ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ: ಆ. 1ರಂದು ತೀರ್ಪು

10 months ago

ಬೆಂಗಳೂರು: ಸರಣಿ ಅತ್ಯಾಚಾರ ಪ್ರಕರಣದ ಸಂಬಂಧ ಬಂಧಿತನಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ವಿರುದ್ಧದ ತೀರ್ಪನ್ನು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತೆ ಮುಂದೂಡಿಕೆ ಮಾಡಿದೆ.

ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್, ಜುಲೈ 29ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದರು. ಆದರೆ ಮತ್ತೆ ಆಗಸ್ಟ್ 1ಕ್ಕೆ ತೀರ್ಪನ್ನು ಮುಂದೂಡಿಕೆ ಮಾಡಲಾಗಿದೆ.

ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಕೆಲವು ಸ್ಪಷ್ಟೀಕರಣಗಳು ಬೇಕಾಗಿವೆ. ಹೀಗಾಗಿ ಇಂದು ತೀರ್ಪು ಪ್ರಕಟಿಸುತ್ತಿಲ್ಲ ಎಂದು ನ್ಯಾ.ಸಂತೋಷ್ ಗಜಾನನ ಭಟ್ ಹೇಳಿದರು.

ಮೈಸೂರಿನ ಕೆ ಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಜ್ವಲ್ ರೇವಣ್ಣ ಮೇಲಿದೆ. ಪ್ರಕರಣ ಬೆಳಕಿಗೆ ಬರಬಾರದು ಎಂದು ಮಹಿಳೆಯನ್ನು ಅಪಹರಿಸಿ ಹುಣಸೂರು ಬಳಿಯ ತೋಟದ ಮನೆಯಲ್ಲಿ ಕೂಡಿಹಾಕಲಾಗಿತ್ತು. ಈ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿದಂತೆ ಒಟ್ಟು 9 ಆರೋಪಿಗಳಿದ್ದು, ಈಗಾಗಲೇ ರೇವಣ್ಣ ಹಾಗೂ ಭವಾನಿ ರೇವಣ್ಣಗೆ ಜಾಮೀನು ಮಂಜೂರು ಮಾಡಲಾಗಿದೆ.

ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಮಾತ್ರ ಒಂದು ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದರು. ಒಂದು ವೇಳೆ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಸಾಬೀತಾದರೆ ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆಗೆ ಒಳಪಡುವ ಸಾಧ್ಯತೆಯಿದೆ.

Leave a Reply