ಬೆದರಿಕೆ ಪತ್ರ ಬರೆಯುವವರನ್ನು ಬೆಂಬಲಿಸುವವರ ಕೈಗೆ ಅಧಿಕಾರ ಕೊಟ್ಟು ಯಾರಿಗೆ ಬಂತು, ಎಲ್ಲಿಗೆ ಬಂತು 47ರ ಸ್ವಾತಂತ್ರ್ಯ ಎಂದು ಪ್ರಶ್ನಿಸಿದರೆ ಹೇಗೆ?: ಸಿದ್ದರಾಮಯ್ಯ

3 years ago

#question #freedom47 #giving #power #support #write #threatening #letters #siddaramaiah

ಬೆಂಗಳೂರು: ದೇಶದ ದೊಡ್ಡ ಉದ್ಯಮಿಗಳಾದ ಅಂಬಾನಿ-ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರು, ಮಧ್ಯಮ ವರ್ಗದವರ ಉದ್ದಾರ ಸಾಧ್ಯವಿಲ್ಲ. ಇದರ ಬದಲು ಜನ ಸಾಮಾನ್ಯರಾದ ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ ಆರ್ಥಿಕತೆ ಬೆಳವಣಿಗೆ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಆದಿಜಾಂಬವರ ಸಾಂಸ್ಕೃತಿಕ ಸಮಿತಿ ಹಮ್ಮಿಕೊಂಡಿದ್ದ ಖ್ಯಾತ ಸಾಹಿತಿ, ಡಾ.ಸಿದ್ದಲಿಂಗಯ್ಯ ಅವರ ಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ, ಸಿದ್ದಲಿಂಗಯ್ಯ ಅವರ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ದುಡಿಯುವವರ, ಶ್ರಮಿಕರ ಜೇಬಿನಲ್ಲಿ ಹಣ ಇದ್ದರೆ ಅವರು ದೇಶದ ಆರ್ಥಿಕತೆಯ ಬೆಳವಣಿಗೆಗೆ ಕಾರಣರಾಗುತ್ತಾರೆ. ಕೇವಲ ಅಂಬಾನಿ ಅದಾನಿ ಜೇಬು ತುಂಬಿಸುವವರ ಕೈಗೆ ಅಧಿಕಾರ ಕೊಟ್ಟು ಇಡಿ ದೇಶ ಪರಿತಪಿಸುವಂತಾಗಿದೆ ಎಂದರು.

ಇದೇ ಕಾರಣಕ್ಕೆ ನಮ್ಮ ಸರ್ಕಾರ ತಿಮ್ಮ-ಬೋರ-ಕಾಳನಂತಹ ಶ್ರಮಿಕ ವರ್ಗದ ಜೇಬಿಗೆ ಹಣ ಹಾಕುವ ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ ಕಾರ್ಯಕ್ರಮಗಳನ್ನು ಜಾರಿ ಮಾಡಿ ಜನರ ಜೇಬಿಗೆ ಹಣ ಹಾಕುವ ಕೆಲಸಕ್ಕೆ ಮುಂದಾಗಿದ್ದೇವೆ. ಇದರಿಂದ ನಮ್ಮ ಆರ್ಥಿಕತೆ ಚೈತನ್ಯ ಪಡೆದುಕೊಳ್ಳುತ್ತಿದೆ ಎಂದರು.

ಸಂವಿಧಾನದ ವಿರೋಧಿಗಳ ಕೈಗೆ ಅಧಿಕಾರ ಕೊಟ್ಟು ಸಮಾನತೆ ಬರಬೇಕು ಎಂದರೆ ಹೇಗೆ ಸಾಧ್ಯ? ಅಂಬಾನಿ-ಅದಾನಿಯವರ ಜೇಬು ತುಂಬಿಸುವವರ ಕೈಗೆ ಕೇಂದ್ರದಲ್ಲಿ ಅಧಿಕಾರ ಕೊಟ್ಟು ಬಡವರ, ಮಧ್ಯಮ ವರ್ಗದವರ ಉದ್ಧಾರ ಆಗಬೇಕು ಎಂದರೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಸಿದ್ದಲಿಂಗಯ್ಯ ಅವರ ಆಶಯಗಳನ್ನು ಬದುಕಿನಲ್ಲಿ ಇಟ್ಟುಕೊಂಡವರಿಗೆ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಈ ಬೆದರಿಕೆ ಪತ್ರ ಬರೆಯುವವರನ್ನು ಬೆಂಬಲಿಸುವವರ ಕೈಗೆ ಅಧಿಕಾರ ಕೊಟ್ಟು ಯಾರಿಗೆ ಬಂತು, ಎಲ್ಲಿಗೆ ಬಂತು 47 ರ ಸ್ವಾತಂತ್ರ್ಯ ಎಂದು ಪ್ರಶ್ನಿಸಿದರೆ ಹೇಗೆ ಎಂದು ಸಭಿಕರನ್ನು ಪ್ರಶ್ನಿಸಿದರು.

ಮಾಜಿ ಸಚಿವ ಹೆಚ್.ಆಂಜನೇಯ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ.ಮಹದೇವಪ್ಪ, ಹಿರಿಯ ಸಾಹಿತಿಗಳಾದ ಕೆ.ಮರುಳಸಿದ್ದಪ್ಪ, ಎಸ್.ಜಿ.ಸಿದ್ದರಾಮಯ್ಯ, ಅಗ್ರಹಾರ ಕೃಷ್ಣಮೂರ್ತಿ ಹಾಗೂ ಪ್ರಜಾವಾಣಿ ಪತ್ರಿಕೆ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್, ಶಿಕ್ಷಣ ತಜ್ಞ ನಿರಂಜನಾರಾಧ್ಯ, ಇಂದಿರಾ ಕೃಷ್ಣಪ್ಪ, ಪ್ರೊ.ಜಾಫೆಟ್, ಡಾ.ಮಾನಸ ಸಿದ್ದಲಿಂಗಯ್ಯ ಸೇರಿ ಹಲವರು ಉಪಸ್ಥಿತರಿದ್ದರು.

Leave a Reply