ಶಾಂತಿಸ್ಥಾಪನೆ ದೃಷ್ಟಿಯಿಂದ ಎಂಇಎಸ್ ಸಂಘಟನೆ  ನಿಷೇಧಿಸಿ: ಟಿ.ಎ.ನಾರಾಯಣ ಗೌಡ

3 years ago

ಬೆಂಗಳೂರು: ರಾಜಕೀಯ ಕಾರಣಕ್ಕಾಗಿ ಗಡಿ ವಿವಾದವನ್ನು ಕೆಣಕುವ ಮೂಲಕ ಬೆಳಗಾವಿ ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ಆತಂಕದ ವಾತಾವರಣ ಸೃಷ್ಟಿಸುತ್ತಿರುವ ಎಂಇಎಸ್ ಅನ್ನು ನಿಷೇಧಿಸುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಹಲವು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದವು.

ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತ್ಯೇಕವಾಗಿ ಎಂಇಎಸ್ ಪ್ರತಿ ಕೃತಿ ದಹನ ಮಾಡಿದ ರಕ್ಷಣಾ ವೇದಿಕೆ, ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘ ಸೇರಿದಂತೆ ಹಲವು ಸಂಘಟನೆಗಳು ಶಾಂತಿ ಭಂಗಕ್ಕೆ ಯತ್ನಿಸುವ ಗೂಂಡಾಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದವು.

ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಭೂತದಹನ ಮಾಡಿದ ನೂರಾರು ಮುಖಂಡರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದೊಯ್ದರು. ಬಂಧಿತರನ್ನು ಚಾಮರಾಜಪೇಟೆಯ ಸಿಎಆರ್ ಮೈದಾನದಲ್ಲಿರಿಸಿ ನಂತರ ಬಿಡುಗಡೆ ಮಾಡಲಾಯಿತು.

ಇದಕ್ಕೂ ಮುನ್ನ ಪ್ರತಿಭಟನೆಯಲ್ಲಿ ಮಾತನಾಡಿದ ನಾರಾಯಣ ಗೌಡ,  ಭಾಷಾವಾರು ಪ್ರಾಂತ್ಯ ವಿಂಗಡಣೆಯ ನಂತರ ಕರ್ನಾಟಕ ಅನೇಕ ಕನ್ನಡದ ಪ್ರದೇಶಗಳನ್ನು ಕಳೆದುಕೊಂಡರೂ ರಾಷ್ಟ್ರೀಯ ಐಕ್ಯತೆಗೆ ಭಂಗ ಬಾರದೆಂದು ಆದ ಅನ್ಯಾಯವನ್ನು ಸಹಿಸಿಕೊಂಡು ಬಂದಿದ್ದರೂ‌ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಸಹಿಸಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಕನ್ನಡದ ನೆಲ ಬೆಳಗಾವಿ ತಮಗೆ ಸೇರಬೇಕು ಎಂದು ಮಹಾರಾಷ್ಟ್ರ ದಶಕಗಳಿಂದ ತಗಾದೆ ತೆಗೆಯುತ್ತ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಲು ಕಾರಣವಾಗಿದೆ. ಮಹಾರಾಷ್ಟ್ರದ ಒತ್ತಡದಿಂದಲೇ ಕೇಂದ್ರ ಸರ್ಕಾರದಿಂದ ರಚಿಸಲ್ಪಟ್ಟ ಮೆಹರ್ ಚಂದ್ ಮಹಾಜನ್ ಅವರ ಏಕಸದಸ್ಯ ಆಯೋಗ ಬೆಳಗಾವಿ ಕರ್ನಾಟಕಕ್ಕೆ ಸೇರಬೇಕು ಎಂದು ತೀರ್ಪು ನೀಡಿದ್ದರೂ ದಬ್ಬಾಳಿಕೆ ನಿಂತಿಲ್ಲ ಎಂದು ದೂರಿದರು.

ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಎಂಬ ಭಾಷಾಂಧ ಗೂಂಡಾ ಸಂಘಟನೆಗೆ ಹಣಕಾಸಿನ ಬೆಂಬಲ ನೀಡಿ ಗಡಿಭಾಗದಲ್ಲಿ ದಾಂಧಲೆ ನಡೆಸಲು, ಕನ್ನಡಿಗರ ಮೇಲೆ ದಾಳಿ ನಡೆಸಲು ಕಾರಣರಾಗಿದ್ದಾರೆ ಎಂದರು.

ಬೆಳಗಾವಿ ವಿವಾದ ಈಗ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಬಾಕಿ ಇದೆ. ಇಂಥ ಸಂದರ್ಭದಲ್ಲಿ ಈ ನೆಲದ ಕಾನೂನಿಗೆ ಗೌರವ ನೀಡಿ, ತೀರ್ಪಿಗಾಗಿ ಕಾಯುವ ಬದಲು ಬೆಳಗಾವಿಯಲ್ಲಿ ಸಂಘರ್ಷ ಮೂಡಿಸಲು ಯತ್ನಿಸಲಾಗುತ್ತಿದೆ. ಇದರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಮೊದಲಿನಿಂದಲೂ ಹೋರಾಡುತ್ತ ಬಂದಿದ್ದು, ಬೆಳಗಾವಿಯಲ್ಲಿ ಶಾಂತಿಸ್ಥಾಪನೆ ದೃಷ್ಟಿಯಿಂದ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕೆಂಬ ಒತ್ತಾಯವನ್ನು ಮಂಡಿಸುತ್ತ ಬಂದಿದೆ ಎಂದರು.

ಕಳೆದ ಒಂದು ವಾರದಿಂದ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ವಿನಾಕಾರಣ ದೌರ್ಜನ್ಯವೆಸಗಿ ಕನ್ನಡಿಗರ ಆಸ್ತಿಪಾಸ್ತಿಗಳ ಮೇಲೆ ದಾಳಿಗಳಾಗುತ್ತಿವೆ. ಕನ್ನಡಿಗರು ಕಟ್ಟಿದ ಸಂಸ್ಥೆಗಳನ್ನು ಗುರಿಯಾಗಿಟ್ಟುಕೊಂಡು ವಿಧ್ವಂಸಕ ಕೃತ್ಯಗಳನ್ನು ಎಸಗಲಾಗುತ್ತಿದೆ. ಕನ್ನಡಿಗರ ಮೇಲಿನ ದಾಳಿ-ದೌರ್ಜನ್ಯಗಳು ಭಯೋತ್ಪಾದನೆಗೆ ಸಮನಾದ ಹೇಯಕೃತ್ಯಗಳಾಗಿರುತ್ತವೆ. ಇದನ್ನು ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ಖಂಡಿಸುತ್ತದೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಮಹಾರಾಷ್ಟ್ರದ ಬಹುತೇಕ ಎಲ್ಲ ರಾಜಕೀಯ ಪಕ್ಷಗಳೂ ಕನ್ನಡಿಗರ ವಿರುದ್ಧ ನಡೆಯುತ್ತಿರುವ ದಾಳಿಗಳಿಗೆ ಪ್ರಚೋದನೆ ನೀಡುತ್ತಿವೆ. ಶಿವಸೇನೆಯ ಎರಡೂ ಬಣಗಳು ಮತ್ತು ಎನ್ ಸಿಪಿ, ಎಂ.ಎನ್.ಎಸ್ ಪಕ್ಷಗಳು ವಿಶೇಷವಾಗಿ ಈ ಕುಕೃತ್ಯಗಳಲ್ಲಿ ನೇರವಾಗಿ ಶಾಮೀಲಾಗಿವೆ ಎಂದು ದೂರಿದರು.

ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಕನ್ನಡಿಗರ ರಕ್ಷಣೆಗೆ ಮುಖ್ಯಮಂತ್ರಿಗಳು ಕಟ್ಟುನಿಟ್ಟಾದ ಕ್ರಮಗಳನ್ನು ಕೈಗೊಳ್ಳಬೇಕು, ಈ ಕುರಿತು ಪ್ರಧಾನ ಮಂತ್ರಿಗಳ ಮಧ್ಯಪ್ರವೇಶಕ್ಕೆ ಆಗ್ರಹಿಸಬೇಕು ಎಂದು ನಾವು ಆಗ್ರಹಿಸುತ್ತೇವೆ. ಅದೇ ರೀತಿ ತಡಮಾಡದೇ ಬೆಳಗಾವಿಯಲ್ಲಿ ಶಾಂತಿ ಕದಡುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ಕೂಡಲೇ ನಿಷೇಧಿಸಿ, ಅದರ ಮುಖಂಡರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಭೂತ ದಹನ: ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಕಾರ್ಯಕರ್ತರು  ಪ್ರತಿಭಟನೆ ನಡೆಸಿ, ಕನ್ನಡಿಗರ ಸಂಸ್ಥೆ, ಆಸ್ತಿಪಾಸ್ತಿಗಳ ಮೇಲೆ ದಾಳಿ ನಡೆಸುತ್ತಿರುವ ಶಿವಸೇನೆ, ಎಂ ಎನ್ಎಸ್ ಹಾಗೂ ಎಂಇಎಸ್ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಸಾ.ರಾ. ಗೋವಿಂದು, ಕಳೆದ ಒಂದು ವಾರದಿಂದ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ವಿನಾಕಾರಣ ದೌರ್ಜನ್ಯವೆಸಗಿ ಕನ್ನಡಿಗರ ಆಸ್ತಿಪಾಸ್ತಿಗಳ ಮೇಲೆ ದಾಳಿಗಳಾಗುತ್ತಿವೆ. ಕನ್ನಡಿಗರು ಕಟ್ಟಿದ ಸಂಸ್ಥೆಗಳನ್ನು ಗುರಿಯಾಗಿಟ್ಟುಕೊಂಡು ವಿಧ್ವಂಸಕ ಕೃತ್ಯಗಳನ್ನು ನಡೆಸುತ್ತಿರುವುದರ ವಿರುದ್ಧ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬೆಳಗಾವಿಯಲ್ಲಿ ಶಾಂತಿಸ್ಥಾಪನೆ ದೃಷ್ಟಿಯಿಂದ ಎಂಇಎಸ್ ಸಂಘಟನೆಯನ್ನು  ನಿಷೇಧಿಸಬೇಕೆಂದು ಅವರು ಒತ್ತಾಯಿಸಿ,ರಸ್ತೆ ತಡೆ ನಡೆಸಲು ಮುಂದಾದ ಎಲ್ಲರನ್ನೂ ಪೊಲೀಸರು ಬಂಧಿಸಿದರು.

Leave a Reply