ಬೆಂಗಳೂರು: ಲೋಕಸಭೆ ಚುನಾವಣೆ ಸನಿಹವಾಗುತ್ತಿರುವ ಬೆನ್ನಲ್ಲೇ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಕುತೂಹಲಕರ ಘಟ್ಟ ತಲುಪಿವೆ. ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ದೇಶದ ಪ್ರಧಾನಿಯಾಗಿಸಬೇಕು ಎಂಬ ಉದ್ದೇಶದೊಂದಿಗೆ ಎನ್ ಡಿ ಎ ಮೈತ್ರಿಕೂಟ ಸೇರಿರುವ ಜೆಡಿಎಸ್ ತನಗೆ ಬೇಕಾಗಿರುವ ಲೋಕಸಭಾ ಕ್ಷೇತ್ರಗಳ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಆದರೆ ಈಗಾಗಲೇ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ಶುರುವಾಗಿದೆ.
ಅದರಲ್ಲೂ ಜೆ ಡಿ ಎಸ್ ನ ಭದ್ರಕೋಟೆ ಎನಿಸಿರುವ ಹಾಸನದಲ್ಲಿ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ಎಂದು ಮಾಜಿ ಪ್ರಧಾನಿ ದೇವೇಗೌಡ ಅವರು ಈಗಾಗಲೇ ಘೋಷಿಸಿದ್ದಾರೆ. ಆದರೆ ಇದಕ್ಕೆ ಬಿಜೆಪಿಯ ಹಲವು ಮುಖಂಡರು ಮತ್ತು ಜೆಡಿಎಸ್ ನ ಒಂದು ವರ್ಗ ಭಾರೀ ವಿರೋಧವ್ಯಕ್ತಪಡಿಸಿವೆ.
ಗೆಲ್ಲುವ ಸಾಧ್ಯತೆ ಕುರಿತಂತೆ ಆಂತರಿಕ ವಲಯದಲ್ಲಿ ನಡೆಸಲಾಗಿರುವ ಸಮೀಕ್ಷೆಯಲ್ಲಿ ಪ್ರಜ್ವಲ್ ರೇವಣ್ಣ ಪರವಾದ ಅಭಿಪ್ರಾಯ ವ್ಯಕ್ತವಾಗಿಲ್ಲ. ಅಲ್ಲದೆ ಜೆಡಿಎಸ್ ನ ಕಾರ್ಯಕರ್ತರ ದೊಡ್ಡ ಬಣ ಮತ್ತು ಬಹುತೇಕ ಬಿಜೆಪಿಯ ಎಲ್ಲ ಕಾರ್ಯಕರ್ತರು ಪ್ರಜ್ವಲ್ ರೇವಣ್ಣ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರು ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬದಲಾವಣೆ ಮಾಡುವ ನಿಟ್ಟಿನಲ್ಲಿ ಚರ್ಚೆ ಆರಂಭಿಸಿದ್ದಾರೆ ಎಂದು ಗೊತ್ತಾಗಿದೆ. ಈ ಬೆಳವಣಿಗೆ ಮತ್ತೊಮ್ಮೆ ಈ ಜೆಡಿಎಸ್ ನ ದೊಡ್ಡ ಕುಟುಂಬದಲ್ಲಿ ಬಿರುಗಾಳಿ ಎಬ್ಬಿಸುವ ಸೂಚನೆ ನೀಡಿದೆ.
ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಹಾಸನ ವಿಧಾನಸಭೆ ಕ್ಷೇತ್ರದಿಂದ ಕಣಕ್ಕಿಳಿಯಲು ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಶತಪ್ರಯತ್ನ ನಡೆಸಿದರು. ಆದರೆ ಅದಕ್ಕೆ ಕುಮಾರಸ್ವಾಮಿ ಅವಕಾಶ ನೀಡಲಿಲ್ಲ. ಇದರ ವಿರುದ್ಧ ರೇವಣ್ಣ ಮತ್ತು ಭವಾನಿ ರೇವಣ್ಣ ಸಿಡಿದೆದ್ದರಾದರೂ ಅಂತಿಮವಾಗಿ ದೇವೇಗೌಡರ ಮಧ್ಯೆ ಪ್ರವೇಶದಿಂದ ಬಿಕ್ಕಟ್ಟು ಶಮನವಾಗಿತ್ತು.
ಈಗ ಲೋಕಸಭೆ ಚುನಾವಣೆ ಸನಿಹವಾಗುತ್ತಿದ್ದು ಪ್ರಜ್ವಲ್ ರೇವಣ್ಣ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿಯಲು ವೇದಿಕೆ ಸಜ್ಜುಗೊಳ್ಳುತ್ತಿದೆ. ಆದರೆ, ಕುಮಾರಸ್ವಾಮಿ ಮತ್ತೆ ತಮ್ಮ ಕುಟುಂಬದ ವಿರುದ್ಧ ಇದ್ದಾರೆ ಎಂದು ಭಾವಿಸಿರುವ ರೇವಣ್ಣ ಕುಟುಂಬ ಕುಮಾರಸ್ವಾಮಿ ವಿರುದ್ಧ ತಿರುಗಿ ಬೀಳಲು ಸಜ್ಜುಗೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಒಂದು ವೇಳೆ ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಅವರಿಗೆ ಜೆಡಿಎಸ್ ಟಿಕೆಟ್ ನಿರಾಕರಿಸಿದ್ದೆ ಆದಲ್ಲಿ ಅವರು ಕಾಂಗ್ರೆಸ್ ಗೆ ಪಕ್ಷಾಂತರ ಮಾಡಿ ಕಾಂಗ್ರೆಸ್ ನಿಂದ ಟಿಕೆಟ್ ಪಡೆಯಲು ಪ್ರಯತ್ನ ನಡೆಸಿದ್ದಾರೆ ಎಂದು ವರದಿಯಾಗಿದೆ.
ಈ ನಿಟ್ಟಿನಲ್ಲಿ ಎಚ್.ಡಿ.ರೇವಣ್ಣ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಸದಸ್ಯ ಸೂರಜ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ. ಈ ವಿಷಯದ ಕುರಿತು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಸುದೀರ್ಘ ಕಾಲ ಮಾತುಕತೆ ನಡೆಸಿರುವುದು ಹಲವಾರು ವ್ಯಾಖ್ಯಾನಗಳಿಗೆ ಕಾರಣವಾಗಿದೆ.
ಸೂರಜ್ ಅವರು ತಮ್ಮ ಕುಟುಂಬ ಕಾಂಗ್ರೆಸ್ ಸೇರಲು ಸಿದ್ಧವಿದೆ ಎಂಬ ಮಾಹಿತಿ ರವಾನಿಸಿದ್ದಾರೆ ಎಂಬ ಚರ್ಚೆಗಳು ನಡೆಯುತ್ತಿವೆ. ಮತ್ತೊಂದೆಡೆ ಈ ಭೇಟಿಯ ಮೂಲಕ ಕುಮಾರಸ್ವಾಮಿ ಅವರಿಗೆ ಸಂದೇಶವೊಂದನ್ನು ರವಾನಿಸಿದ್ದಾರೆ ಎನ್ನಲಾಗುತ್ತಿದೆ.




