ಪೊಲೀಸ್ ಸಿಬ್ಬಂದಿಗೆ ಸೂರು ಕಲ್ಪಿಸಿಕೊಡಲು ರಾಜ್ಯ ಸರ್ಕಾರ ಬದ್ಧ: ಡಾ.ಪರಮೇಶ್ವರ್

3 years ago

#state #government #committed #providing #shelter #police #Parameshwar

ಬೆಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ಸಮಾಜದಲ್ಲಿ ಶಾಂತಿ ನೆಲೆಸಲು ಶ್ರಮಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ಸೂರು ಕಲ್ಪಿಸಿಕೊಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಡಾ.ಪರಮೇಶ್ವರ್ ವಿಧಾನಸಭೆಗೆ ತಿಳಿಸಿದರು.

ಪ್ರಶ್ನೋತ್ತರದ ಕಲಾಪದಲ್ಲಿ ಜೆಡಿಎಸ್ ನ  ಎಚ್.ಡಿ.ರೇವಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪೊಲೀಸ್ ಗೃಹ-2025 ಯೋಜನೆಯಡಿ ರಾಜ್ಯದಲ್ಲಿ 10,034 ವಸತಿಗೃಹಗಳನ್ನು ನಿರ್ಮಿಸಲು 2 ಸಾವಿರ ಕೋಟಿ ರೂ.ಗಳ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಇದರಲ್ಲಿ ಪೊಲೀಸ್ ಪೇದೆಗಳಿಗಾಗಿ 9524  ವಸತಿ ಗೃಹಗಳು, 510 ಪಿಎಸ್‍ಐ ವಸತಿ ಗೃಹಗಳನ್ನು ನಿರ್ಮಿಸಲಾಗುತ್ತಿದೆ. ಈ ವಸತಿ ಗೃಹಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದ್ದು, ವಿವಿಧ ಸ್ಥಳಗಳಲ್ಲಿ ನಿರ್ಮಾಣ ಕಾಮಗಾರಿಗಳು ವಿವಿಧ ಹಂತಗಳಲ್ಲಿವೆ ಎಂದು ವಿವರಿಸಿದರು.

ಕಾಮಗಾರಿ ಪರಿಶೀಲನೆ: ಬಯಲು ಸೀಮೆಯ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ಸದ್ಯದಲ್ಲೇ ಪರಿಶೀಲನೆ ಮಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ತಿಳಿಸಿದರು.

ಗೌರಿಬಿದನೂರು ಕ್ಷೇತ್ರದ ಪಕ್ಷೇತರ ಸದಸ್ಯ ಕೆ.ಎಸ್.ಪುಟ್ಟಸ್ವಾಮಿ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಇಡೀ ಯೋಜನೆಯ ಕಾಮಗಾರಿ ಪರಿಶೀಲನೆ ಮಾಡಿ ಮೊದಲು ನೀರು ತರಲು ಆದ್ಯತೆ ನೀಡಲಾಗುವುದು. ನಂತರ ರಸ್ತೆ ನಿರ್ಮಾಣಕ್ಕೆ ಒತ್ತು ನೀಡಲಾಗುವುದು ಎಂದರು.

Leave a Reply