ಬೆಂಗಳೂರು: ರಾಜ್ಯ ಸರ್ಕಾರ 40% ಕಮಿಷನ್ ವಸೂಲಿ ಮಾಡುತ್ತಿದೆ ಎಂದು ಆರೋಪಿಸಿ ಒಂದು ಲಕ್ಷ ಗುತ್ತಿಗೆದಾರರು ಸದಸ್ಯರಾಗಿರುವ ಸಂಘದವರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಪ್ರಾಮಾಣಿಕರಾಗಿದ್ದರೆ ಬಿಜೆಪಿಯ ಭ್ರಷ್ಟ ಸರ್ಕಾರವನ್ನು ವಜಾ ಮಾಡಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲೆಸೆದಿದ್ದಾರೆ.
ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಕಮೀಷನ್ ವಿಚಾರ ಆಧರಿಸಿ ರಾಜ್ಯ ಸರ್ಕಾರ ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರಲು ಶಿಫಾರಸ್ಸು ಮಾಡಬೇಕು ಎಂದು ಆಗ್ರಗಿಸಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿರುವ ಟೆಂಡರ್ ಗಳೂ ಸೇರಿ ಈ ವರೆಗಿನ ಎಲ್ಲಾ ಟೆಂಡರ್ ಪ್ರಕ್ರಿಯೆಗಳ ಬಗ್ಗೆ ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಯಾಗಲಿ. ಉಪ್ಪು ತಿಂದವರು ನೀರು ಕುಡೀತಾರೆ. ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆಯಾಗುತ್ತೆ ಎಂದಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ 40% ಕಮಿಷನ್ ಪ್ರಕರಣದ ತನಿಖೆಗೆ ಆದೇಶ ಮಾಡಿದ್ದಾರೆ. ಆದರೆ ಯಾವ ಇಲಾಖೆ ವಿರುದ್ಧ ಭ್ರಷ್ಟಾಚಾರದ ಆರೋಪ ಇದೆಯೋ ಅದೇ ಇಲಾಖೆಯ ಅಧಿಕಾರಿಗಳನ್ನು ತನಿಖೆಗೆ ನೇಮಿಸಿದರೆ ಸತ್ಯ ಹೊರಬರುತ್ತದಾ? ಎಂದು ಪ್ರಶ್ನಿಸಿದ್ದಾರೆ.
ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ನಾವು ಜೆಡಿಎಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿಲ್ಲ. ನಮ್ಮ ಬೆಂಬಲಿತರಿಗೆ, ಪಕ್ಷದ ಅಭ್ಯರ್ಥಿಗೆ ಒಂದು ಮತ ಮಾತ್ರ ಹಾಕಲು ಸೂಚನೆ ಕೊಟ್ಟಿದ್ದೇನೆ. ಬೇರೆ ಚುನಾವಣೆಗಳಂತೆ ಈ ಚುನಾವಣೆಯಲ್ಲೂ ಬಿಜೆಪಿ – ಜೆಡಿಎಸ್ ನಡುವೆ ಒಳ ಒಪ್ಪಂದ ನಡೆದಿದೆ ಎಂದಿದ್ದಾರೆ.



