ಕಾಂಗ್ರೆಸ್ ನಿಂದ ರಾಜ್ಯಾದ್ಯಂತ ಗಾಂಧಿ ನಡಿಗೆ ಆಯೋಜನೆ

2 years ago

ಬೆಂಗಳೂರು:  ಮಹಾತ್ಮ ಗಾಂಧೀಜಿಯವರು ಬೆಳಗಾವಿಯಲ್ಲಿ ನಡೆದ ಎಐಸಿಸಿ ಅಧಿವೇಶನದ ಅಧ್ಯಕ್ಷತೆ ವಹಿಸಿ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಗಾಂಧಿ ನಡಿಗೆಯನ್ನು ಆಯೋಜಿಸಲಾಗಿತ್ತು. ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಜೊತೆಗೂಡಿ ಬೆಂಗಳೂರು ಸೇರಿದಂತೆ ಹಲವು ಕಡೆ ಜನಪ್ರತಿನಿಧಿಗಳು, ಕಾಂಗ್ರೆಸ್ ಪ್ರಮುಖ ನಾಯಕರು ಗಾಂಧಿ ನಡಿಗೆಯಲ್ಲಿ ಹೆಜ್ಜೆ ಹಾಕಿದರು.

ರಾಜಧಾನಿ ಬೆಂಗಳೂರಿನಲ್ಲಿ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಎಚ್.ಕೆ.ಪಾಟೀಲ್, ಮೊದಲಾದವರು ಗಾಂಧಿ ನಡಿಗೆಯಲ್ಲಿ ಪಾಲ್ಗೊಂಡು ಗಾಂಧಿ ತತ್ವ ಪರಿಪಾಲನೆಯ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್, ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮ ಗಾಂಧೀಜಿ ಕಾಂಗ್ರೆಸ್ ಅಧ್ಯಕ್ಷರಾಗಿ ನೇತೃತ್ವ ವಹಿಸಿದ್ದರು. ಅಲ್ಲಿಂದಲೇ ಸ್ವಾತಂತ್ರ್ಯ ಹೋರಾಟಕ್ಕೆ ಚಾಲನೆ ನೀಡಲಾಯಿತು. ಅಹಿಂಸಾ ಮಾರ್ಗವಾಗಿ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ ಸ್ವಾತಂತ್ರ್ಯ ತಂದುಕೊಡುವಲ್ಲಿ ಗಾಂಧೀಜಿ ಯಶಸ್ವಿಯಾದರು. 1924ರಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆದ ಶತಮಾನೋತ್ಸವ ನೆನಪಿಗಾಗಿ ವರ್ಷಪೂರ್ತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದರು.

ನಂತರ ನಡೆದ ಗಾಂಧೀಜಿಯವರ ಜನ್ಮ ದಿನಾಚರಣೆ ಮತ್ತು ಸ್ವಚ್ಚತಾ ಆಂದೋಲನಾ ಪ್ರತಿಜ್ಞಾ ವಿಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಷ್ಟ್ರಪಿತ ಮಹಾತ್ಮಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ ಎಂದರು.

ಮಹಾತ್ಮಗಾಂಧಿ ಮೊದಲು ಇಡೀ ಗ್ರಾಮೀಣ ಭಾರತವನ್ನು ಸುತ್ತಾಡಿ ನಮ್ಮ ಜನರ ಬದುಕು ಮತ್ತು ಬವಣೆಯನ್ನು  ಅರ್ಥ ಮಾಡಿಕೊಂಡು ಬಳಿಕ ಅದಕ್ಕೆ ತಕ್ಕಂತೆ ಸ್ವಾತಂತ್ರ್ಯ ಹೋರಾಟ ಸಂಘಟಿಸಿ ಸ್ವತಃ ಜೈಲು ಸೇರಿ ಹೋರಾಟ ಮುಂದುವರೆಸಿ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟರು ಎಂದರು.

ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಎಂದು ಕರೆ ನೀಡಿ 1947ರಲ್ಲಿ ಬ್ರಿಟೀಷರು ಭಾರತದಿಂದ ತೊಲಗುವಂತೆ ಮಾಡಿದರು. ಸ್ವಾತಂತ್ರ್ಯ ಭಾರತದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಆಶಯಗಳನ್ನು ಈಡೇರಿಸುವ ಸಾಮಾಜಿಕ, ಆರ್ಥಿಕ ಕಾರ್ಯಕ್ರಮಗಳನ್ನು ನಾವು ರೂಪಿಸಿ ಜಾರಿ ಮಾಡಿದ್ದೇವೆ. ನಮ್ಮ ಗ್ಯಾರಂಟಿ ಕಾರ್ಯಕ್ರಮಗಳೂ ಕೂಡ ಬಡವರಿಗೆ ಆರ್ಥಿಕ ಸ್ವಾತಂತ್ರ್ಯ ಒದಗಿಸಿಕೊಡುವುದಾಗಿದೆ ಎಂದರು.

ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ. ಗ್ರಾಮಗಳ ಉದ್ದಾರ ಆಗದೆ ದೇಶ ಉದ್ದಾರ ಆಗಲು ಸಾಧ್ಯವಿಲ್ಲ ಎಂದು ನಾವು ಗ್ರಾಮಗಳ ಪ್ರಗತಿಗೆ ಕಾರ್ಯಕ್ರಮ ರೂಪಿಸಿದ್ದೇವೆ ಎಂದರು.

ಆತ್ಮ ಸಾಕ್ಷಿಯ ನ್ಯಾಯಾಲಯ ಎಲ್ಲಾ ನ್ಯಾಯಾಲಯಗಳಿಗಿಂತ ಮಿಗಿಲಾದದು.  ಆದ್ದರಿಂದ ನಾವು ನಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವುದೇ ಗಾಂಧಿಯವರಿಗೆ ನಾವು ಸಲ್ಲಿಸುವ ದೊಡ್ಡ ಗೌರವ ಎಂದರು.

ಸಮಾರಂಭದಲ್ಲಿ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಬಿಬಿಎಂಪಿ ಆಯುಕ್ತ ತುಷಾರ ಗಿರಿನಾಥ್,  ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲಾ ಸೇರಿ ಹಲವು ಗಣ್ಯರು ಹಾಜರಿದ್ದರು.

Leave a Reply