ಬೆಂಗಳೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಘೋಷಣೆಯಾದ ಒಂಬತ್ತು ವಿಶ್ವವಿದ್ಯಾಲಯಗಳನ್ನು ವಿದ್ಯಾರ್ಥಿಗಳ ಕೊರತೆ ಮತ್ತು ಆರ್ಥಿಕ ಸಂಪನ್ಮೂಲದ ಅಭಾವ ಸೇರಿ ಹಲವು ಕಾರಣಗಳಿಂದ ಮುಚ್ಚಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಈ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ರಚನೆಯಾಗಿರುವ ಉನ್ನತ ಮಟ್ಟದ ಸಮಿತಿ ಮಂಡ್ಯ, ಕೊಡಗು, ಕೊಪ್ಪಳ, ಚಾಮರಾಜನಗರ ಸೇರಿದಂತೆ ಒಂಬತ್ತು ಜಿಲ್ಲೆಗಳಲ್ಲಿ ಅಸ್ತಿತ್ವಕ್ಕೆ ಬಂದಿರುವ ವಿಶ್ವವಿದ್ಯಾಲಯಗಳನ್ನು ಮುಚ್ಚಿ ಅಲ್ಲಿನ ವಿದ್ಯಾರ್ಥಿಗಳನ್ನು ಸಮೀಪದ ವಿಶ್ವವಿದ್ಯಾಲಯಗಳ ಜೊತೆ ಸಂಯೋಜನೆ ಮಾಡಲು ಸಲಹೆ ಮಾಡಿದೆ.
ಇದು ಶಿಕ್ಷಣ ಪ್ರೇಮಿಗಳು ಮತ್ತು ವಿಪಕ್ಷ ಬಿಜೆಪಿ ಅಸಮಾಧಾನಕ್ಕೆ ಕಾರಣವಾಗಿರುವ ಬೆನ್ನೆಲ್ಲೇ ಕಾಂಗ್ರೆಸ್ಸಿನ ಶಾಸಕರು ಕೂಡ ಇದರ ವಿರುದ್ಧ ಧ್ವನಿಯೆತ್ತಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಕೊಡಗು ವಿಶ್ವವಿದ್ಯಾಲಯ ಮುಚ್ಚುವ ನಿರ್ಧಾರದ ಬಗ್ಗೆ ಪ್ರಸ್ತಾಪ ಮಾಡಿದ ಶಾಸಕ ಮಂತರ ಗೌಡ, ಯಾವುದೇ ಕಾರಣಕ್ಕೂ ಕೊಡಗು ವಿಶ್ವವಿದ್ಯಾಲಯ ಮುಚ್ಚಬಾರದು ಎಂದು ಒತ್ತಾಯಿಸಿದ್ದಾರೆ.
ಕೊಡಗು ವಿಶ್ವವಿದ್ಯಾಲಯ ಜಿಲ್ಲೆಯ ಹಲವು ವರ್ಷಗಳ ಬೇಡಿಕೆಯಾಗಿತ್ತು. ಇದರ ಜೊತೆಗೆ ಜಿಲ್ಲೆಯ ಜನ ಭಾವನಾತ್ಮಕ ನಂಟು ಹೊಂದಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ವಿಶ್ವವಿದ್ಯಾಲಯವನ್ನು ಸದೃಢಗೊಳಿಸಲು ಅಗತ್ಯವಿರುವ ಆರ್ಥಿಕ ಅನುದಾನ ಮತ್ತು ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.
ಒಂದು ವೇಳೆ ರಾಜ್ಯ ಸರ್ಕಾರ ಯಾವುದೋ ಒತ್ತಡಕ್ಕೆ ಮಣಿದು ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚುವ ನಿರ್ಧಾರ ತೆಗೆದುಕೊಂಡಲ್ಲಿ ಅದರ ವಿರುದ್ಧ ಹೋರಾಟಕ್ಕೆ ಮುಂದಾಗುತ್ತೇನೆ. ಈಗಾಗಲೇ ವಿಶ್ವವಿದ್ಯಾಲಯ ಮುಚ್ಚುವ ಚಿಂತನೆ ವಿರೋಧಿಸಿ ಕೊಡಗಿನಲ್ಲಿ ಪ್ರತಿಭಟನೆ ಆರಂಭವಾಗಿದ್ದು, ತಾವು ಕೂಡ ಅನಿವಾರ್ಯವಾಗಿ ಆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಎಚ್ಚರಿಕೆ ನೀಡಿದರು.
ಮಂತರ ಗೌಡ ಅವರ ವಾದಕ್ಕೆ ಮಂಡ್ಯ ಕ್ಷೇತ್ರದ ಶಾಸಕ ರವಿಕುಮಾರ್ ಗಣಿಗ ಸೇರಿದಂತೆ ಹಲವರು ಬೆಂಬಲ ವ್ಯಕ್ತಪಡಿಸಿದರು ಎಂದು ಪಕ್ಷದ ಮೂಲಗಳು ಮಾಹಿತಿ ನೀಡಿವೆ.
ಶಾಸಕರ ಅಭಿಪ್ರಾಯ ಆಲಿಸಿದ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ಸರ್ಕಾರ ಇನ್ನೂ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಯಾರೂ ಕೂಡ ಈ ವಿಷಯವಾಗಿ ಉದ್ವೇಗ ಅಥವಾ ಭಾವನಾತ್ಮಕವಾಗಿ ಪ್ರತಿಕ್ರಿಸಬಾರದು ಎಂದು ಸಲಹೆ ಮಾಡಿ ಅತೃಪ್ತ ಶಾಸಕರ ಮನವೊಲಿಸಿದ್ದಾರೆ.




