ಕಲ್ಲು ತೂರಾಟ ನಡೆಸಿದ್ದರಿಂದ  ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣ

2 years ago

ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಕಿಡಿಗೇಡಿಗಳು ಪುಂಡಾಟಿಕೆ ಮೆರೆದಿದ್ದಾರೆ. ಗಣಪತಿ ವಿಸರ್ಜನೆಗೆ ತೆರಳುತ್ತಿದ್ದ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ  ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದೆ.

ಕೃತ್ಯ ಸಂಬಂಧ ಈಗಾಗಲೇ 52 ಆರೋಪಿಗಳನ್ನು ಬಂಧಿಸಿಲಾಗಿದೆ. 150 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಕಟ್ಟೆಚ್ಚರ ವಹಿಸಲಾಗಿದೆ. ಪರಿಸ್ಥಿತಿ ಪ್ರಕ್ಷುಬ್ಧಗೊಂಡಿದ್ದ ಹಿನ್ನೆಲೆಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.

ಕಳೆದ ರಾತ್ರಿ ನಾಗಮಂಗಲದ ಚಾಮರಾಜನಗರ – ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯ ದರ್ಗಾ ಬಳಿ ಗಣಪತಿ ವಿಸರ್ಜನೆ ಮೆರವಣಿಗೆ ಬರುತ್ತಿದ್ದಂತೆ ಕಲ್ಲು ತೂರಾಟ ನಡೆಯಿತು. ಇದರ ಬೆನ್ನಲ್ಲೇ ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಪರಸ್ಪರರು ಕಲ್ಲು ತೂರಾಟ ಮಾಡಿ, ಬಾಟಲಿಗಳನ್ನು ಎಸೆದರು. ಇದರ ಪರಿಣಾಮ ಪೊಲೀಸರು ಸೇರಿ ಹಲವರು ಗಾಯಗೊಂಡಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ನಾಲ್ಕೈದು ಬಾರಿ ಲಾಠಿ ಪ್ರಹಾರ ನಡೆಸಿದ್ದಾರೆ.

ಮೆರವಣಿಗೆ ನಡೆಸುತ್ತಿದ್ದ ಯುವಕರ ಗುಂಪು ಪೊಲೀಸ್ ಠಾಣೆ ಬಳಿಗೆ ತೆರಳಿ ಅಲ್ಲೇ ಗಣೇಶ ಮೂರ್ತಿಯನ್ನಿಟ್ಟು ಪ್ರತಿಭಟನೆಗಿಳಿದು, ಕಲ್ಲು ತೂರಾಟ ನಡೆಸಿ ಘರ್ಷಣೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಘರ್ಷಣೆ ಸಮಯದಲ್ಲಿ ಮಂಡ್ಯ ಸರ್ಕಲ್ ಬಳಿ ವಿದ್ಯುತ್ ಸ್ಥಗಿತಗೊಂಡಿತ್ತು. ಹೆದ್ದಾರಿಯಲ್ಲಿ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಸ್ಥಳಕ್ಕೆ ಐಜಿಪಿ ಡಾ.ಬೋರಲಿಂಗಯ್ಯ ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ಎ.ಆರ್.ಸುಮಿತ್, ಸ್ಥಳದಲ್ಲಿದ್ದು, ಪರಿಸ್ಥಿತಿಯ ಮೇಲೆ ನಿಗಾ ಇಟ್ಟಿದ್ದಾರೆ.

ಘಟನೆ ಖಂಡಿಸಿದ ಸಿದ್ದರಾಮಯ್ಯ: ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ  ಹಲವರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆ ಎಂದಿದ್ದಾರೆ.  

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಕಲ್ಲು ತೂರಾಟವು ಸಮಾಜದ ಶಾಂತಿ ನೆಮ್ಮದಿಗೆ ಧಕ್ಕೆ ತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಕಳೆದ ಒಂದೂವರೆ ವರ್ಷಗಳಿಂದ ಯಾವುದೆ ಗಲಭೆ, ಗಲಾಟೆ, ಹಿಂಸಾಚಾರಗಳು ನಡೆಯದೆ ಸರ್ವ ಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ ಧರ್ಮದವರಾಗಿರಲಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಸಾರ್ವಜನಿಕರು ಪ್ರಚೋದನೆಗಳಿಗೆ ಒಳಗಾಗದೆ ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ನಮ್ಮೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಘಟನೆ ಕುರಿತು ಗೃಹ ಸಚಿವ ಜಿ. ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದು, ಗಣೇಶ ಮೂರ್ತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ 52 ಜನರನ್ನು ಬಂಧಿಸಲಾಗಿದ್ದು,ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದರು.

ಮೆರವಣಿಗೆಯ ಸಂದರ್ಭದಲ್ಲಿ ಪೊಲೀಸರು ಎಲ್ಲ ಭದ್ರತೆ ಮಾಡಿಕೊಂಡಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ತುಕಡಿಯನ್ನೂ ನಿಯೋಜಿಸಿಲಾಗಿತ್ತು. ಇಲ್ಲದೇ ಇದ್ದರೆ ಇನ್ನೂ ಹೆಚ್ಚಿನ ಗಲಾಟೆ ಆಗುತ್ತಿತ್ತು ಎಂದರು.

ಸಿಸಿಟಿವಿ ಕ್ಯಾಮೆರಾ ವಿಡಿಯೊಗಳನ್ನು ಗಮನಿಸಿ ಕೆಲವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮೇಲ್ನೋಟಕ್ಕೆ ಇದು ರಾಜಕೀಯ ಪ್ರೇರಿತ ಎಂದು ಕಾಣುತ್ತಿಲ್ಲ. ರಾಜಕೀಯ ಟೀಕೆ, ಆರೋಪಗಳಿಗೆ ಈಗ ಪ್ರತಿಕ್ರಿಯೆ ಕೊಡುವುದಿಲ್ಲ ಎಂದರು.

Leave a Reply