ಗಮನ ಸೆಳೆದ ಸತೀಶ್ ಜಾರಕಿಹೊಳಿ ಭೋಜನಕೂಟ

5 months ago

ಬೆಂಗಳೂರು: ಸಿಎಂ ಹುದ್ದೆಗೆ ಪಟ್ಟು ಹಿಡಿದಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಶಾಸಕರ ಬಲಾಬಲ ಕ್ರೂಡೀಕರಣಕ್ಕೆ ಮುಂದಾಗಿರುವ ಬೆನ್ನಲ್ಲೇ ದಲಿತ ಸಮುದಾಯದ ಮಂತ್ರಿಗಳು ಪ್ರತ್ಯೇಕ ಸಭೆ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ.

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಮತ್ತು ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸುತ್ತಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ಬಣ ಏಕಾಏಕಿ ಕ್ರಿಯಾಶೀಲವಾಗಿದ್ದು, ಸಭೆ ನಡೆಸುವ ಮೂಲಕ ವಿದ್ಯಮಾನಗಳ ಅಖಾಡಕ್ಕೆ ಧುಮುಕಿದ್ದಾರೆ.

ಸಚಿವರಾದ ಡಾ. ಜಿ ಪರಮೇಶ್ವರ್, ಡಾ. ಮಹದೇವಪ್ಪ ಮಾಜಿ ಸಚಿವ ಕೆ ಎನ್ ರಾಜಣ್ಣ ಸೇರಿದಂತೆ ಹಲವರು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ನಿವಾಸದಲ್ಲಿ ಭೋಜನಕೂಟ ನಡೆಸಿದರು. ಸಿಎಂ ಹುದ್ದೆಗೆ ಪಟ್ಟು ಹಿಡಿದು ಕಾರ್ಯಾಚರಣೆ ನಡೆಸುತ್ತಿರುವ ಡಿ ಕೆ ಶಿವಕುಮಾರ್ ವಿರುದ್ಧ ಪ್ರತಿ ತಂತ್ರಕ್ಕೆ ಈ ನಾಯಕರು ತೀರ್ಮಾನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ಧಾವಿಸಲು ನಿರ್ಧರಿಸಿರುವ ಈ ನಾಯಕರು ಸದ್ಯದಲ್ಲಿಯೇ ದೆಹಲಿಗೆ ತೆರಳಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಮತ್ತು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಬದಲಾವಣೆಯ ತಮ್ಮ ಈ ಹಿಂದಿನ ಬೇಡಿಕೆಯನ್ನು ಹೈಕಮಾಂಡ್ ಮುಂದೆ ಮಂಡಿಸಲು ತೀರ್ಮಾನಿಸಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದುಬಂದಿದೆ. 

ಸಭೆ ನಡುವೆ ಸುದ್ದಿಗಾರರ ಜೊತೆ ಮಾತನಾಡಿದ ಜಿ ಪರಮೇಶ್ವರ್, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತಾಗಿ ಯಾವುದೇ ಚರ್ಚೆ ನಡೆದಿಲ್ಲ. ತಾವುಗಳು ಒಟ್ಟಾಗಿ ಭೋಜನ ಸವಿದಿದ್ದು ಹಲವಾರು ವಿಷಯಗಳನ್ನು ಚರ್ಚೆ ಮಾಡಿದ್ದೇವೆ ಎಂದರು.

ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ಒಪ್ಪಿಗೆ ಪಡೆದು ಮಂತ್ರಿಮಂಡಲ ಪುನರ್ ರಚನೆ ಮಾಡುವುದಾಗಿ ತಿಳಿಸಿದ್ದಾರೆ. ಅದನ್ನು ಹೊರತುಪಡಿಸಿ ನಾಯಕತ್ವ ಬದಲಾವಣೆ ಕುರಿತಾಗಿ ಯಾವುದೇ ಬೆಳವಣಿಗೆಗಳು ನಡೆದಿಲ್ಲ ಎಂದರು.

ಮಾಜಿ ಸಚಿವ ಕೆ ಎನ್ ರಾಜಣ್ಣ ಪ್ರತಿಕ್ರಿಯಿಸಿ, ಈ ಹಿಂದೆಯೇ ಹೈಕಮಾಂಡ್ ನಾಯಕತ್ವ ಕುರಿತಾಗಿ ತನ್ನ ನಿಲುವು ಪ್ರಕಟಿಸಿದೆ. ಅಂದು ಲಿಖಿತವಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಮತ್ತು ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿ ಎಂದು ಘೋಷಣೆ ಮಾಡಿದೆ. ಅದಕ್ಕೆ ಬದ್ಧರಾಗಿ ಎಲ್ಲರೂ ಕೆಲಸ ಮಾಡಬೇಕಿದೆ ಎಂದರು.

Leave a Reply