ಬೆಂಗಳೂರು: ಕಾಲಮಿತಿಯೊಳಗೆ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿರುವ ರಾಜ್ಯ ಹೈಕೋರ್ಟ್ ಸರ್ಕಾರಕ್ಕೆ ದಂಡ ವಿಧಿಸಿ, 2023ರ ಫೆಬ್ರುವರಿ 1ರೊಳಗೆ ಕ್ಷೇತ್ರ ಪುನರ್ವಿಂಡಣೆ ಹಾಗೂ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ತಾಕೀತು ಮಾಡಿದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ಅಧಿನಿಯಮ ರದ್ದುಪಡಿಸಬೇಕು ಹಾಗೂ ಕ್ಷೇತ್ರ ಪುನರ್ವಿಂಗಡಣೆ ಪೂರ್ಣಗೊಳಿಸಲು ವಿಳಂಬ ಮಾಡಿದೆ ಎಂದು ಆರೋಪಿಸಿ ಸರ್ಕಾರಕ್ಕೆ ಲಕ್ಷ ರೂಪಾಯಿ ದಂಡ ವಿಧಿಸಿತು.
ದಂಡದ ಮೊತ್ತದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಬೆಂಗಳೂರು ವಕೀಲರ ಸಂಘಕ್ಕೆ ತಲಾ 2 ಲಕ್ಷ ರೂ. ಮತ್ತು 1 ಲಕ್ಷ ರೂ.ಗಳನ್ನು ವಕೀಲರ ಗುಮಾಸ್ತರ ಕಲ್ಯಾಣ ನಿಧಿಯಲ್ಲಿ ಠೇವಣಿ ಇಡಲು ಸರ್ಕಾರಕ್ಕೆ ಆದೇಶಿಸಿದೆ.
ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ರಿಟ್ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಆಶೋಕ್ ಎಸ್.ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ಈ ವೇಳೆ ಸೀಮಾ ನಿರ್ಣಯ ಆಯೋಗ ಪರ ಹಾಜರಾಗಿದ್ದ ಹಿರಿಯ ವಕೀಲರು, “ಕ್ಷೇತ್ರ ಪುನರ್ ವಿಂಗಡಣೆಗೆ ಇನ್ನೂ 90 ದಿನಗಳ ಕಾಲಾವಾಕಾಶ ನೀಡಬೇಕು” ಎಂದು ಮನವಿ ಮಾಡಿದರು.
ಇದನ್ನು ಒಪ್ಪದ ನ್ಯಾಯಪೀಠ, “ಪದೇ ಪದೇ ಕಾಲಾವಕಾಶ ಕೇಳುತ್ತಿರುವ ನಿಮ್ಮ ಹಾಗೂ ಸರ್ಕಾರದ ನಡೆ ಸರಿಯಲ್ಲ. ಇದು ಬಸವನಹುಳು ರೀತಿಯ ನಿಧಾನ ಗತಿಯಾಗಿದೆ” ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿತು.
“ಹೈಕೋರ್ಟ್ ಈ ವಿಷಯದಲ್ಲಿ ಈಗಾಗಲೇ ಆರು ತಿಂಗಳ ಸುದೀರ್ಘ ಕಾಲಾವಕಾಶ ನೀಡಿದ್ದರೂ ಈ ಪ್ರಕ್ರಿಯೆಯಲ್ಲಿ ಒಂದಿಂಚೂ ಪ್ರಗತಿಯಾಗಿಲ್ಲ. ಇದು ಕೋರ್ಟ್ ಆದೇಶಗಳನ್ನು ನಿಷ್ಕ್ರಿಯಗೊಳಿಸುವ ಧೋರಣೆಯಿಂದ ಕೂಡಿದ ವರ್ತನೆ” ಎಂದು ಬೇಸರ ವ್ಯಕ್ತಪಡಿಸಿತು.
2023ರ ಫೆಬ್ರುವರಿ 1ರೊಳಗೆ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಕ್ಷೇತ್ರ ಪುನರ್ವಿಂಡಣೆ ಹಾಗೂ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸಬೇಕು” ಎಂದು ಗಡುವು ನೀಡಿದ ನ್ಯಾಯಪೀಠ ವಿಚಾರಣೆಯನ್ನು 2023ರ ಫೆಬ್ರುವರಿ 2ಕ್ಕೆ ಮುಂದೂಡಿತು.




