ಬೆಂಗಳೂರು: ರಾಜ್ಯ ಕಾಂಗ್ರೆಸ್ಸಿನಲ್ಲಿ ಮತ್ತೊಮ್ಮೆ ರಾಜಕೀಯ ವಿದ್ಯಮಾನಗಳು ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಗಾಗಿ ಆಗ್ರಹ ತೀವ್ರಗೊಂಡಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಾಯಕತ್ವದಲ್ಲಿ ಯಾವುದೇ ಮಾರ್ಪಾಡು ಮಾಡದಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಲು ಸಿದ್ದರಾಮಯ್ಯ ಆಪ್ತವಲಯ ತೀರ್ಮಾನಿಸಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಮತ್ತೊಂದೆಡೆ ವಿದೇಶ ಪ್ರವಾಸದಿಂದ ಆಗಮಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಇತ್ತ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ತಾವು ಈಗ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಅಲ್ಲ 2028ರಲ್ಲಿ ಈ ಹುದ್ದೆಗಾಗಿ ಪೈಪೋಟಿ ನಡೆಸುತ್ತೇನೆ ಎಂದರು.
ಕಳೆದ ವಾರ ಸತೀಶ ಜಾರಕಿಹೊಳಿ ಮತ್ತು ಬೈರತಿ ಸುರೇಶ್ ಹಾಗೂ ಕೆ ಎನ್ ರಾಜಣ್ಣ ನಿವಾಸದಲ್ಲಿ ಸಭೆ ನಡೆಸಿದ ಸಿದ್ದರಾಮಯ್ಯ ಆಪ್ತ ವಲಯದ ಸಚಿವರು ಇದೀಗ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಸೇರಿದಂತೆ ಹಲವು ವಿಷಯಗಳಿಗಾಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ತೀರ್ಮಾನ ಮಾಡಿದ್ದಾರೆ.
ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ಈ ವಾರದಲ್ಲಿಯೇ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡಲು ತೀರ್ಮಾನ ಕೈಗೊಂಡಿದ್ದಾರೆ.
ಹೈಕಮಾಂಡ್ ಭೇಟಿ ಸಮಯದಲ್ಲಿ ಈ ನಾಯಕರು, ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಯಾವುದೇ ಕಾರಣಕ್ಕೂ ಬದಲಾಯಿಸಬಾರದು. ಒಂದೊಮ್ಮೆ ಬದಲಾಯಿಸುವುದೇ ಆದರೆ ಸಿದ್ದರಾಮಯ್ಯ ಅವರು ಸೇರಿದಂತೆ ಸರ್ವಸಮ್ಮತ ವ್ಯಕ್ತಿಗೆ ಆ ಸ್ಥಾನ ನೀಡಬೇಕು, ಜಾತಿವಾರು ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸಬೇಕು, ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಮುಕ್ತಗೊಳಿಸಬೇಕು ಎಂಬ ಒತ್ತಾಯ ಮಂಡಿಸಲಿದ್ದಾರೆ ಎಂದು ವರದಿಯಾಗಿದೆ.
ಈ ನಡುವೆ ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಡಿ ಕೆ ಶಿವಕುಮಾರ್, ಮಂತ್ರಿಗಳು ಒಟ್ಟಾಗಿ ಕುಳಿತು ಔತಣಕೂಟ ನಡೆಸಿದರೆ ತಪ್ಪೇನು? ಇದರಲ್ಲಿ ಯಾವುದೇ ರಾಜಕಾರಣ ಇಲ್ಲ ಎಂದರು.
ತಾವು ಸೇರಿದಂತೆ ಕೆಲವು ಮಂತ್ರಿಗಳು ಹೊಸ ವರ್ಷದ ಹಿನ್ನೆಲೆಯಲ್ಲಿ ವಿದೇಶ ಪ್ರವಾಸ ಕೈಗೊಂಡಿದ್ದೆವು. ಬೆಂಗಳೂರಿನಲ್ಲಿ ಇದ್ದ ಮಂತ್ರಿಗಳು ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ ಒಟ್ಟಾಗಿ ಕುಳಿತು ಊಟ ಮಾಡಿದ್ದಾರೆ. ನಾನು ಕೂಡ ಬೆಂಗಳೂರಿನಲ್ಲಿ ಇದ್ದರೆ ಅದಕ್ಕೆ ಹೋಗುತ್ತಿದ್ದೆ ಎಂದರು.
ಸಿಎಂ ಬದಲಾವಣೆ, ಮಂತ್ರಿ ಮಂಡಲ ವಿಸ್ತರಣೆ ಕುರಿತು ಯಾವುದೇ ರೀತಿಯ ಚರ್ಚೆ ನಡೆದಿಲ್ಲ. ಈ ಬಗ್ಗೆ ಏನಾದರೂ ತೀರ್ಮಾನ ತೆಗೆದುಕೊಳ್ಳುವುದು ಇದ್ದರೆ ಅದನ್ನು ಸಿಎಂ ಮತ್ತು ಹೈಕಮಾಂಡ್ ನಾಯಕರು ಒಟ್ಟಾಗಿ ಕುಳಿತು ತೀರ್ಮಾನಿಸುತ್ತಾರೆ. ಇದು ಅವರ ಪರಮಾಧಿಕಾರ ಎಂದರು.
ಮಂತ್ರಿಮಂಡಲ ವಿಸ್ತರಣೆ ನಾಯಕತ್ವ ಬದಲಾವಣೆ ಕುರಿತು ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳು ಸಂಪೂರ್ಣ ಕಪೋಲಕಲ್ಪಿತ. ಇದರಲ್ಲಿ ಯಾವುದೇ ಹುರುಳಿಲ್ಲ ಎಂದರು.
ಈ ನಡುವೆ ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಬೆಂಗಳೂರಿನ ತಮ್ಮ ನಿವಾಸದಲ್ಲಿ ನಡೆದ ಭೋಜನಕೂಟದಲ್ಲಿ ಯಾವುದೇ ರೀತಿಯ ರಾಜಕೀಯ ತೀರ್ಮಾನಗಳು ಆಗಿಲ್ಲ ಎಂದರು.
ಮಂತ್ರಿಮಂಡಲ ವಿಸ್ತರಣೆ ಸೇರಿದಂತೆ ಯಾವುದೇ ತೀರ್ಮಾನ ಇದ್ದರೂ ಅದನ್ನು ಮುಖ್ಯಮಂತ್ರಿ ಮತ್ತು ಹೈಕಮಾಂಡ್ ತೆಗೆದುಕೊಳ್ಳಲಿದೆ. ತಾವು ಈಗ ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿ ಇಲ್ಲ. ಆದರೆ 2028 ರಲ್ಲಿ ಇದಕ್ಕಾಗಿ ಪೈಪೋಟಿ ಮಾಡುತ್ತೇನೆ ಎಂದರು.
ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಮತ್ತು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಕುರಿತಂತೆ ನಾವು ಏನು ಹೇಳಬೇಕು ಎಂಬುದನ್ನು ಹೈಕಮಾಂಡ್ ಗಮನಕ್ಕೆ ತಂದಿದ್ದೇವೆ. ಸೂಕ್ತ ಸಮಯದಲ್ಲಿ ಈ ಬಗ್ಗೆ ವರಿಷ್ಠರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.




