ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್

3 months ago

ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.

ವಿನಯ್ ಕುಲಕರ್ಣಿ ಎರಡನೇ ಬಾರಿ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಸುನೀಲ್ ದತ್ತ ಯಾದವ್ ಅವರು ವಿಚಾರಣೆ ನಡೆಸಿದರು. ಇದಕ್ಕೂ ಮುನ್ನ ವಾದ ಮುಂದುವರೆಸಿದ ಕುಲಕರ್ಣಿ ಪರ ವಕೀಲರು, ಕೊಲೆ ಪ್ರಕರಣದಲ್ಲಿ ಅರ್ಜಿದಾರರ ಯಾವುದೇ ಪಾತ್ರವಿಲ್ಲ. ಕೊಲೆಯಾದ ಸ್ಥಳದಲ್ಲಿಯೂ ಹಾಜರಿರಲಿಲ್ಲ. ಪ್ರಕರಣದಲ್ಲಿ ಇತರೆ ಆರೋಪಿಗಳಿಗೆ ಈಗಾಗಲೇ ಜಾಮೀನು ಮಂಜೂರಾಗಿದೆ. ಜಾಮೀನು ರದ್ದುಪಡಿಸಿ ಆದೇಶಿಸುವುದಕ್ಕೂ ಜಾಮೀನು ನೀಡುವ ಸಂದರ್ಭದಲ್ಲಿ ವಿಧಿಸುವ ಷರತ್ತುಗಳನ್ನು ಉಲ್ಲಂಘಿಸುವುದಕ್ಕೂ ಸಾಕಷ್ಟು ವ್ಯತ್ಯಾಸವಿದೆ ಎಂದರು.

ಅಲ್ಲದೆ, ಅರ್ಜಿದಾರರಿಗೆ ಜಾಮೀನು ಮಂಜೂರು ಮಾಡಿರುವುದು ತಪ್ಪು ಎಂದು ಸುಪ್ರೀಂ ಕೋರ್ಟ್ ತಿಳಿಸಿಲ್ಲ. ಆದರೆ, ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಮಾತ್ರ ಜಾಮೀನು ರದ್ದುಮಾಡಿ ಆದೇಶಿಸಿದ್ದು, ಆದೇಶದಲ್ಲಿ ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಬಹುದು ಎಂಬುದಾಗಿ ತಿಳಿಸಿದೆ. ಆದ್ದರಿಂದ ಅರ್ಜಿದಾರರ ವಿರುದ್ಧ ಇಬ್ಬರು ಅಧಿಕಾರಿಗಳ ಪಾಟಿ ಸವಾಲು ಬಾಕಿ ಇದೆ. ಹಾಗಾಗಿ ಜಾಮೀನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಆಕ್ಷೇಪಿಸಿದ ಸಿಬಿಐ ಪರ ವಕೀಲರು, ಅರ್ಜಿದಾರರ ವಿರುದ್ಧ ತನಿಖಾಧಿಕಾರಿಗಳಲ್ಲದೇ ಇನ್ನೂ ಇಬ್ಬರು ಸಾಕ್ಷಿಗಳ ವಿಚಾರಣೆ ಬಾಕಿ ಇದೆ. ಈ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಜಾಮೀನು ಮಂಜೂರು ಮಾಡಬಾರದು ಎಂದರು. ಅರ್ಜಿದಾರರು ಮತ್ತು ಸಿಬಿಐ ಪರ ವಾದ ಆಲಿಸಿದ ನ್ಯಾಯಪೀಠ, ಆದೇಶ ಕಾಯ್ದಿರಿಸಿತು.

ಈ ಹಿಂದೆ ನಡೆದ ವಿಚಾರಣೆ ವೇಳೆ ಸಿಬಿಐ ಪರ ವಕೀಲರು, ಜಾಮೀನು ಮಂಜೂರು ಮಾಡುವ ಸಂದರ್ಭದಲ್ಲಿ ನ್ಯಾಯಾಲಯ ವಿಧಿಸುವ ಎಲ್ಲ ಷರತ್ತಿಗೆ ಬದ್ದವಾಗಿರುವುದಾಗಿ ಮುಚ್ಚಳಿಕೆ ಬರೆದುಕೊಟ್ಟು, ಈಗ ಅದನ್ನು ಉಲ್ಲಂಘಿಸಿದ್ದಾರೆ. ಷರತ್ತುಗಳ ಉಲ್ಲಂಘಿಸಿದ ಕಾರಣಕ್ಕೆ ಜಾಮೀನು ರದ್ದುಪಡಿಸಿದ ಬಳಿಕ ಏನಾಗಲಿದೆ ಎಂಬ ಅಂಶಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ದಿಷ್ಟ ತೀರ್ಪುಗಳಿಲ್ಲ. ಜಾಮೀನು ವಿನಾಯಿತಿಯಾಗಿದ್ದು, ಅರ್ಜಿದಾರರಿಗೆ ನೀಡಲಾಗಿತ್ತು. ಷರತ್ತು ಉಲ್ಲಂಘಿಸಿರುವುದರಿಂದ ಮತ್ತೆ ಜಾಮೀನು ಪಡೆಯುವುದಕ್ಕೆ ಅವರು ಅರ್ಹರಿಲ್ಲ ಎಂದಿದ್ದರು.

ಅರ್ಜಿದಾರ ವಿನಯ್ ಕುಲಕರ್ಣಿ ಪರ ವಕೀಲರು, ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಸಾಕ್ಷಿಯಾಗಿರುವವರು ನಮ್ಮ ಕಕ್ಷಿದಾರರಿಗೆ ನನ್ನ ಬಳಿ ಬಂದು ನಮಸ್ಕರಿಸಿದರು. ಇದಕ್ಕೆ ಪ್ರತಿಯಾಗಿ ಆಶೀರ್ವದಿಸಿದ್ದಾರೆ ಎಂಬ ಕಾರಣಕ್ಕೆ ಈ ಹಿಂದೆ ಜಾಮೀನು ರದ್ದುಪಡಿಸಲಾಗಿದೆ.

Leave a Reply