ಬೆಂಗಳೂರು: ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಇದಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಫಲಿತಾಂಶ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮೂರು ಪರೀಕ್ಷಾ ಪದ್ಧತಿಯ ಯಶಸ್ಸಿಗೆ ಸಾಕ್ಷಿಯಾಗಿದೆ ಎಂದಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2025ರ ಎಸ್ಎಸ್ಎಲ್ಸಿ ಪರೀಕ್ಷೆ-2ರಲ್ಲಿ ಸರ್ಕಾರಿ ಶಾಲೆಗಳ ಉತ್ತೀರ್ಣತಾ ಪ್ರಮಾಣ ಶೇ. 36.65 ಇದ್ದು, ಇದು ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಫಲಿತಾಂಶಕ್ಕಿಂತ ಹೆಚ್ಚಾಗಿದೆ. ಇದು ನಮ್ಮ ಸರ್ಕಾರಿ ಶಾಲೆಗಳ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಕಠಿಣ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲವಾಗಿದೆ ಎಂದರು.
ವಿದ್ಯಾರ್ಥಿಗಳಿಗೆ ಎರಡನೇ ಅವಕಾಶ ನೀಡುವುದರಿಂದ ಅವರ ಭವಿಷ್ಯಕ್ಕೆ ಯಾವುದೇ ತಡೆಯಾಗುವುದಿಲ್ಲ ಎಂಬುದು ನಮ್ಮ ಸರ್ಕಾರದ ದೃಢ ನಂಬಿಕೆ. ವಿದ್ಯಾರ್ಥಿಗಳ ಭವಿಷ್ಯವನ್ನು ಉತ್ತಮಗೊಳಿಸಲು ಮತ್ತು ಅವರಲ್ಲಿನ ಪರೀಕ್ಷಾ ಭಯವನ್ನು ಹೋಗಲಾಡಿಸಲು ನಾವು ಜಾರಿಗೆ ತಂದಿರುವ ಮೂರು ಪರೀಕ್ಷಾ ಪದ್ಧತಿ ಉತ್ತಮ ಫಲಿತಾಂಶ ನೀಡಿದೆ ಎಂದರು.
ಫಲಿತಾಂಶ: 2025ರ ಎಸ್ಎಸ್ಎಲ್ಸಿ ಪರೀಕ್ಷೆ-2ರಲ್ಲಿ 11,818 ವಿದ್ಯಾರ್ಥಿಗಳು ಫಲಿತಾಂಶ ಉತ್ತಮಪಡಿಸಿಕೊಳ್ಳಲು ನೋಂದಾಯಿಸಿದ್ದು, ಅವರಲ್ಲಿ 6,635 ವಿದ್ಯಾರ್ಥಿಗಳು (ಶೇ. 56.14) ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಂಡಿರುವುದು ಈ ಪದ್ಧತಿಯ ಸಕಾರಾತ್ಮಕ ಪರಿಣಾಮವನ್ನು ತೋರಿಸುತ್ತದೆ. ಅಲ್ಲದೆ, ಎಸ್ಎಸ್ಎಲ್ಸಿ ಪರೀಕ್ಷೆ-2ರಲ್ಲಿ ನಾಲ್ಕು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿ ಶೇ. 100ರಷ್ಟು ಫಲಿತಾಂಶ ಪಡೆದಿರುವುದು ಹೆಮ್ಮೆಯ ಸಂಗತಿ. ಈ ನಾಲ್ಕು ವಿದ್ಯಾರ್ಥಿಗಳಲ್ಲಿ ಒಬ್ಬರು ಸರ್ಕಾರಿ ಶಾಲೆಯ ವಿದ್ಯಾರ್ಥಿ ಎಂದರು.
2025ರ ಪರೀಕ್ಷೆ-2ರ ಅವಕಾಶದಿಂದ ಒಟ್ಟು 87,330 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಅವರಿಗೆ ಪ್ರಸಕ್ತ ವರ್ಷದಲ್ಲಿಯೇ ಮುಂದಿನ ವ್ಯಾಸಂಗ ಮುಂದುವರಿಸಲು ಅನುಕೂಲವಾಗಿದೆ. ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಮುಖ್ಯಶಿಕ್ಷಕರ ಸತತ ಪ್ರಯತ್ನದಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ನೋಂದಾಯಿಸಿಕೊಂಡು ಹಾಜರಾಗಿದ್ದಾರೆ. ಫಲಿತಾಂಶ ಪೂರ್ಣಗೊಳಿಸದ ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿ ಪರಿಹಾರ ಬೋಧನಾ ತರಗತಿಗಳನ್ನು ನಡೆಸಿದ್ದು, ಇದು ಫಲಿತಾಂಶ ಸುಧಾರಣೆಗೆ ಸಹಕಾರಿಯಾಗಿದೆ ಎಂದರು.
ಪರೀಕ್ಷಾ ಅಕ್ರಮಗಳನ್ನು ತಡೆಯಲು ಸಿಸಿಟಿವಿ ಕ್ಯಾಮೆರಾದ ಮೂಲಕ ವೆಬ್ಕಾಸ್ಟಿಂಗ್ ಪದ್ಧತಿಯನ್ನು ಮುಂದುವರಿಸಲಾಗಿದ್ದು, ಇದು ಪರೀಕ್ಷಾ ವ್ಯವಸ್ಥೆಯ ಸಮಗ್ರತೆಯನ್ನು ಪುನರ್ ಸ್ಥಾಪಿಸಲು ಸಹಾಯ ಮಾಡಿದೆ ಎಂದರು.
ಪರೀಕ್ಷೆ-1 ಮತ್ತು ಪರೀಕ್ಷೆ-2ರಲ್ಲಿ ಫಲಿತಾಂಶ ಪೂರ್ಣಗೊಳಿಸದ ವಿದ್ಯಾರ್ಥಿಗಳಿಗೆ, ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಮತ್ತು ಪುನರಾವರ್ತಿತ ಅಭ್ಯರ್ಥಿಗಳಿಗೆ ಪರೀಕ್ಷೆ-3ನ್ನು ದಿನಾಂಕ 05-07-2025 ರಿಂದ 12-07-2025 ವರೆಗೆ ನಡೆಸಲಾಗುವುದು ಎಂದರು.
2024-25ರ ಪರೀಕ್ಷೆ -2 ರಲ್ಲಿ ಫಲಿತಾಂಶ ಪಡೆದಿರುವ ಶಾಲಾ ಅಭ್ಯರ್ಥಿಗಳಿಗೆ ಪರೀಕ್ಷೆ-3ಕ್ಕೆ ಪರೀಕ್ಷಾ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ. ಆದರೆ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳು, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳು ನಿಗದಿತ ಪರೀಕ್ಷಾ ಶುಲ್ಕವನ್ನು ಪಾವತಿಸಬೇಕು ಎಂದರು.
3ನೇ ಪರೀಕ್ಷೆಗೂ ಸಹ ಪರಿಹಾರ ಬೋಧನಾ ತರಗತಿಗಳನ್ನು ನಡೆಸಲಾಗುವುದು ಶಾಲೆಗಳ ಕೋಢೀಕೃತ ಫಲಿತಾಂಶ ಪಟ್ಟಿ ಹಾಗೂ ತಾತ್ಕಾಲಿಕ ಅಂಕಪಟ್ಟಿಯನ್ನು ಮಂಡಳಿಯ https://kseab.karnataka.gov.in ವೆಬ್ಸೈಟ್ನಲ್ಲಿ ಇದೇ 13ರಂದು 2 ಹಂತದಲ್ಲಿ ಅಂದೇ ಮುದ್ರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಫಲಿತಾಂಶವನ್ನು ಪ್ರೌಢಶಾಲೆಗಳಲ್ಲಿ ಆ ದಿನವೇ ಪ್ರಕಟಿಸಲಾಗುವುದು. ಸರ್ಕಾರವು ವಿದ್ಯಾರ್ಥಿ ಕೇಂದ್ರಿತ ಶೈಕ್ಷಣಿಕ ಸುಧಾರಣೆಗಳನ್ನು ಮುಂದುವರಿಸಲು ಬದ್ಧವಾಗಿದೆ ಎಂದರು.




