ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ ಭಾಗಿಯಾಗಿರುವುದು ನಾಚಿಗೇಡಿನ ವಿಷಯ: ಸಿದ್ದರಾಮಯ್ಯ

5 months ago

ಬೆಂಗಳೂರು: ಪೊಲೀಸರು ಎಚ್ಚರಿಕೆಯಿಂದ ಇದ್ದರೆ ಅಪರಾಧ ಚಟುವಟಿಕೆಗಳು ನಡೆಯುವುದೇ ಇಲ್ಲ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ರಾಜದ ಹಲವೆಡೆ ನಡೆದ ಎಟಿಎಂ ದರೋಡೆ ಪ್ರಕರಣಗಳು ಮತ್ತು ಬಳ್ಳಾರಿ ಗಲಭೆ ಪ್ರಕರಣಗಳನ್ನು ತಡೆಗಟ್ಟಬಹುದಿತ್ತು ಎಂದು ತಿಳಿಸಿದ್ದಾರೆ.

ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಸಮೀಪ ನಡೆದ ಕಾಲ್ತುಳಿತ ಪ್ರಕರಣಗಳು ಕೂಡ ತಡೆಗಟ್ಟಬಹುದಾಗಿತ್ತು. ಪೊಲೀಸರು ಎಚ್ಚರವಾಗಿದ್ದಿದ್ದರೆ ಇಂತಹ ಸಮಸ್ಯೆ ಎದುರಾಗುತ್ತಿರಲಿಲ್ಲ ಎಂದರು.

ಸಮಾಜದಲ್ಲಿ ಶಾಂತಿ ನೆಮ್ಮದಿ ಕಾಪಾಡುವ ಗುರುತರವಾದ ಕಾರ್ಯವನ್ನು ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ನಡೆಸುತ್ತಿದೆ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ ಅವಕಾಶ, ರಕ್ಷಣೆಯನ್ನು ಒದಗಿಸಿದೆ. ಎಲ್ಲರಿಗೂ ಕಾನೂನು ಒಂದೇ. ಯಾರು ತಪ್ಪು ಮಾಡಿದರೂ ಅದು ತಪ್ಪೇ ಎಂದರು.

ಬಲಾಢ್ಯರು, ಸಮಾಜ ಘಾತುಕ ಶಕ್ತಿಗಳಿಗೆ ಯಾವುದೇ ಕಾರಣಕ್ಕೂ ಮಣೆ ಹಾಕಬಾರದು. ದುರ್ಬಲರು, ಪರಿಶಿಷ್ಟ ಜಾತಿ, ವರ್ಗದ ಜನರು, ಧಾರ್ಮಿಕ ಅಲ್ಪಸಂಖ್ಯಾತರು ರಕ್ಷಣೆ ಎಲ್ಲರ ಹೊಣೆ. ದುರ್ಬಲರು ಯಾವುದೇ ಕಾರಣಕ್ಕೂ ಅನ್ಯಾಯಕ್ಕೆ ಒಳಗಾಗಬಾರದು. ಪ್ರತಿಯೊಬ್ಬರಿಗೂ ಸಮಾನ ನ್ಯಾಯ ಒದಗಿಸುವುದು ಪೊಲೀಸರ ಕರ್ತವ್ಯವಾಗಿದೆ ಎಂದರು.

ತಹಶೀಲ್ದಾರ್ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಸರಿಯಾಗಿ ಕರ್ತವ್ಯ ನಿರ್ವಹಿಸಿದರೆ ಆ ತಾಲೂಕಿನಲ್ಲಿ ಜನರು ನೆಮ್ಮದಿಯಿಂದ ಇರಲು ಸಾಧ್ಯ. ಇದೇ ರೀತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ, ಎಸ್ಪಿ ಮತ್ತು ಸಿಇಒ ಸರಿಯಾಗಿ ಕರ್ತವ್ಯ ನಿರ್ವಹಿಸಿದರೆ ಆ ಜಿಲ್ಲೆಯ ಜನರು ನೆಮ್ಮದಿಯಿಂದ ಇರಲು ಸಾಧ್ಯ. ಆದರೆ ಕೆಲವು ಪೊಲೀಸ್ ಠಾಣೆಗಳಲ್ಲಿ ಕೆಲವು ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸದ ಕಾರಣಕ್ಕೆ ಜನ ತೊಂದರೆ ಅನುಭವಿಸಬೇಕಾಗುತ್ತದೆ ಎಂದರು.

ಕೊಲೆ, ಸುಲಿಗೆ, ಡಕಾಯಿತಿ, ದರೋಡೆ ಪ್ರಕಣಗಳ ಸಂಖ್ಯೆಯಲ್ಲಿ ಕಳೆದ ಒಂದು ವರ್ಷದಲ್ಲಿ ಕಡಿಮೆಯಾಗಿದೆ. ಆದರೆ ಸೈಬರ್ ಅಪರಾಧ, ಡ್ರಗ್ಸ್ ಚಟುವಟಿಕೆಗಳು ಹೆಚ್ಚಾಗಿದ್ದು, ಅದನ್ನು ಮಟ್ಟ ಹಾಕಲು ಕಠಿಣ ಕ್ರಮಗಳನ್ನು ಜರುಗಿಸಬೇಕು. ನಮ್ಮ ರಾಜ್ಯದಲ್ಲಿ ಕ್ರಿಮಿನಲ್ ಪ್ರಕರಣಗಳಲ್ಲಿ ಕನ್ವಿಕ್ಷನ್ ದರ ಕಡಿಮೆಯಿದೆ. ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರಿಗೆ ಶಿಕ್ಷೆಯನ್ನು ಖಾತ್ರಿಪಡಿಸುವಲ್ಲಿ ಪೊಲೀಸರ ಪಾತ್ರ ಮುಖ್ಯವಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಕನ್ವಿಕ್ಷನ್ ಪ್ರಮಾಣ ಕಳೆದ ವರ್ಷ ಶೇ.3ರಷ್ಟಿತ್ತು ಈಗ ಶೇ.12 ಕ್ಕೆ ಸುಧಾರಿಸಿದ್ದು, ಇದನ್ನು ಇನ್ನಷ್ಟು ಉತ್ತಮಪಡಿಸಬೇಕಿದೆ ಎಂದರು.

ಅಪರಾಧವನ್ನು ಸಂಪೂರ್ಣವಾಗಿ ನಿಲ್ಲಿಸಲು ಸಾಧ್ಯವಿಲ್ಲದಿದ್ದರೂ, ಅಪರಾಧ ಪ್ರಮಾಣ ಕಡಿಮೆ ಮಾಡಲು ಸಾಧ್ಯವಿದೆ. ಆದರೆ ಕಳೆದ ಸಾಲಿನಲ್ಲಿ 88 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ ಭಾಗಿಯಾಗಿರುವುದು ನಾಚಿಗೇಡಿನ ವಿಷಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜೈಲುಗಳಲ್ಲಿ ಅವ್ಯವಸ್ಥೆ ಪ್ರಕರಣಗಳನ್ನು, ಮಾದಕ ವಸ್ತು ಜಾಲ ನಿಯಂತ್ರಣದಲ್ಲಿ ಯಾವುದೇ ಲೋಪವನ್ನು ಸಹಿಸಲು ಸಾಧ್ಯವಿಲ್ಲ. ಮಾದಕ ವಸ್ತು ಪ್ರಕರಣಗಳಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲು ಮುಂದಿನ ಅಧಿವೇಶದನಲ್ಲಿ ಹೊಸ ಕಾನೂನು ಜಾರಿಗೊಳಿಸಲು ಸರ್ಕಾರ ಸಿದ್ಧವಿದೆ. ಇದೇ ರೀತಿ ಸೈಬರ್ ಅಪರಾಧಗಳು ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದ್ದು, ಇದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಬೇಕಿದೆ ಎಂದರು.

Leave a Reply