ಬಳ್ಳಾರಿ: ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣನವರ ಆದರ್ಶ ಜೀವನ ನಮಗೆಲ್ಲಾ ಮಾದರಿಯಾಗಿದ್ದು, ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ “ಜಗಜ್ಯೋತಿ ಬಸವಣ್ಣ-ಸಾಂಸ್ಕೃತಿಕ ನಾಯಕ” ಬರಹವುಳ್ಳ ಭಾವಚಿತ್ರ ಅನಾವರಣ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಬಸವಣ್ಣನವರು ಲಿಂಗ, ಜಾತಿ ಮತ್ತು ಸಾಮಾಜಿಕ ಸ್ಥಾನಮಾನವನ್ನು ಲೆಕ್ಕಿಸದೆ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡುವ ಮೂಲಕ ಹೊಸ ಜೀವನ ವಿಧಾನವನ್ನು ಪ್ರತಿಪಾದಿಸಿದವರು ಎಂದರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮಾತನಾಡಿ, ಬಸವಣ್ಣನವರು ಎಲ್ಲಾ ವರ್ಗದ ಜನರ ಶೋಷಣೆ ವಿರುದ್ಧ ಹೋರಾಡಿದವರು. ಆದರ್ಶ ಸಮಾಜದ ಪರಿಕಲ್ಪನೆ ಮೂಡಿಸಿದವರು ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ.ನಿಷ್ಠಿರುದ್ರಪ್ಪ ಮಾತನಾಡಿ, 12ನೇ ಶತಮಾನದಲ್ಲಿಯೇ ಶೋಷಣೆ ವಿರುದ್ಧ ಧ್ವನಿ ಎತ್ತಿದವರು. ತಮ್ಮ ತಮ್ಮ ಕಾಯಕ, ನಿಷ್ಠೆಗಳಿಂದ ಎಲ್ಲರೂ ಗೌರವದಿಂದ ಮತ್ತು ಸಮಾನರಾಗಿ ಬಾಳ್ವೆ ನಡೆಸಬೇಕು ಎಂದು ತೋರಿಸಿಕೊಟ್ಟವರು ಎಂದರು.
ಬಸವಣ್ಣನವರ ವಚನಗಳು ಕನ್ನಡ ಸಾಹಿತ್ಯದ ವಿಶಿಷ್ಟ ರೂಪವಾಗಿದ್ದು, ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿವೆ. ಜನರಲ್ಲಿ ಜಾಗೃತಿ ಮೂಡಿಸುತ್ತಾ ಸಾಮಾಜಿಕ ಸುಧಾರಣೆಗಳಿಗೆ ಅಡಿಪಾಯ ಹಾಕಿದವರು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಸವಣ್ಣನವರನ್ನು ನಾಡಿನ ಸಾಂಸ್ಕೃತಿಕ ನಾಯಕ ಎಂದು ಘೋಷಿರುವುದು ಸಂತೋಷದ ವಿಷಯ ಎಂದರು.
ಕಾರ್ಯಕ್ರಮದಲ್ಲಿ ಕೆ.ದೊಡ್ಡ ಬಸಪ್ಪ ಗವಾಯಿ ಅವರು ಬಸವಣ್ಣನವರ ಕುರಿತ ವಚನ ಗಾಯನ ಪ್ರಸ್ತುತ ಪಡಿಸಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಮುಖಂಡರು, ಇನ್ನಿತರರು ಹಾಜರಿದ್ದರು.




