ಬೆಂಗಳೂರು: ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಕೃಷಿ ಇಲಾಖೆ ಅಧಿಕಾರಿಗಳು ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧ ಲಂಚ ಆರೋಪ ಮಾಡಿ, ರಾಜ್ಯಪಾಲರಿಗೆ ಬರೆದಿರುವ ಪತ್ರದ ಬಗ್ಗೆ ಪೊಲೀಸರಿಗೆ ತನಿಖೆ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿಯ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಮಂತ್ರಿಗಳ ವಿರುದ್ಧ ಬರೆದಿರುವ ಪತ್ರದ ಕುರಿತಂತೆ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಕುಮಾರ್ ಸ್ಪಷ್ಟನೆ ನೀಡಿದ್ದು, ಇಂತಹ ಪತ್ರವನ್ನು ಅಧಿಕಾರಿಗಳು ಬರೆದಿಲ್ಲ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ ಈ ಪತ್ರದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ತನಿಖೆ ಮಾಡಿ ಸತ್ಯ ಬಯಲಿಗೆಳೆಯಲು ಸೂಚಿಸಲಾಗಿದೆ ಎಂದರು.
ಟಿಕ್ ಟಿಕ್ ಸಿದ್ದರಾಮಯ್ಯ: ಮತ್ತೊಂದೆಡೆ ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ. ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ ‘ಸಿದ್ದಕಲೆ’ ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಧಿಕಾರಿಗಳಿಂದ ವಸೂಲಿ ಆರೋಪ ಎದುರಿಸುತ್ತಿರುವ ಕೃಷಿ ಸಚಿವರ ವಿರುದ್ಧ ರಾಜ್ಯಪಾಲರಿಗೆ ಬರೆದಿರುವ ದೂರಿನ ಪತ್ರದ ಸೃಷ್ಟಿಕರ್ತರು “ನಿಮ್ಮ ಬ್ರದರ್ರೋ”? ಎಂದು ಪ್ರಶ್ನಿಸಿದ್ದಾರೆ.
ಕಂಡೋರ ಭುಜದ ಮೇಲೆ ಬಂದೂಕಿಟ್ಟು ಇನ್ನೊಬ್ಬರ ರಾಜಕೀಯ ಜೀವನ ಎತ್ತಿಬಿಡುವ ನಿಮ್ಮಂಥ ‘ಎತ್ತುವಳಿ ಗಿರಾಕಿ’ಗೆ ನಕಲಿಪತ್ರಗಳ ಸೃಷ್ಟಿ ಬೆಣ್ಣೆ ಕಡಿದಷ್ಟೇ ಸಲೀಸು. ಮತ್ತೊಬ್ಬರ ಶ್ರಮದ ಬೆವರೇ ನಿಮ್ಮ ಸ್ವಾರ್ಥ ರಾಜಕಾರಣಕ್ಕೆ ಹವಿಸ್ಸು ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಶಾಸಕರೇ ಬರೆದ ಪತ್ರವನ್ನೇ ನಕಲಿ ಎಂದು ಬಿಂಬಿಸಿದ ‘ನಕಲಿರಾಮ’ನ ಉಪ್ಪುಹುಳಿ ಖಾರದ ಬಗ್ಗೆ ನನಗೆ ಗೊತ್ತಿಲ್ಲದ್ದೇನಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಉಗಿದು ಉಪ್ಪಾಕಿದ ಮೇಲೆ ಆ ನಕಲಿ ಪತ್ರ ‘ಅಸಲಿ’ಯಾದ ಕಥೆಯ ಹಕೀಕತ್ತು ಏನಿರಬಹುದು ಸಿಎಂ ಸಾಹೇಬರೇ? ಎಂದು ಪ್ರಶ್ನಿಸಿದ್ದಾರೆ.
ನಿಮ್ಮ ರಾಜಕೀಯ ಬದುಕಿಗೆ ಬ್ಲ್ಯಾಕ್’ಮೇಲೇ ಬಂಡವಾಳ. ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ‘ಅಪ್ಪಯ್ಯ ಮತ್ತು ಅತೀಂದ್ರನ ಆಟಾಟೋಪ’ ಕಂಡು ಹೌಹಾರಿದವರು ಯಾರು? ವರ್ಗಾವಣೆ ಪಟ್ಟಿಗೆ ಅಲ್ಲಿ ಬಿದ್ದ ಟಿಕ್ಕುಗಳ ಲೆಕ್ಕ ಹೇಳಬೇಕಾ ಟಿಕ್ ಟಿಕ್ ಸಿದ್ದರಾಮಯ್ಯ?? ಎಂದು ಎಚ್ಚರಿಕೆ ನೀಡಿದ್ದಾರೆ.




