ಬೆಂಗಳೂರು: ಕೃಷ್ಣಾ ನದಿ ನೀರು ಹಂಚಿಕೆ ಕುರಿತು ನ್ಯಾಯ ಮಂಡಳಿ ನೀಡಿರುವ ಐತೀರ್ಪಿನಂತೆ ಆಲಮಟ್ಟಿ ಅಣೆಕಟ್ಟು ಗೇಟುಗಳ ಎತ್ತರ ಹೆಚ್ಚಳಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ಅದಕ್ಕಿರುವ ಅಡ್ಡಿ ಆತಂಕಗಳನ್ನು ದೂರ ಮಾಡಲು ತೀರ್ಮಾನಿಸಿದೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಗೇಟುಗಳ ಎತ್ತರವನ್ನು ಹೆಚ್ಚಳ ಮಾಡುವುದರಿಂದ ಮುಳುಗಡೆಯಾಗುವ ಪ್ರದೇಶಗಳ ರೈತರಿಗೆ ನ್ಯಾಯಯುತ ಪರಿಹಾರ ನೀಡುವ ಸಂಬಂಧ ಅಲ್ಲಿನ ರೈತರು ಸ್ಥಳೀಯ ಜನಪ್ರತಿನಿಧಿಗಳು ಮತ್ತು ರೈತ ಸಂಘದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ ರಾಜ್ಯ ಸರ್ಕಾರ ಅವರ ಬೇಡಿಕೆಯಂತೆ ಪರಿಹಾರ ನೀಡಲು ತೀರ್ಮಾನಿಸಿದೆ.
ಈ ಕುರಿತಂತೆ ನಡೆದ ವಿಶೇಷ ಸಂಪುಟ ಸಭೆಯ ನಂತರ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಪತ್ರಿಕಾಗೋಷ್ಠಿ ನಡೆಸಿ ರಾಜ್ಯ ಸರ್ಕಾರದ ನಿರ್ಧಾರ ಪ್ರಕಟಿಸಿದರು .
ಕಾಂಗ್ರೆಸ್ ಸರ್ಕಾರ ಎಂದೆಂದಿಗೂ ನುಡಿದಂತೆ ನಡೆಯುತ್ತದೆ. ಯುಕೆಪಿ ಹಂತ 3 ಯೋಜನೆಯ ತ್ವರಿತ ಅನುಷ್ಠಾನಕ್ಕೆ ಸರ್ಕಾರದ ಆದ್ಯತೆ ನೀಡಿದ್ದು, ಈ ದಿಸೆಯಲ್ಲಿ ರಾಜ್ಯಕ್ಕೆ ಸಮೃದ್ಧಿ ತರಬಲ್ಲ ಐತಿಹಾಸಿಕ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ ಎಂದರು.
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಮತ್ತು ನ್ಯಾಯಾಧೀಕರಣದ ತೀರ್ಪಿನಂತೆ ಆಲಮಟ್ಟಿ ಜಲಾಶಯದ ಎತ್ತರವನ್ನು 519.6 ಮೀ. ನಿಂದ 524.256 ಮೀ. ಗೆ ಏರಿಸಲು ಅನುಮತಿ ನೀಡಲಾಗಿದೆ. ಜಲಾಶಯದ ಎತ್ತರವನ್ನು ಹೆಚ್ಚಿಸುವುದರಿಂದ ಆಲಮಟ್ಟಿಯ ಹಿನ್ನೀರಿನಿಂದ ಸುಮಾರು 75000 ಎಕರೆಗೂ ಹೆಚ್ಚು ಜಮೀನು ಮುಳುಗಡೆಯಾಗುವ ಸಂಭವವಿದೆ. ಈ ಜಮೀನಿಗೆ 5.94 ಲಕ್ಷ ಹೆಕ್ಟೇರ್(ಸುಮಾರು 14 ರಿಂದ 15 ಲಕ್ಷ ಎಕರೆ) ಕ್ಕೂ ಭೂಮಿಯ ನೀರಾವರಿ ಕಲ್ಪಿಸಬಹುದಾಗಿದೆ. ಯುಕೆಪಿ ಹಂತ 3 ಬೃಹತ್ ನೀರಾವರಿ ಯೋಜನೆಯಾಗಿದ್ದು, ಈ ಭಾಗದ ರೈತರ ಜಮೀನಿಗೆ ನೀರೊದಗಿಸಿ, ಅವರ ಜೀವನ ಮಟ್ಟದ ಸುಧಾರಣೆಯಾಗಲಿದೆ ಎಂದರು.
ವಿಶೇಷ ಸಂಪುಟ ಸಭೆಯಲ್ಲಿ ಈ ಯೋಜನೆಗೆ ಸಂಬಂಧಿಸಿದಂತೆ ರೈತರು, ರೈತ ಹೋರಾಟ ಸಂಘಗಳು, ಸಂಬಂಧಪಟ್ಟ ಶಾಸಕರು, ಸಚಿವರೊಂದಿಗೆ ಚರ್ಚೆ ನಡೆಸಿ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಯೋಜನೆಗೆ ರೈತರಿಂದ ಸ್ವಾಧೀನಪಡಿಸಿಕೊಳ್ಳುವ ನೀರಾವರಿ ಜಮೀನಿಗೆ ಎಕರೆಯೊಂದಕ್ಕೆ 40 ಲಕ್ಷ ರೂ, ಖುಷ್ಕಿ ಒಣಭೂಮಿಯ ಎಕರೆಯೊಂದಕ್ಕೆ 30 ಲಕ್ಷ ಪರಿಹಾರವನ್ನು ನೀಡಬೇಕೆಂದು ಸಚಿವ ಸಂಪುಟ ತೀರ್ಮಾನಿಸಿದೆ ಎಂದರು.
ಕಾಲುವೆ ತೋಡಲು ಸುಮಾರು 51,837 ಎಕರೆ ಬೇಕಾಗಿದ್ದು, ಇದರಲ್ಲಿ 23631 ಎಕರೆ ಭೂಮಿಯ ಸ್ವಾಧೀನ ಪ್ರಕ್ರಿಯೆ ನಡೆಸಿ, ಕಾಮಗಾರಿ ಕೈಗೊಳ್ಳಲಾಗಿದೆ. ಕಾಲುವೆ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಂಡ ಭೂಮಿಗೆ ಸಂಬಂಧಿಸಿದಂತೆ ಒಣಭೂಮಿಯ ಎಕರೆಯೊಂದಕ್ಕೆ 25 ಲಕ್ಷ ಹಾಗೂ ನೀರಾವರಿ ಜಮೀನಿಗೆ ಎಕರೆಯೊಂದಕ್ಕೆ 30 ಲಕ್ಷ ಪರಿಹಾರ ಒದಗಿಸಲು ತೀರ್ಮಾನಿಸಲಾಗಿದೆ. ಕಾಲುವೆ ನಿರ್ಮಾಣದಲ್ಲಿ ಜಮೀನು ಕಳೆದುಕೊಂಡವರು ಯೋಜನೆಯ ಫಲಾನುಭವಿಗಳಾಗುತ್ತಾರೆ ಎಂದರು.
ಭೂಸ್ವಾಧೀನಪಡಿಸಿಕೊಂಡ ಜಮೀನುಗಳಿಗೆ ಪರಿಹಾರವನ್ನು ಮೂರು ಆರ್ಥಿಕ ವರ್ಷದೊಳಗೆ ನೀಡಲು ತೀರ್ಮಾನಿಸಲಾಗಿದೆ. ಯೋಜನೆಗೆ ಭೂಸ್ವಾಧೀನಪಡಿಸಿಕೊಳ್ಳಲು ರೈತರ ಮನವೊಲಿಸುವುದಾಗಿ ಸಂಬಂಧಪಟ್ಟ ಸಚಿವರು, ಶಾಸಕರು, ರೈತಮುಖಂಡರು ತಿಳಿಸಿದ್ದಾರೆ. ರಾಜ್ಯದ ಜನರಿಗೆ ಒಳಿತು ಮಾಡುವ ಈ ಸಾರ್ಥಕ ಯೋಜನೆಗೆ ಭೂಮಿ ನೀಡಲು ರೈತರು ಸಮ್ಮತಿಸಬಹುದೆಂಬ ಭರವಸೆಯಿದೆ. ಇದೊಂದು ಐತಿಹಾಸಿಕ ತೀರ್ಮಾನ. 2023ರಲ್ಲಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಪರಿಹಾರದ ಮೊತ್ತ ಕಡಿಮೆಯಿದ್ದುದರಿಂದ, ಯಾವ ರೈತರೂ ಭೂಮಿ ನೀಡಲು ಒಪ್ಪಲಿಲ್ಲ ಹಾಗೂ ಯೋಜನೆಗೆ ಚಾಲನೆಯೂ ದೊರೆಯದೇ ನೆನೆಗುದಿಗೆ ಬಿದ್ದಿತ್ತು ಎಂದರು.
ಈ ಹಿಂದೆ ಬೆಳಗಾವಿಯಲ್ಲಿ ಉತ್ತರ ಕರ್ನಾಟಕದ ಶಾಸಕರು, ರೈತಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಒಂದೇ ಬಾರಿಗೆ Consent award ನೀಡುವ ಬಗ್ಗೆ ಪರಿಗಣಿಸಿದ್ದರೂ, ಪರಿಹಾರಧನ ನಿಗಧಿಯಾಗಿರಲಿಲ್ಲ. ಕಾಂಗ್ರೆಸ್ ಸರ್ಕಾರ ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ. ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸರ್ಕಾರ ಆದ್ಯತೆ ನಿಡುತ್ತದೆ. ಆದರೆ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಇದುವರೆಗೂ ಅಧಿಸೂಚನೆ ಹೊರಡಿಸಿಲ್ಲ. ಯೋಜನೆಯ ತ್ವರಿತ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಅಧಿಸೂಚನೆ ಹೊರಡಿಸಲು ಕೇಂದ್ರದವರನ್ನು ಹಲವು ಬಾರಿ ಭೇಟಿ ಮಾಡಿ ಅಧಿಸೂಚನೆ ಹೊರಡಿಸುವಂತೆ ಒತ್ತಾಯಿಸಲಾಗಿದೆ ಎಂದರು.
ರೈತರಿಗೆ ಪರಿಹಾರ ಧನ ಕೊಡುವ ನಿರ್ಣಯದಿಂದ ಸರ್ಕಾರದ ಮೇಲಾಗುವ ಆರ್ಥಿಕ ಹೊರೆಯ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, 1,33,867 ಎಕರೆ ಜಮೀನು ಯೋಜನೆಗೆ ಬೇಕಾಗಿದ್ದು, 75,563 ಎಕರೆ ಮುಳುಗಡೆಯಾಗಲಿದೆ 51,837 ಎಕರೆ ಕಾಲುವೆ ನಿರ್ಮಾಣಕ್ಕೆ ಬೇಕಾಗಿದೆ. ರೈತರ ಪುನರ್ವಸತಿ ಹಾಗೂ ಪುನರ್ವವ್ಯಸ್ಥೆ ಕಾರ್ಯಗಳಿಗೆ 6469 ಎಕರೆಗಳ ಅವಶ್ಯಕತೆಯಿದೆ. ಇದರಿಂದ ಸುಮಾರು 20 ಗ್ರಾಮಗಳು , ಕೆಲವು ಪಟ್ಟಣ ವಾರ್ಡ್ ಗಳು ಮುಳುಗಡೆಯಾಗುತ್ತಿದ್ದು, ಒಟ್ಟು 1,33,867 ಎಕರೆಗೆ ಭೂಸ್ವಾಧೀನ ಪರಿಹಾರ ನೀಡುವ ಐತಿಹಾಸಿಕ ತೀರ್ಮಾನವನ್ನು ಉಪಮುಖ್ಯಮಂತ್ರಿಗಳು ತಿಳಿಸಿದರು. ಈ ಉದ್ದೇಶಕ್ಕಾಗಿ ಪ್ರತಿವರ್ಷ ಸುಮಾರು 15 ರಿಂದ 20 ಸಾವಿರ ಕೋಟಿ ರೂಗಳ ವೆಚ್ಚ ಬರಲಿದೆ. ಒಟ್ಟಾರೆ ಈ ಯೋಜನೆಗೆ ಸುಮಾರು 70 ಸಾವಿರ ಕೋಟಿ ರೂ. ಗಳು ವೆಚ್ಚವಾಗುವ ಅಂದಾಜು ಇದೆ ಎಂದರು.
ಕೇಂದ್ರದ ಅಧಿಸೂಚನೆ ಬರುವ ಮುಂಚೆಯೇ ಕಾಮಗಾರಿ ಪ್ರಾರಂಭಿಸಬಹುದೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಕಾಲುವೆ ನಿರ್ಮಾಣದ ಕೆಲಸ ಈಗಾಗಲೇ ಪ್ರಾರಂಭಿಸಲಾಗಿದ್ದು, ಅಧಿಸೂಚನೆಯಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದರು.
ಮುಖ್ಯಾಂಶಗಳು:
ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣ-2 ರ ತೀರ್ಪಿನ ಅನ್ವಯ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅನುಷ್ಠಾನಕ್ಕಾಗಿ 130 ಟಿಎಂಸಿ ನೀರಿನ ಹಂಚಿಕೆ ಮಾಡಿದ್ದು, ಇದರಿಂದ 5.94 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಸಾಧ್ಯವಾಗಲಿದೆ.
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3ರಲ್ಲಿ ನೀರಿನ ಬಳಕೆಗಾಗಿ ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹಣಾ ಮಟ್ಟ 519 ಮೀಟರ್ ನಿಂದ 524 ಮೀಟರ್ ಗೆ ಎತ್ತರಿಸುವುದರಿಂದ ಹೆಚ್ಚುವರಿಯಾಗಿ 100 ಟಿ ಎಂ ಸಿ. ನೀರಿನ ಪ್ರಮಾಣ ಸಂಗ್ರಹ ಅಂದಾಜಿಸಲಾಗಿದೆ.
ಯೋಜನೆ ಅನುಷ್ಠಾನಕ್ಕೆ ಒಟ್ಟು 1,33,867 ಎಕ್ರೆ ಜಮೀನು ಭೂಸ್ವಾಧೀನ ಅಗತ್ಯವಿದ್ದು, ಇದರಲ್ಲಿ 75,563 ಎಕ್ರೆ ಹಿನ್ನೀರಿನಲ್ಲಿ ಮುಳುಗಡೆಯಾಗುವ ಜಮೀನು ಸೇರಿದೆ. ಇದುವರೆಗೆ 29,566ಎಕ್ರೆ ಭೂಸ್ವಾಧೀನ ಐತೀರ್ಪು ಹೊರಡಿಸಲಾಗಿದೆ. 59,354 ಎಕ್ರೆ ಜಮೀನು ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಬೇಕಿದೆ.
ಮುಳುಗಡೆ ಹೊಂದಲಿರುವ ಜಮೀನನ್ನು 2ಹಂತದಲ್ಲಿ ಭೂಸ್ವಾಧೀನಕ್ಕೆ ಒಳಪಡಿಸುವ ಬದಲು ಒಂದೇ ಹಂತದಲ್ಲಿ ಭೂಸ್ವಾಧೀನಪಡಿಸಲು ಈಗಾಗಲೇ ತೀರ್ಮಾನಿಸಲಾಗಿದೆ.
ಯೋಜನೆ ಅನುಷ್ಠಾನಕ್ಕೆ ಆರಂಭದಲ್ಲಿ ರೂ. 51,148 ಕೋಟಿ ಯೋಜನಾ ಮೊತ್ತ ಅಂದಾಜಿಸಲಾಗಿತ್ತು. ಈಗ ಪರಿಷ್ಕೃತ ರೂ. 87,818ಕೋಟಿ ಅಂದಾಜಿಸಲಾಗಿದೆ. ಇದರಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ರೂ. 17,627 ಕೋಟಿ ಆರಂಭದಲ್ಲಿ ಅಂದಾಜಿಸಲಾಗಿತ್ತು. ಪ್ರಸ್ತುತ ಪರಿಷ್ಕೃತ ಮೊತ್ತ ರೂ. 40,557.09 ಕೋಟಿ ರೂಪಾಯಿ ಅಂದಾಜಿಸಲಾಗಿದೆ.
ಯೋಜನೆಗೆ ಸಂಬಂಧಿಸಿದಂತೆ 9 ಉಪ ಯೋಜನಾ ಸಿವಿಲ್ ಕಾಮಗಾರಿಗಳಿಗೆ ಪರಿಷ್ಕೃತ ಅಂದಾಜು ಮೊತ್ತ 25,122.53 ಕೋಟಿ ರೂಪಾಯಿ ಅಂದಾಜಿಸಲಾಗಿದೆ.



