕಗಳಲ್ಲಿ ಒಂದು ವಾರ ಕಾಲಮಿತಿಯೊಳಗೆ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರದರ್ಶಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022 ಹಾಗೂ ತಿದ್ದುಪಡಿ ಅಧಿನಿಯಮ 2024 ರ ಅನ್ವಯ ಸರ್ಕಾರಿ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು, ಹೋಟಲ್ಗಳು ಹಾಗೂ ಬ್ಯಾಂಕ್ಗಳು ಮುಂತಾದ ಸಾರ್ವಜನಿಕ ಪ್ರದೇಶಗಳಲ್ಲಿ ಕಡ್ಡಾಯವಾಗಿ ಶೇ.60ರಷ್ಟು ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಸೂಚಿಸಿದ್ದಾರೆ.
ಸರ್ಕಾರಿ, ಸ್ಥಳೀಯ ಪ್ರಾಧಿಕಾರ, ಅನುದಾನಿತ ಅಥವಾ ಅನುದಾನ ರಹಿತ ಸಂಸ್ಥೆ ನಡೆಸುವ ಶಾಲಾ ಕಾರ್ಯಕ್ರಮಗಳಲ್ಲಿ ಬಳಸುವ ಕರಪತ್ರ, ಬ್ಯಾನರ್, ಫ್ಲೆಕ್ಸ್, ಎಲೆಕ್ಟ್ರಾನಿಕ್ ಪ್ರದರ್ಶನ ಫಲಕಗಳು, ಮಾಹಿತಿಗಳು, ಸೂಚನಾ ಪತ್ರಗಳು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ ಇರುವಂತೆ ಕ್ರಮವಹಿಸಬೇಕು ಎಂದಿದ್ದಾರೆ.
ಸರ್ಕಾರ ಅಥವಾ ಸಂಬಂಧಿತ ಸಂಸ್ಥೆಗಳು ಹಾಗೂ ಸ್ಥಳೀಯ ಪ್ರಾಧಿಕಾರಿಗಳಿಂದ ಯಾವುದೇ ರೀತಿಯ ಅನುದಾನ, ರಿಯಾಯಿತಿ ಪಡೆದು ಅನುಷ್ಠಾನಗೊಳಿಸುತ್ತಿರುವ ಯಾವುದೇ ಯೋಜನೆ ಸಂಬಂಧಿಸಿದ ಫಲಕ, ಜಾಹೀರಾತು, ರಸೀದಿ, ಸೂಚನಾಪತ್ರಗಳು ಕಡ್ಡಾಯವಾಗಿ ಕನ್ನಡದಲ್ಲಿ ಇರಬೇಕು ಎಂದಿದ್ದಾರೆ.
ಇಲ್ಲವಾದಲ್ಲಿ ಅಧಿಕಾರಿಗಳು ಮತ್ತು ಸಂಸ್ಥೆಗಳ ಮಾಲೀಕರ ಮೇಲೆ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.




