



ಬೆಳಗಾವಿ, ಏ.25: ಮಹಾತ್ಮಾ ಗಾಂಧೀಜಿ ಅವರ ಗ್ರಾಮ ಸ್ವರಾಜ್ಯದ ಕನಸು ನನಸಾಗಿಸಲು ಗ್ರಾಮ ಆಡಳಿತ ಬಲಪಡಿಸುವುದು ಅಗತ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಸುವರ್ಣ ವಿಧಾನಸೌಧದ ಸೆಂಟ್ರಲ್ ಹಾಲ್‌ನಲ್ಲಿ ರಾಷ್ಟ್ರೀಯ ಪಂಚಾಯತ ರಾಜ್ ದಿನಾಚರಣೆ–2026 ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮಗಳ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ತಳಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಪಂಚಾಯತ ರಾಜ್ ಇಲಾಖೆ ಮಹತ್ವದ ಪಾತ್ರ ವಹಿಸಬೇಕೆಂದು ತಿಳಿಸಿದರು.
ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಎಂಬ ಮೂರು ಹಂತದ ವ್ಯವಸ್ಥೆಯಡಿ ಗ್ರಾಮಾಭಿವೃದ್ಧಿಗೆ ಬಲವಾದ ಅಡಿಪಾಯ ಹಾಕಲಾಗಿದೆ ಎಂದು ಅವರು ಹೇಳಿದರು. ಗ್ರಾಮಗಳ ಸಬಲೀಕರಣದಲ್ಲಿ ಸ್ಥಳೀಯ ಆಡಳಿತಗಳ ಪಾತ್ರ ಮಹತ್ವದ್ದಾಗಿದ್ದು, ಶಾಸಕಾಂಗ ಹಾಗೂ ಕಾರ್ಯಾಂಗದ ಸಮನ್ವಯದಿಂದ ಜನಸಾಮಾನ್ಯರಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಕಾರ್ಯ ಇನ್ನಷ್ಟು ಪರಿಣಾಮಕಾರಿಯಾಗಬೇಕೆಂದರು.
ಸರ್ಕಾರ ಜಾರಿಗೊಳಿಸಿರುವ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವಲ್ಲಿ ಬೆಳಗಾವಿ ಜಿಲ್ಲೆ ಮುಂಚೂಣಿಯಲ್ಲಿದೆ. ಅಧಿಕಾರಿಗಳು ಕಾನೂನು ವ್ಯಾಪ್ತಿಯಲ್ಲಿ ತಮ್ಮ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಜನಮನದಲ್ಲಿ ಶಾಶ್ವತವಾಗಿ ಉಳಿಯುವಂತೆ ಕೆಲಸ ಮಾಡಬೇಕು ಎಂದು ಸಚಿವರು ಕರೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮಾತನಾಡಿ, ಗ್ರಾಮ ಸ್ವರಾಜ್ಯ ಹಾಗೂ ಮಹಿಳಾ ಸಬಲೀಕರಣದಲ್ಲಿ ಪಂಚಾಯತ ರಾಜ್ ಇಲಾಖೆಯ ಪಾತ್ರ ಅಪಾರವಾಗಿದೆ ಎಂದರು. ಗ್ರಾಮ ಪಂಚಾಯತಗಳು ಬೇರುಮಟ್ಟದ ಅಭಿವೃದ್ಧಿಯ ಕೇಂದ್ರಬಿಂದುಗಳಾಗಿದ್ದು, ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ಹೊಣೆ ಅಧಿಕಾರಿಗಳ ಮೇಲಿದೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, “ಗ್ರಾಮಗಳು ಸುಧಾರಿಸಿದರೆ ದೇಶ ಸುಧಾರಿಸುತ್ತದೆ” ಎಂಬ ಗಾಂಧೀಜಿಯವರ ಕನಸನ್ನು ನನಸಾಗಿಸಲು ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ ಎಂದು ಹೇಳಿದರು. ಗ್ರಾಮ ಪಂಚಾಯತ ಕಟ್ಟಡವೇ ಗ್ರಾಮದ ಸಂಸತ್ ಆಗಿದ್ದು, ಗ್ರಾಮೀಣ ಜನರಿಗೆ ಆಡಳಿತಾತ್ಮಕ ಹಕ್ಕು ನೀಡಿದ ಪಂಚಾಯತ ರಾಜ್ ವ್ಯವಸ್ಥೆ ಜನಪರ ಆಡಳಿತಕ್ಕೆ ಮಾದರಿಯಾಗಿದೆ ಎಂದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಮಾತನಾಡಿ, ಪಂಚಾಯತ ರಾಜ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸುವ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ಇದಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷ ಮಹಾಂತೇಶ ಕೌಜಲಗಿ, ಶಾಸಕರಾದ ಬಾಬಾಸಾಹೇಬ ಪಾಟೀಲ, ಗಣೇಶ ಹುಕ್ಕೇರಿ, ಆಸೀಪ್ (ರಾಜು) ಸೇಠ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷ ವಿನಯ ನಾವಲಗಟ್ಟಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಂಜಯ ಶೆಟ್ಟಣ್ಣವರ, ಪೊಲೀಸ್ ಆಯುಕ್ತ ಬೋರಸೆ ಗುಲಾಬರಾವ್ ಭೂಷಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿಗಳಾದ ಬಸವರಾಜ ಹೆಗನಾಯಕ, ಬಸವರಾಜ ಅಡವಿಮಠ, ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ, ಯೋಜನಾಧಿಕಾರಿ ರವಿ ಬಂಗಾರಪ್ಪನವರ ಸೇರಿದಂತೆ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಉನ್ನತ ಸಾಧನೆಗೈದ ಪ್ರಾರ್ಥನಾ ಪಾಟೀಲ ಅವರನ್ನು ಸನ್ಮಾನಿಸಲಾಯಿತು. ಜೊತೆಗೆ ಪಂಚಾಯತ ರಾಜ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗಣ್ಯರು ಗೌರವಿಸಿದರು.