ಹಿಂದಿ ಹೇರಿಕೆ, ಭಾಷಾ ತಾರತಮ್ಯಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ?: ಎಚ್.ಡಿ.ಕುಮಾರಸ್ವಾಮಿ

4 years ago

ಬೆಂಗಳೂರು: ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗ (SSC) 20,000 ಹುದ್ದೆ ಆಯ್ಕೆಗೆ ಹಿಂದಿ-ಇಂಗ್ಲೀಷ್‌ʼನಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿದೆ. ಆಯ್ಕೆಯಾದ ಅಭ್ಯರ್ಥಿಯನ್ನು ಯಾವ ರಾಜ್ಯಕ್ಕಾದರೂ ಕಳುಹಿಸಬಹುದು. ಕನ್ನಡ ಸೇರಿ ಯಾವುದೇ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಗೆ ಅವಕಾಶವಿಲ್ಲ. ಹಿಂದಿ ಹೇರಿಕೆ, ಭಾಷಾ ತಾರತಮ್ಯಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.

ಕೇಂದ್ರ Bharatiya Janata Party (BJP) ಸರಕಾರಕ್ಕೆ ಪ್ರಾದೇಶಿಕ ಭಾಷೆಗಳನ್ನು ಹತ್ತಿಕ್ಕಲೇಬೇಕು ಎನ್ನುವ ಕೆಟ್ಟ ಹಠವಿದ್ದಂತೆ ಇದೆ. ಕನ್ನಡವೂ ಸೇರಿ ದಕ್ಷಿಣದ ಪ್ರಾದೇಶಿಕ ಭಾಷೆಗಳ ಬಗ್ಗೆ ಇನ್ನಿಲ್ಲದ ಅಸಹನೆ, ದ್ವೇಷ ಮೈಗೂಡಿಸಿಕೊಂಡಿದೆ ಎನಿಸುತ್ತಿದೆ. ತ್ರಿಭಾಷಾ ಸೂತ್ರಕ್ಕೆ ಹೇಗಾದರೂ ಸಮಾಧಿ ಕಟ್ಟಲೇಬೇಕೆಂದು ಹೊರಟಂತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಒಕ್ಕೂಟ ತತ್ವದಲ್ಲಿ ಆಡಳಿತ ನಡೆಸುವ ಪಕ್ಷಕ್ಕೇ ಒಪ್ಪಿಗೆ ಇಲ್ಲ ಎನ್ನುವುದನ್ನು ಇದು ತೋರಿಸುತ್ತಿದೆ. ಹಿಂದಿ ಭಾಷಿಗರನ್ನು ಕರ್ನಾಟಕ ಹಾಗೂ ದಕ್ಷಿಣ ಭಾರತದಲ್ಲಿ ತುಂಬುವ ದುಸ್ಸಾಹಸವಷ್ಟೇ ಇದು. ಈ ವಿಷಯದಲ್ಲಿ ನಮ್ಮ 2 ಬೇಡಿಕೆಗಳಿವೆ.
1.ಕನ್ನಡದಲ್ಲೂ ಪರೀಕ್ಷೆ ನಡೆಸಬೇಕು.
2.ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರನ್ನೇ ನೇಮಿಸಬೇಕು ಎಂದು ಒತ್ತಾಯಿಸಿದರು.

ಈ ಬದಲಾವಣೆ ನಂತರವಷ್ಟೇ ಸಿಬ್ಬಂದಿ ಆಯ್ಕೆ ಆಯೋಗ ಪರೀಕ್ಷೆ ನಡೆಸಬೇಕು. ಕನ್ನಡದಲ್ಲೇ ಪರಿಕ್ಷೆ ನಡೆಸಿದರೆ ಕರ್ನಾಟಕದ ಅನೇಕ ಪ್ರತಿಭಾವಂತ ಯುವಜನರು ಆಯ್ಕೆ ಆಗಲು ಅನುಕೂಲವಾಗುತ್ತದೆ. ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರ ನೇಮಕವಾದರೆ, ಕರ್ನಾಟಕದ ಜನರಿಗೆ ಕನ್ನಡದಲ್ಲಿ ಸೇವೆ ದೊರೆಯುತ್ತದೆ. ತಪ್ಪಿದರೆ, ಕೇಂದ್ರವು ಕನ್ನಡಿಗರ ಆಗ್ರಹಕ್ಕೆ ಗುರಿಯಾಗಬೇಕಾಗುತ್ತದೆ ಎಂದಿದ್ದಾರೆ.

#ಕರ್ನಾಟಕದಲ್ಲಿ_ಕನ್ನಡವೇ_ಮೊದಲು

Leave a Reply