ಬೆಂಗಳೂರು: ಬೆಳಗಾವಿ ಜಿಲ್ಲೆಯ ಹೊಸ ವಂಟಮೂರಿ ಗ್ರಾಮದ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಲಾದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಪೂರ್ಣಗೊಳಿಸಿರುವ ಪೊಲೀಸರು ಈ ತಿಂಗಳಾಂತ್ಯದಲ್ಲಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸುವ ನಿರೀಕ್ಷೆ ಇದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ಘಟನೆ ಕುರಿತು ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ರಿಟ್ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸರ್ಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಪ್ರತಿಮಾ ಹೊನ್ನಾಪುರ, ಈ ಕುರಿತ ಸವಿವರವಾದ ಮೆಮೊ ಅನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡಿತು.




