
ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ಅಧಿಕೃತವಾಗಿ ರದ್ದುಗೊಳಿಸಲಾಗಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಬೆನ್ನಲ್ಲೇ, ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಗಳು ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್, “ಒಬ್ಬ ಸದಸ್ಯ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾದ ಕ್ಷಣದಿಂದಲೇ ನಿಯಮಾನುಸಾರ ಅವರ ಸದಸ್ಯತ್ವ ಸ್ವಯಂಚಾಲಿತವಾಗಿ ರದ್ದಾಗುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.
ಶಾಸಕ ಸ್ಥಾನ ರದ್ದಾದ ಹಿನ್ನೆಲೆಯಲ್ಲಿ ಧಾರವಾಡ ವಿಧಾನಸಭಾ ಕ್ಷೇತ್ರ ಇದೀಗ ಅಧಿಕೃತವಾಗಿ ತೆರವಾಗಿದ್ದು, ಮುಂದಿನ ಉಪಚುನಾವಣೆಯ ಕುರಿತು ರಾಜಕೀಯ ಚಟುವಟಿಕೆಗಳು ಚುರುಕುಗೊಳ್ಳುವ ಸಾಧ್ಯತೆ ಇದೆ.
ಯೋಗೀಶ್ ಗೌಡ ಹತ್ಯೆ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಪ್ರಕರಣವಾಗಿದ್ದು, ಇದೀಗ ನ್ಯಾಯಾಲಯದ ತೀರ್ಪಿನೊಂದಿಗೆ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
