ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಶಕ್ತಿ ಯೋಜನೆಯನ್ನು ಮರು ಪರಿಶೀಲನೆಗೆ ಒಳಪಡಿಸಲಾಗುತ್ತದೆ ಎಂಬ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿಕೆ ಇದೀಗ ತೀವ್ರ ವಿವಾದ ಸೃಷ್ಟಿಸಿದ್ದು, ರಾಜ್ಯ ಸರ್ಕಾರ ಶಕ್ತಿ ಯೋಜನೆ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ರದ್ದು ಪಡಿಸುವುದಿಲ್ಲ ಎಂದು ಸ್ಪಷ್ಟೀಕರಣ ನೀಡಿದೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಇದರ ನಡುವೆ ವಿಪಕ್ಷಗಳು ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಲು ಸಾಧ್ಯವಾಗುತ್ತಿಲ್ಲ. ಸದ್ಯದಲ್ಲೇ ಅವುಗಳು ಸ್ಥಗಿತ ಗೊಳ್ಳಲಿವೆ ಎಂದು ಫಲಾನುಭವಿಗಳಲ್ಲಿ ಆತಂಕ ಹುಟ್ಟಿಸಲು ಯತ್ನಿಸಿವೆ.
ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್, ಶಕ್ತಿ ಯೋಜನೆಯನ್ನು ಮರು ಪರಿಶೀಲನೆಗೆ ಒಳಪಡಿಸಬೇಕು ಎಂದು ಹಲವು ಮಹಿಳೆಯರು ಸಾಮಾಜಿಕ ಜಾಲತಾಣ ಎಕ್ಸ್ ಹಾಗೂ ಇ-ಮೇಲ್ ಮೂಲಕ ಮನವಿ ಮಾಡಿದ್ದಾರೆ. ಸಾರಿಗೆ ನಿಗಮಗಳ ಬಸ್ಗಳಲ್ಲಿ ಪ್ರಯಾಣಿಸುವಾಗ ನಾವು ಹಣ ಕೊಡಲು ಮುಂದಾದರೂ ನಿರ್ವಾಹಕರು ನಿರಾಕರಿಸುತ್ತಾರೆ. ಆರ್ಥಿಕವಾಗಿ ಅನುಕೂಲ ಸ್ಥಿತಿಯಲ್ಲಿ ಇರುವ ಕಾರಣ ಟಿಕೆಟ್ ತೆಗೆದುಕೊಳ್ಳುವ ಶಕ್ತಿಯಿದ್ದು, ನಮಗೆ ಉಚಿತ ಪ್ರಯಾಣ ಬೇಡವೆಂದು ಶೇ 5ರಿಂದ 10ರಷ್ಟು ಮಹಿಳೆಯರು ಹೇಳುತ್ತಿದ್ದಾರೆ. ಈ ಕುರಿತು ಪ್ರತ್ಯೇಕ ಸಭೆ ಕರೆದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರ ಜತೆ ಚರ್ಚಿಸಲಾಗುವುದು ಎಂದಿದ್ದರು.
ಈ ಹೇಳಿಕೆ ವ್ಯಾಪಕ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಸ್ಪಷ್ಟೀಕರಣ ನೀಡಿದ ಸಿಎಂ ಸಿದ್ದರಾಮಯ್ಯ, ಶಕ್ತಿ ಯೋಜನೆ ಪರಿಷ್ಕರಣೆಯ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ. ಎಲ್ಲಾ ಗ್ಯಾರಂಟಿ ಯೋಜನೆಗಳು ನೂರಕ್ಕೆ ನೂರರಷ್ಟು ಮುಂದುವರೆಯಲಿವೆ ಎಂದು ಭರವಸೆ ನೀಡಿದರು.
ಡಿಸಿಎಂ ಡಿ ಕೆ ಶಿವಕುಮಾರ್ ಮಾತನಾಡಿದ ಕಾರ್ಯಕ್ರಮದಲ್ಲಿ ನಾನು ಇರಲಿಲ್ಲ. ಏನೇ ಇರಲಿ ಶಕ್ತಿ ಯೋಜನೆ ಪರಿಷ್ಕರಿಸಲ್ಲ ಎಂದರು.
ಇದರ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾತನಾಡಿ, ಮಹಿಳೆಯರ ಸಬಲೀಕರಣದ ಯೋಜನೆ ಮೂರೂವರೆ ವರ್ಷ ಅಷ್ಟೇ ಅಲ್ಲ, ಮುಂದಿನ ಅವಧಿಗೂ ಈ ಯೋಜನೆ ಮುಂದುವರೆಯಲಿದೆ ಎಂದು ಭರವಸೆ ನೀಡಿದರು.
ಅಷ್ಟಕ್ಕೂ ಡಿಸಿಎಂ ನನ್ನ ಬಳಿ ಅವರ ಹೇಳಿಕೆ ಬಗ್ಗೆ ಮಾತನಾಡಿಲ್ಲ. ಬುಧವಾರ ನಡೆದ ಕಾರ್ಯಕ್ರಮದಲ್ಲಿ ಅವರು ಈ ಯೋಜನೆಯನ್ನು ಪರಿಶೀಲಿಸುವ ಹೇಳಿಕೆ ನೀಡಿದ್ದಾರೆ. ಆದರೆ, ನನ್ನ ಬಳಿ ಈ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ ಎಂದರು.
ನನಗೆ ಯಾವ ಮಹಿಳೆಯರೂ ಬಸ್ನಲ್ಲಿ ದುಡ್ಡು ಕೊಟ್ಟು ಟಿಕೆಟ್ ಖರೀದಿಸುತ್ತೇವೆ ಎಂದು ಹೇಳಿಲ್ಲ. ಡಿ.ಕೆ. ಶಿವಕುಮಾರ್ ಅವರಿಗೆ ಮಹಿಳೆಯರು ಇ- ಮೇಲ್ ಮೂಲಕ ತಿಳಿಸಿದ್ದಾರಂತೆ. ಅದು ನನಗೆ ಗೊತ್ತಿಲ್ಲ. ಐಷಾರಾಮಿ ಕಾರುಗಳಲ್ಲಿ ಸಂಚರಿಸುವ ಮಹಿಳೆಯರಷ್ಟೇ ಇದನ್ನು ಹೇಳಿದ್ದಾರೆ. ಯಾಕೆಂದರೆ ಅವರಿಗೆ ಬಸ್ನ ಅಗತ್ಯ ಇರುವುದಿಲ್ಲ ಎಂದರು.
ಬಿಜೆಪಿಯವರು ಅನಗತ್ಯವಾಗಿ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಅವರಂತೂ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ಯಶಸ್ವಿ ಯೋಜನೆಗಳನ್ನು ತಂದಿದೆ. ಇದನ್ನು ನೋಡಿ ಸಹಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ಏನೇನೋ ಟೀಕೆ ಮಾಡುತ್ತಿದ್ದಾರೆ ಎಂದರು.



