ಯತೀಂದ್ರಗೆ ಬುದ್ಧಿಮಾತು ಹೇಳಿದ ಸಿದ್ದರಾಮಯ್ಯ

4 months ago

ಬೆಳಗಾವಿ: ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಉಪಹಾರಕ್ಕೂಟ ನಡೆಸುವ ಮೂಲಕ ಅಧಿಕಾರ ಹಸ್ತಾಂತರ ವಿಚಾರಕ್ಕೆ ವಿರಾಮ ಹಾಕಿದ್ದಾರೆ ಎಂಬ ಸುದ್ದಿಗಳ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ನೀಡಿದ ಹೇಳಿಕೆ ಕಾಂಗ್ರೆಸ್ ನಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿದೆ.

ಅಧಿಕಾರ ಹಸ್ತಾಂತರ ಕುರಿತು ಇವರು ನೀಡಿರುವ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಹೈಕಮಾಂಡ್ ಈ ನಮ್ಮ ಮುಂದೆ ಇಂತಹ ಹೇಳಿಕೆ ನೀಡದಂತೆ ಎಚ್ಚರಿಕೆಯ ಸಂದೇಶ ರವಾನಿಸಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ತಮ್ಮ ಪುತ್ರ ನೀಡಿರುವ ಹೇಳಿಕೆಯಿಂದ ಅನಗತ್ಯ ಗೊಂದಲ ಸೃಷ್ಟಿಯಾಗುತ್ತಿದೆ. ನಾಯಕತ್ವ ಬದಲಾವಣೆ ಸೇರಿದಂತೆ ಪಕ್ಷದ ಕೆಲವು ಸೂಕ್ಷ್ಮ ವಿಚಾರಗಳ ಬಗ್ಗೆ ಅವರು ಯಾವುದೇ ಹೇಳಿಕೆ ನೀಡದಂತೆ ಸಾಕಿತ್ತು ಮಾಡಬೇಕು ಎಂದು ಸೂಚಿಸಿದ್ದಾರೆ.

ಹೈಕಮಾಂಡ್ ನೀಡಿದ ಈ ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪುತ್ರನನ್ನು ಕರೆಯಿಸಿಕೊಂಡು ಈ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ನಾಯಕತ್ವ ಕುರಿತಾಗಿ ಇನ್ನು ಮುಂದೆ ಯಾವುದೇ ಹೇಳಿಕೆ ನೀಡದಂತೆ ತಮ್ಮ ಪುತ್ರನಿಗೆ ಹಿತವಚನ ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೀನು ನೀಡುವ ಹೇಳಿಕೆಯಿಂದ ಪಕ್ಷದಲ್ಲಿ ಅನಗತ್ಯ ಗೊಂದಲ ಸೃಷ್ಟಿಯಾಗುತ್ತದೆ. ಹೇಳಿಕೆಗೆ ಪ್ರತಿ ಹೇಳಿಕೆ ಬರುವ ಮೂಲಕ ಪಕ್ಕದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬ ಸಂದೇಶ ರವಾನೆಯಾಗುತ್ತಿದ್ದು, ಇದು ಪ್ರತಿಪಕ್ಷಗಳಿಗೆ ಅಸ್ತ್ರ ಒದಗಿಸಿ ಕೊಟ್ಟಂತಾಗುತ್ತಿದೆ ಎಂದು ಕಿವಿಮಾತು ಹೇಳಿರುವುದಾಗಿ ತಿಳಿದುಬಂದಿದೆ.

Leave a Reply