ಬೆಂಗಳೂರು: ಬರ ಘೋಷಿತ ತಾಲ್ಲೂಕುಗಳಲ್ಲಿ ಕುಡಿಯುವ ನೀರು ಮತ್ತು ಮೇವು ಒದಗಿಸಲು ಶಾಸಕರ ಅಧ್ಯಕ್ಷತೆಯಲ್ಲಿ 15 ದಿನಗಳಿಗೊಮ್ಮೆ ಟಾಸ್ಕ್ ಫೋರ್ಸ್ ಸಭೆ ನಡೆಸಲಾಗುತ್ತಿದ್ದು, ಡಿಸೆಂಬರ್ ನಿಂದ ಈವರೆಗೆ ತಾಲೂಕು ಮಟ್ಟದ 600 ಸಭೆಗಳನ್ನು ನಡೆಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.
ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳ ಮಾಸಿಕ ಸಭೆಯ ನಡುವೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಫೆಬ್ರವರಿ ಒಂದೇ ತಿಂಗಳಲ್ಲಿ 154 ಟಾಸ್ಕ್ ಫೋರ್ಸ್ ಸಭೆ ನಡೆಸಲಾಗಿದೆ. ಬರ ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.
ಬರ ನಿರ್ವಹಣೆಗಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ರೂ. 725.92 ಕೋಟಿ ಹಾಗೂ ತಹಶೀಲ್ದಾರ್ ಖಾತೆಯಲ್ಲಿ ರೂ.135.40 ಕೋಟಿ ಸೇರಿದಂತೆ ಒಟ್ಟು ರೂ. 861.32 ಕೋಟಿ ಅನುದಾನವು ಬರಪರಿಹಾರ ಕಾರ್ಯ ಕೈಗೆತ್ತಿಕೊಳ್ಳಲು ಲಭ್ಯವಿದೆ ಎಂದರು.



