ಬಳ್ಳಾರಿ: ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು, ಸಿಬ್ಬಂದಿ ಕಾರ್ಯಪ್ರವೃತ್ತರಾಗಿ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ನೋಡಲ್ ಅಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು, ಬಿಎಲ್ಒಅಗಳಿಗೆ ಸೂಚಿಸಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಲೋಕಸಭೆ ಸಾರ್ವತ್ರಿಕ ಚುನಾವಣೆ 2024ರ ಘೋಷಣೆಯಾದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಚುನಾವಣಾ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, 24, 48 ಹಾಗೂ 72 ಗಂಟೆಗಳಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮೂರು ವಿವಿಧ ಭಾಗಗಳಲ್ಲಿ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದರು.
ಮೊದಲ ಹಂತದಲ್ಲಿ 24 ಗಂಟೆಯೊಳಗೆ ಸರ್ಕಾರದ ಜಾಹೀರಾತುಗಳು, ಎರಡನೇ ಹಂತದಲ್ಲಿ 48 ಗಂಟೆಯೊಳಗೆ ಸರ್ಕಾರಿ ಸ್ವಾಮ್ಯದ ನಿಗಮ ಮಂಡಳಿಗಳು ಹಾಗೂ ಮೂರನೇ ಹಂತದಲ್ಲಿ 72 ಗಂಟೆಯೊಳಗೆ ಖಾಸಗಿ ವಲಯದಲ್ಲಿ ನೀತಿ ಸಂಹಿತೆಗೆ ವಿರುದ್ದವಾದ ಜಾಹೀರಾತುಗಳನ್ನು ತೆಗೆಯಬೇಕಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಗ್ರಾಪಂ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ರಾಜಕೀಯ ಪಕ್ಷಗಳ ಬ್ಯಾನರ್, ಫ್ಲೆಕ್ಸ್, ಉದ್ಘಾಟನೆಗೊಂಡ ಕಾಮಗಾರಿಗಳ ಫಲಕಗಳು, ಗ್ರಾಮ, ನಗರಗಳ ಸ್ವಾಗತ ಕಮಾನುಗಳು ಹಾಗೂ ಕೊಡುಗೆ ನೀಡಿದ ವಸ್ತುಗಳ ಮೇಲೆ ರಾಜಕೀಯ ವ್ಯಕ್ತಿಗಳ ಹಾಗೂ ಜನಪ್ರತಿನಿಧಿಗಳ ಭಾವಚಿತ್ರ ತೆರವುಗೊಳಿಸುವಂತೆ ಕ್ರಮ ವಹಿಸಬೇಕು. ಸರಕಾರಿ ಸ್ವಾಮ್ಯದ ಅತಿಥಿ ಗೃಹಗಳಲ್ಲಿ ಯಾವುದೇ ರಾಜಕೀಯ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು ಎಂದು ಸಂಬಂಧ ಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಎಂಸಿಸಿ ತಂಡಗಳು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಎಚ್ಚರ ವಹಿಸಬೇಕು. ಸಹಾಯಕ ವೆಚ್ಚ ವೀಕ್ಷಕರು, ಫ್ಲೈಯಿಂಗ್ ಸ್ಕ್ವಾಡ್, ವೀಡಿಯೋ ಸರ್ವೆಲನ್ಸ್, ವೀಡಿಯೋ ವಿವ್ಹಿಂಗ್ ತಂಡಗಳು, ಸ್ಟ್ಯಾಟಿಕ್ ಸರ್ವೆಲನ್ಸ್ ತಂಡಗಳು ಜಾಗೃತರಾಗಿ ಕಾರ್ಯನಿರ್ವಹಿಸಬೇಕು ಎಂದರು.
ಜಿಲ್ಲೆಯಲ್ಲಿ ಮತ್ತು ಗಡಿಜಿಲ್ಲೆ ಭಾಗದಲ್ಲಿ ಚೆಕ್ ಪೋಸ್ಟ್ ಗಳು ಕಾರ್ಯಪ್ರವೃತ್ತವಾಗಬೇಕು. ಸಮರ್ಪಕ ವಿದ್ಯುತ್ ಸಂಪರ್ಕ ವ್ಯವಸ್ಥೆ ಮಾಡಿಕೊಳ್ಳಬೇಕು. ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದರು.
ಅಲ್ಲದೇ, 103 ಪೊಲೀಸ್ ಇನ್ಸ್ಪೆಕ್ಟರ್ ನಿಯೋಜನೆಗೊಂಡ ಅಧಿಕಾರಿಗಳು ಚುನಾವಣಾ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಚುನಾವಣಾ ಆಯೋಗದ ನಿರ್ದೇಶನಗಳನ್ನು ಅಚ್ಚುಕಟ್ಟಾಗಿ ಪಾಲಿಸಬೇಕು ಎಂದರು.
ಮತದಾರ ಚುನಾವಣಾ ಗುರುತಿನ ಚೀಟಿಯಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ನೀಡಲು ಸಾರ್ವಜನಿಕ ವಲಯದಲ್ಲಿ ಸಹಾಯವಾಣಿ ಸಂಖ್ಯೆ 1950 ಕುರಿತು ಹೆಚ್ಚು ಪ್ರಚಾರ ನೀಡಬೇಕು ಎಂದು ತಿಳಿಸಿದರು.
ಅಗತ್ಯವಿರುವ 85 ವರ್ಷ ಮೇಲ್ಪಟ್ಟ ವಯಸ್ಕರು ಮತ್ತು ವಿಶೇಷಚೇತನರಿಗೆ ಮಾತ್ರ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಬೇಕು. ಇಲ್ಲವಾದಲ್ಲಿ ಮತಗಟ್ಟೆ ಕೇಂದ್ರಗಳಿಗೆ ತೆರಳಿ ಮತದಾನ ಮಾಡುವಂತೆ ಸೂಚಿಸಬೇಕು ಎಂದರು.
ಜಿಲ್ಲಾ ಸ್ವೀಪ್ ಸಮಿತಿಯ ನೋಡೆಲ್ ಅಧಿಕಾರಿ ಹಾಗೂ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಮಾತನಾಡಿ, ಜಿಲ್ಲೆಯಲ್ಲಿ ಶೇಕಡಾವಾರು ಮತದಾನ ಪ್ರಮಾಣ ಹೆಚ್ಚಿಸಲು ಎಂಸಿಸಿ ಸಮಿತಿಯಿಂದ ಹಲವಾರು ಕಾರ್ಯಕ್ರಮಗಳ ಪಟ್ಟಿ ಮಾಡಿಕೊಳ್ಳಲಾಗಿದೆ. ಇದಕ್ಕೆ ಎಲ್ಲಾ ಇಲಾಖೆಯ ಅಧಿಕಾರಿಗಳು ಕೈಜೋಡಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್, ಸಹಾಯಕ ಆಯುಕ್ತ ಹೇಮಂತ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರು ಹಾಗೂ ತಾಪಂ ಇಓಗಳು ಇದ್ದರು.




