ಕಲಬುರ್ಗಿ: ರಾಜ್ಯದ ಹಲವೆಡೆ ಸುರಿದ ಭಾರೀ ಮಳೆಯಿಂದಾಗಿ ಬೆಳೆ ನಷ್ಟ ಸಂಭವಿಸಿದ್ದು ರೈತರ ಅನುಕೂಲಕ್ಕಾಗಿ ಬೆಳೆ ಸಾಲ ಮನ್ನಾ ಮಾಡಬೇಕೆಂಬ ಬೇಡಿಕೆಯನ್ನು ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಸಂಭವಿಸಿರುವ ಬೆಳೆಹಾನಿಯನ್ನು ಕಂದಾಯ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳಿಂದ ಜಂಟಿ ಸಮೀಕ್ಷೆ ನಡೆಸಲು ಆದೇಶಿಸಲಾಗಿದೆ. ವಾರದಲ್ಲಿ ಈ ಸಮೀಕ್ಷೆ ಪೂರ್ಣಗೊಂಡು ವರದಿ ಸಲ್ಲಿಕೆಯಾಗಲಿದೆ. ಆ ಬಳಿಕ ಬೆಳೆನಷ್ಟ ಪರಿಹಾರ ಪಾವತಿಸುವುದಾಗಿ ಹೇಳಿದರು.
ಈ ಬಾರಿ ಅದೃಷ್ಟವಶಾತ್ ರಾಜ್ಯದ ಹಲವು ಕಡೆ ವಾಡಿಕೆಗಿಂತ ಶೇ. 4ರಷ್ಟು ಹೆಚ್ಚು ಮಳೆಯಾಗಿದೆ. ಬೀದರ್, ಕಲಬುರಗಿ, ಯಾದಗಿರಿ ಸೇರಿ ಹಲವಾರು ಜಿಲ್ಲೆಗಳಲ್ಲಿ ಬೆಳೆನಷ್ಟ ಹೆಚ್ಚಾಗಿದೆ. ಕೂಡಲೇ ಪರಿಹಾರ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಬೆಳೆ ನಷ್ಟದ ಬಗ್ಗೆ ಮಧ್ಯಂತರ ವರದಿ ಪಡೆದಿಲ್ಲ. ಜಂಟಿ ಸಮೀಕ್ಷೆಯ ಅಂತಿಮ ವರದಿ ಪಡೆದು, ಬಳಿಕ ಕ್ರಮ ಕೈಗೊಳ್ಳಲಾಗುವುದು. 2024-25ನೇ ಸಾಲಿಗೆ ಬೆಳೆವಿಮೆ ಯೋಜನೆಯಡಿ 656 ಕೋಟಿ ರೂ. ಪರಿಹಾರ ಪಾವತಿಸಲಾಗಿದೆ. ಇದು ಎಲ್ಲಾ ರಾಜ್ಯಗಳಿಗಿಂತಲೂ ಹೆಚ್ಚಿನ ಮೊತ್ತವಾಗಿದೆ. ಬೆಳೆ ವಿಮೆ ಯೋಜನೆಯನ್ನು ಹೊಂದಿಲ್ಲದವರಿಗೂ ಪರಿಹಾರ ಪಾವತಿಯ ಬಗ್ಗೆ ಪರಿಶೀಲಿಸುವುದಾಗಿ ಹೇಳಿದರು.
ಹಿಂದೆ ಕೇಂದ್ರ ಸರ್ಕಾರ ನಮಗೆ ಬರ ಪರಿಹಾರದ ಹಣ ನೀಡಲಿಲ್ಲ. ಸುಪ್ರೀಂಕೋರ್ಟ್ಗೆ ಹೋಗಿ ಹೋರಾಟದ ಮೂಲಕ ನಾವು ಪರಿಹಾರ ಪಡೆದುಕೊಂಡಿದ್ದೆವು ಎಂದರು.
ಎನ್ಡಿಆರ್ಎಫ್ ನಿಯಮಾವಳಿಗಳನ್ನು ಬದಲಾವಣೆ ಮಾಡಿ ಪ್ರಕೃತಿ ವಿಕೋಪ ನಷ್ಟ ಪರಿಹಾರವನ್ನು ಹೆಚ್ಚಿಸಬೇಕೆಂದು ಹಲವಾರು ಬಾರಿ ಪ್ರಧಾನಮಂತ್ರಿ ನರೇಂದ್ರಮೋದಿ, ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಆದರೆ ಕೇಂದ್ರದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಲ್ಬುರ್ಗಿಯಲ್ಲಿ ಹೆಚ್ಚಿನ ಮಳೆಯಾಗಿದ್ದು, ಬೆಳೆಹಾನಿಯಾಗಿರುವ ಬಗ್ಗೆ ಜಂಟಿಸಮೀಕ್ಷೆ ನಡೆಸಲು ಸೂಚನೆ ನೀಡಲಾಗಿದೆ. ವರದಿ ಬಂದ ನಂತರ ಬೆಳೆಪರಿಹಾದ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ತೊಗರಿ ಗುಲ್ಬರ್ಗಾದಲ್ಲಿ ಪ್ರಮುಖವಾದ ಬೆಳೆ. ಇಲ್ಲಿನ ರೈತರು ಎರಡು ಬಾರಿ ತೊಗರಿ ಬೆಳೆ ತೆಗೆಯಲು ಪ್ರಯತ್ನಿಸಿದರೂ, ಮಳೆಯಿಂದಾಗಿ ಹೊಲದಲ್ಲಿ ನೀರು ನಿಂತ ಕಾರಣ ಹಾಗೂ ನೆಟ್ಟೆ ರೋಗದಿಂದ ಬೆಳೆ ಹಾಳಾಗಿರುವುದಾಗಿ ತಮ್ಮ ಸಮಸ್ಯೆಯನ್ನು ವಿವರಿಸಿದ್ದಾರೆ. ಹೆಚ್ಚಿನ ಮಳೆಯಾಗಿರುವುದರಿಂದ ಸರ್ವೇಯನ್ನೂ ತ್ವರಿತಗತಿಯಲ್ಲಿ ನಡೆಸಲು ಸಾಧ್ಯವಾಗುವುದಿಲ್ಲ. ಆದಾಗ್ಯೂ ಬೆಳೆಹಾನಿಯಾಗಿರುವ ಬಗ್ಗೆ ಜಂಟಿ ಸಮೀಕ್ಷೆ ನಡೆಸಲು ಸೂಚನೆ ನೀಡಲಾಗಿದ್ದು, ವರದಿ ಬಂದ ನಂತರ ಬೆಳೆ ಪರಿಹಾರವನ್ನು ನೀಡಲಾಗುವುದು ಎಂದರು.




