ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡಿರುವ ‘ತೇಜ್’ಚಂಡಮಾರುತದಿಂದ ರಾಜ್ಯಕ್ಕೆ ಯಾವುದೇ ಅಪಾಯವಿಲ್ಲ ಎಂದು ರಾಜ್ಯ ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ ಎಂದು ಇಲಾಖೆ ಹೇಳಿದೆ.
ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ಕಲಬುರಗಿ, ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 2–3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರುತ್ತದೆ. ಕೆಲವು ಕಡೆಗಳಲ್ಲಿ ಮುಂಜಾನೆ ಮಂಜು ಕವಿದ ವಾತಾವರಣ ಇರುತ್ತದೆ ಎಂದು ಹೇಳಿದೆ.




