ತೇಜೋವಧೆ ಪೋಸ್ಟ್ ಗಳನ್ನು ನಿರ್ಬಂಧಿಸಲು ಕಠೋರ ಕಾಯ್ದೆ ಜಾರಿಗೆ ಚಿಂತನೆ

3 years ago

#strict #law #being #considered #block #defamatory #posts

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸಮಾಜದ ಶಾಂತಿಗೆ ಭಂಗ ತರುವ ರೀತಿಯಲ್ಲಿ ಹಾಗೂ ವ್ಯಕ್ತಿಗಳ ತೇಜೋ ವಧೆ ಮಾಡುವ ಪೋಸ್ಟ್ ಗಳನ್ನು ನಿರ್ಬಂಧಿಸುವ ದೃಷ್ಟಿಯಿಂದ ರಾಜ್ಯಕ್ಕೆ ಪ್ರತ್ಯೇಕವಾಗಿ ಅನ್ವಯವಾಗುವಂತಹ ಕಠೋರ ಕಾಯ್ದೆಯೊಂದನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸಂದೇಶಗಳನ್ನು ಹರಿಯ ಬಿಡಲಾಗುತ್ತಿದ್ದು, ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ. ಜೊತೆಗೆ ಕೆಲವು ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ತೇಜೋವಧೆ ಮಾಡುವ ರೀತಿಯಲ್ಲಿ ಪೋಸ್ಟ್ ಗಳನ್ನು ಹಾಕಲಾಗುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಆಸಕ್ತಿ ವಹಿಸಿದ್ದು, ಪ್ರತ್ಯೇಕ ಕಾನೂನು ರಚನೆಯ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ, ಸಚಿವರು, ಸರ್ಕಾರದ ವಿರುದ್ಧ ಆಧಾರ ರಹಿತ ಸುದ್ದಿಗಳನ್ನು ನಿತ್ಯ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮಾಡಲಾಗುತ್ತದೆ. ವಿದೇಶಗಳಲ್ಲಿ ಫೋಸ್ಟ್ ಮಾಡಲಾಗುತ್ತದೆ. ಸಂಬಂಧಪಟ್ಟ ಸಂಸ್ಥೆಗಳಿಗೆ ಪತ್ರ ಬರೆದರೂ ಸರಿಯಾದ ರೀತಿಯಲ್ಲಿ ಸ್ಪಂದನೆ ಸಿಗುತ್ತಿಲ್ಲ. ಹೀಗಾಗಿ ಫೇಕ್ ಸುದ್ದಿಗಳಿಗೆ ಕಡಿವಾಣ ಹಾಕಲು ಗಂಭೀರ ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಸೈಬರ್ ಅಪರಾಧಗಳಿಗೆ ಸಂಬಂಧಪಟ್ಟಂತೆ ರಾಷ್ಟ್ರೀಯ ಮಟ್ಟದ ಕಾನೂನುಗಳಿವೆ. ರಾಜ್ಯದ ಕಾನೂನುಗಳಿಲ್ಲ. ಹೀಗಾಗಿ ರಾಜ್ಯಮಟ್ಟದಲ್ಲೂ ಕಾನೂನು ಜಾರಿಗೆ ಚಿಂತನೆ ನಡೆಸಿದೆ. ಅಷ್ಟೇ ಅಲ್ಲ ಸೈಬರ್ ಅಪರಾಧಗಳನ್ನು ತಡೆಗಟ್ಟುವ ದೃಷ್ಟಿಯಿಂದ ಗೃಹ ಇಲಾಖೆ ಹಾಗೂ ಐಟಿ ಇಲಾಖೆಯ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗುವುದು. ಇದರಲ್ಲಿ ಐಟಿ ಪರಿಣಿತರು ಕಾನೂನು ತಜ್ಞರನ್ನು ವಿಶೇಷ ಆಹ್ವಾನಿತರಾಗಿ ನೇಮಕ ಮಾಡಲಾಗುವುದು ಎಂದು ತಿಳಿಸಿದರು.

ನ್ಯಾಯಾಂಗ ತನಿಖೆ: ಬಿಜೆಪಿ ಸರ್ಕಾರದ ವಿರುದ್ಧ ಕೇಳಿ ಬಂದಿದ್ದ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಶೇಕಡ 40ರಷ್ಟು ಕಮಿಷನ್ ಆರೋಪದ ಬಗ್ಗೆ ತನಿಖೆ ನಡೆಸಲು ವಿಚಾರಣಾ ಆಯೋಗ ನೇಮಕ ಮಾಡಲು ನಿರ್ಧರಿಸಲಾಗಿದೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚಿಸಲು ಸಿದ್ಧತೆಗಳು ನಡೆದಿದೆ ಎಂದು ತಿಳಿಸಿದರು.

Leave a Reply