ಬೆಂಗಳೂರು: ಪರಮಪೂಜ್ಯರಾದ ಬ್ರಹ್ಮರ್ಷಿ ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರವನ್ನು ಕೇಂದ್ರದ ಗಣರಾಜ್ಯೋತ್ಸವ ಸಮಿತಿ ತಿರಸ್ಕರಿಸಿರುವುದು ಅತ್ಯಂತ ಖಂಡನೀಯ ಹಾಗೂ ನಮ್ಮ ನೆಲದ ನಂಬಿಕೆಗಳಿಗೆ ಮಾಡಿರುವ ಅಪಮಾನ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಗಣರಾಜ್ಯೋತ್ಸವ ಪೆರೇಡ್ ನಲ್ಲಿ ನಾರಾಯಣಗುರು ಸ್ತಬ್ಧಚಿತ್ರವನ್ನು ಪ್ರದರ್ಶಿಸಲು ಕೇರಳ ಸರ್ಕಾರ ಪ್ರಸ್ತಾವನೆ ಸಲ್ಲಿಸಿತ್ತು, ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಸ್ತ್ರೀ ಸಮಾನತೆಯನ್ನು ಪ್ರತಿಪಾದಿಸಿ ಜಾತಿ, ಮತಭೇದಗಳನ್ನು ಧಿಕ್ಕರಿಸಿ ಸಮಾಜೋದ್ಧಾರಕ್ಕೆ ಶ್ರಮಿಸಿದ ಮಹಾನ್ ಚೇತನ ಶ್ರೀ ನಾರಾಯಣ ಗುರುಗಳು, “ಮನುಷ್ಯರೆಲ್ಲ ಒಂದೇ ಎಂದು ಹೇಳಿ ಒಂದೇ ಜಾತಿ, ಒಂದೇ ಮತ, ಒಬ್ಬರೇ ದೇವರು” ಎಂದು ಸಾರಿ ಆತ್ಮದಲ್ಲಿ ಅರಿವಿನ ಬೆಳಕು ಮೂಡಿಸಿದವರು ಎಂದಿದ್ದಾರೆ.
ಅಂಥವರ ಚಿತ್ರವಿದ್ದ ಸ್ತಬ್ಧಚಿತ್ರವನ್ನು ತಿರಸ್ಕಾರ ಮಾಡಿರುವುದು ಕ್ಷಮಾರ್ಹವಲ್ಲದ ತಪ್ಪು ಹಾಗೂ ಭಾರತೀಯ ಸುಧಾರಣಾ ಪರಂಪರೆಯ ಬಗ್ಗೆ ತಿಳಿವಳಿಕೆ ಇಲ್ಲದ ಅಜ್ಞಾನದ ಪರಮಾವಧಿ. ಆಯ್ಕೆ ಸಮಿತಿಯಲ್ಲಿ ಇಂಥ ಅಜ್ಞಾನಿಗಳಿರುವುದು ದೇಶಕ್ಕೆ ಶೋಭೆಯಲ್ಲ ಎಂದು ಹೇಳಿದ್ದಾರೆ.
ಕೂಡಲೇ ನಾರಾಯಣ ಗುರುಗಳ ಚಿತ್ರವಿರುವ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವದ ಪರೇಡ್ʼಗೆ ಸಮಿತಿಯು ಅಂಗೀಕಾರ ಮಾಡಬೇಕು. ಕೂಡಲೇ ಸಂಬಂಧಪಟ್ಟ ಕೇಂದ್ರದ ಸಚಿವಾಲಯ ಮತ್ತು ಅಧಿಕಾರಿಗಳು ಈ ಅಚಾತುರ್ಯವನ್ನು ಸರಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.




