ಮರಾಠಿ ಶಿಕ್ಷಕರ ನೇಮಕ ವಿಷಯದಲ್ಲಿ ರಾಷ್ಟ್ರಪತಿ ಮಧ್ಯಪ್ರವೇಶಿಸಲಿ: ಪುರುಷೋತ್ತಮ ಬಿಳಿಮಲೆ

2 years ago

ಬೆಂಗಳೂರು: ಮಹಾರಾಷ್ಟ್ರದ ಸೊಲ್ಲಾಪುರ ಮತ್ತು ಸಾಂಗ್ಲಿ ಜಿಲ್ಲೆಗಳಲ್ಲಿರುವ ಭಾಷಾ ಅಲ್ಪಸಂಖ್ಯಾತ ಶಾಲೆಗಳಾದ ಕನ್ನಡ ಮಾಧ್ಯಮದ ಶಾಲೆಗಳಲ್ಲಿ ಮರಾಠಿ ಶಿಕ್ಷಕರನ್ನು ನೇಮಿಸಿರುವ ಕುರಿತು ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮನವಿ ಮಾಡಿದೆ.

ಈ ಕುರಿತು ರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಮಹಾರಾಷ್ಟ್ರದ ಸೊಲ್ಲಾಪುರ ಮತ್ತು ಸಾಂಗ್ಲಿ ಜಿಲ್ಲೆಗಳಲ್ಲಿನ ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನು ನೇಮಿಸುವ ಮೂಲಕ ಕನ್ನಡಿಗರ ಸಂಸ್ಕೃತಿ, ಪರಂಪರೆಗೆ ಧಕ್ಕೆಯನ್ನುಂಟು ಮಾಡುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಾಂಗ್ಲಿ ಮತ್ತು ಸೊಲ್ಲಾಪುರ ಜಿಲ್ಲೆಗಳಲ್ಲಿ 40 ಸಾವಿರಕ್ಕಿಂತ ಹೆಚ್ಚಿನ ಮಕ್ಕಳು ಕನ್ನಡ ಭಾಷೆಯಲ್ಲಿ ಶಿಕ್ಷಣ ಪಡೆಯುತ್ತಾರೆ. ಸುಮಾರು 300ಕ್ಕಿಂತಲು ಹೆಚ್ಚಿಗೆ ಕನ್ನಡ ಶಾಲೆಗಳಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಮಹಾರಾಷ್ಟ್ರ ಸರ್ಕಾರ ಕನ್ನಡ ಶಾಲೆಗಳಿಗೆ ಕನ್ನಡದ ಅಧ್ಯಾಪಕರನ್ನು ನೇಮಿಸಬೇಕಿತ್ತು. ಆದರೆ ಮರಾಠಿ ಶಿಕ್ಷಕರನ್ನು ನೇಮಿಸುವ ಮೂಲಕ ಕನ್ನಡ ವಿರೋಧಿ ನಿಲುವನ್ನು ಮಹಾರಾಷ್ಟ್ರ ಸರ್ಕಾರ ತಳೆಯುತ್ತಿದೆ ಎಂದಿದ್ದಾರೆ.

ಭಾಷಾ ಕಲಿಕೆಯ ದೃಷ್ಟಿಯಿಂದ ಇದೊಂದು ಅವೈಜ್ಞಾನಿಕ ವಿಧಾನ. ಏಕೆಂದರೆ ಇಂಡೋ ಆರ್ಯನ್ ಭಾಷಾ ಗುಂಪಿಗೆ ಸೇರಿದ ಮರಾಠಿಯ ಕಲಿಕೆ ಮತ್ತು ಕಲಿಸುವ ವಿಧಾನಗಳು ಬೇರೆ. ದ್ರಾವಿಡ ಭಾಷಾ ಗುಂಪಿಗೆ ಸೇರಿದ ಕನ್ನಡವನ್ನು ಕಲಿಸುವ ಮತ್ತು ಕಲಿಯುವ ವಿಧಾನಗಳು ಬೇರೆ. ಹೀಗಾಗಿ ಮಹಾರಾಷ್ಟ್ರ ಸರ್ಕಾರ ಕನ್ನಡ ಮಾಧ್ಯಮ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನು ನೇಮಿಸಿರುವುದು ಭಾಷಾ ಕಲಿಕೆಯ ದೃಷ್ಟಿಯಿಂದ ಅಪ್ರಸ್ತುತ ಎಂದಿದ್ದಾರೆ.

Leave a Reply