ಬೆಂಗಳೂರು: ಕರಾವಳಿ, ಮಲೆನಾಡು ಜಿಲ್ಲೆಗಳು ಸೇರಿದಂತೆ ಬೆಳಗಾವಿ, ಧಾರವಾಡ, ವಿಜಯಪುರ, ಹಾವೇರಿ, ದಾವಣಗೆರೆ ಸೇರಿ ಹಲವೆಡೆ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಹೈ ಅಲರ್ಟ್ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ತುರ್ತು ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷ್ಣಾ ನದಿಯ 12 ಸೇತುವೆಗಳ ಮೇಲೆ ನೀರು ಹರಿಯುತ್ತಿದೆ. ಇಲ್ಲಿನ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಕೆಲ ನದಿಗಳು ತುಂಬಿ ಹರಿಯುತ್ತಿದ್ದರೂ, ಜನ ವಸತಿ ಪ್ರದೇಶಗಳಿಗೆ ನೀರು ನುಗ್ಗಿಲ್ಲ. ಉತ್ತರ ಒಳನಾಡಿನಲ್ಲಿ ಕಳೆದ 15 ದಿನಗಳಿಂದ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ರಾಜ್ಯದ ಪ್ರಮುಖ ಜಲಾಶಗಳಲ್ಲಿ ಶೇ. 50ರಷ್ಟು ನೀರು ಸಂಗ್ರಹವಾಗಿದೆ. ಕೃಷ್ಣಾ ಮತ್ತು ಕಾವೇರಿ ಕೊಳ್ಳದ ಜಲಾಶಗಳಿಗೂ ಒಳಹರಿವು ಹೆಚ್ಚಾಗಿದೆ. ಇದರಿಂದ ನೀರಿನ ಸಂಗ್ರಹ ಪರಿಸ್ಥಿತಿ ಸುಧಾರಿಸಿದೆ ಎಂದು ಹೇಳಿದರು.
ರಾಜ್ಯದ ಹಲವು ನದಿಗಳು ಮೈದುಂಬಿ ಹರಿಯುತ್ತಿವೆ. ಇನ್ನೂ ಅಪಾಯದ ಮಟ್ಟಿ ಮೀರಿ ಹರಿಯುತ್ತಿಲ್ಲ. ಆದರೂ ಜಿಲ್ಲಾಧಿಕಾರಿಗಳು ಜಿಲ್ಲಾಕೇಂದ್ರಗಳಲ್ಲಿ ಹಾಗೂ ತಹಸೀಲ್ದಾರ್ಗಳು ತಾಲ್ಲೂಕು ಕೇಂದ್ರಗಳಲ್ಲಿದ್ದು, ಅಗತ್ಯಬಿದ್ದರೆ ತುರ್ತು ಪರಿಹಾರ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದರು.
ದಕ್ಷಿಣ ಕನ್ನಡದ ಕಡಬದಲ್ಲಿನ ಕಾಳಜಿ ಕೇಂದ್ರದಲ್ಲಿ 35 ಜನರಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ 4 ಕಾಳಜಿ ಕೇಂದ್ರಗಳನ್ನು ತೆರೆದಿದ್ದು, 45 ಜನರು ಆಶ್ರಯ ಪಡೆದಿದ್ದಾರೆ. ಜೂನ್ನಿಂದ ಸಿಡಿಲು, ಮಳೆ ಸಂಬಂಧ ಅನಾಹುತದಲ್ಲಿ 27 ಜನರು ಮೃತಪಟ್ಟಿದ್ದಾರೆ. ಒಟ್ಟಾರೆ ಜನರ ಪ್ರಾಣ, ಆಸ್ತಿ-ಪಾಸ್ತಿ ರಕ್ಷಣೆಗೆ ಆದ್ಯತೆ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ತುರ್ತು ಪರಿಹಾರ ಕೈಗೊಳ್ಳಲು ಜಿಲ್ಲಾಧಿಕಾರಿಗಳ ಬಳಿ 540 ಕೋಟಿ ರೂ. ಹಣವಿದೆ. ಸರ್ಕಾರದ ಬಳಿಯೂ ಹಣವಿದ್ದು, ಪ್ರವಾಹ ನಿರ್ವಹಣೆಗೆ ಹಣದ ಕೊರತೆ ಇಲ್ಲ ಎಂದು ಹೇಳಿದರು.



