ಬೆಂಗಳೂರು: ರಾಜ್ಯದ ಎಲ್ಲಾ ಗ್ರಾಮಪಂಚಾಯ್ತಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಲ್ಯಾಣ ಕಾರ್ಯಕ್ರಮಗಳಿಗೆ ಮೀಸಲಿಟ್ಟ ಅನುದಾನವನ್ನು ಸಮರ್ಪಕವಾಗಿ ಬಳಸಲು ಪಂಚತಂತ್ರ-2 ಎಂಬ ಯೋಜನೆ ಜಾರಿ ಮಾಡುವುದಾಗಿ ಪಂಚಾಯತ್‍ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಪರಿಷತ್‍ನಲ್ಲಿ ಪ್ರಕಟಿಸಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ನ ಡಿ.ತಿಮ್ಮಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 2022-23ನೇ ಸಾಲಿನಲ್ಲಿ ರಾಜ್ಯಾದ್ಯಂತ ಗ್ರಾಮಪಂಚಾಯ್ತಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಲ್ಯಾಣ ಕಾರ್ಯಕ್ರಮಗಳಿಗಾಗಿ 716 ಕೋಟಿ ಅನುದಾನ ಮೀಸಲಿಡಲಾಗಿತ್ತು ಎಂದರು.
ಮೀಸಲಿಟ್ಟ ಹಣದಲ್ಲಿ 501 ಕೋಟಿ ಹಣವನ್ನು ಬಳಕೆ ಮಾಡಿದ್ದರೆ 216 ಕೋಟಿ ಖರ್ಚಾಗದೆ ಉಳಿದಿದೆ. ಇದು ಏಕೆ ಖರ್ಚಾಗಿಲ್ಲ ಎಂಬುದರ ಬಗ್ಗೆ ತನಿಖೆ ನಡೆಸಲಾಗುವುದು. ಈ ಅನುದಾನವನ್ನು ಸಮರ್ಪಕವಾಗಿ ಸದ್ಬಳಕೆ ಮಾಡಲು ನಾವು ಪಂಚತಂತ್ರ-2 ಯೋಜನೆಯನ್ನು ಅಳವಡಿಸಿಕೊಳ್ಳುತ್ತಿದ್ದೇವೆ ಎಂದು ಹೇಳಿದರು.
ಇದರಿಂದಾಗಿ ಪ್ರತಿಯೊಂದು ಗ್ರಾಪಂಗಳಲ್ಲಿ ಎಷ್ಟು ಹಣ ಖರ್ಚಾಗಿದೆ. ಯಾವ ಯಾವ ಉದ್ದೇಶಕ್ಕೆ ಬಳಸಲಾಗುತ್ತದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಸಿಗಲಿದೆ. ಒಟ್ಟಾರೆ ಯಾವ ಉದ್ದೇಶಕ್ಕೆ ಹಣ ಮೀಸಲಿಡುತ್ತೇವೋ ಅದು ನೂರಕ್ಕೆ 100ರಷ್ಟು ಖರ್ಚಾಗಬೇಕು ಎಂದು ವಿವರಿಸಿದರು.




