15,000 ಶಿಕ್ಷಕರ ನೇಮಕ ತಡೆಗೆ ಹೈಕೋರ್ಟ್ ನಿರ್ದೇಶನ

3 years ago

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 15 ಸಾವಿರ ಪದವೀಧರ ಶಿಕ್ಷಕರನ್ನು ನೇಮಕ ಮಾಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದ್ದ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ರದ್ದುಪಡಿಸಿರುವ ಹೈಕೋರ್ಟ್, ಹೊಸ ಪಟ್ಟಿ ಸಿದ್ಧಪಡಿಸುವಂತೆ ನಿರ್ದೇಶನ ನೀಡಿದೆ.

ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಪತಿಯ ಆದಾಯ ಹಾಗೂ ಜಾತಿ ಪ್ರಮಾಣಪತ್ರ ಪರಿಗಣಿಸಿ ಶಿಕ್ಷಕರ ಆಯ್ಕೆ ಪ್ರಕ್ರಿಯೆ ನಡೆಸಿದ್ದ ಶಿಕ್ಷಣ ಇಲಾಖೆಯ ಕ್ರಮವನ್ನು ಪ್ರಶ್ನಿಸಿ ಅಕ್ಷತಾ ಚೌಗಲಾ ಸೇರಿದಂತೆ 90ಕ್ಕೂ ಹೆಚ್ಚು ಮಹಿಳಾ ಅಭ್ಯರ್ಥಿಗಳು ರಿಟ್ ಅರ್ಜಿಗಳನ್ನು ಸಲ್ಲಿಸಿದ್ದರು.

ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಈ ಆದೇಶ ನೀಡಿದೆ. ಅಲ್ಲದೆ ಇಲಾಖೆಯು 1:1ರ ಅನುಪಾತದಂತೆ ಸಿದ್ಧಪಡಿಸಿದ್ದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಪಡಿಸಿದೆ. ಪತಿಯ ಆದಾಯ ಮತ್ತು ಜಾತಿ ಪ್ರಮಾಣ ಪತ್ರದ ಬದಲು ಅಭ್ಯರ್ಥಿಗಳ ತಂದೆಯ ಆದಾಯ ಮತ್ತು ಜಾತಿ ಪ್ರಮಾಣಪತ್ರಗಳನ್ನೂ ಪರಿಗಣಿಸಿ ಹೊಸದಾಗಿ ಪಟ್ಟಿ ಸಿದ್ಧಪಡಿಸುವಂತೆ ಸೂಚಿಸಿದೆ.

ವಿಚಾರಣೆ ವೇಳೆ ವಾದ ಮಂಡಿಸಿದ್ದ ಅರ್ಜಿದಾರರ ಪರ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ, 1:1ರ ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಅರ್ಜಿದಾರರಿಗಿಂತ ಕಡಿಮೆ ಅಂಕ ಪಡೆದಿರುವ ಅಭ್ಯರ್ಥಿಗಳ ಹೆಸರುಗಳಿವೆ. ಈ ಬಗ್ಗೆ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರನ್ನು (ಡಿಡಿಪಿಐ) ವಿಚಾರಿಸಿದಾಗ ವಿವಾಹಿತ ಮಹಿಳಾ ಅಭ್ಯರ್ಥಿಗಳು ಪತಿಯ ಆದಾಯ ಅಥವಾ ಜಾತಿ ಪ್ರಮಾಣ ಪತ್ರದ ಬದಲಿಗೆ ತಂದೆಯ ಆದಾಯ ಅಥವಾ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಿರುವುದರಿಂದ ಅರ್ಜಿದಾರರ ಹೆಸರುಗಳನ್ನು ಕೈಬಿಡಲಾಗಿದೆ ಎಂದು ತಿಳಿಸಿದ್ದಾರೆ ಎಂದರು.

ತಂದೆಯ ಆದಾಯ, ಜಾತಿ ಬದಲು ಪತಿ ಆದಾಯ, ಜಾತಿಯನ್ನು ಪರಿಗಣಿಸಿದ್ದರಿಂದಾಗಿ ಅರ್ಜಿದಾರರನ್ನು ಸಾಮಾನ್ಯ ವರ್ಗಕ್ಕೆ ಸೇರಿಸಲಾಗಿದೆ. ಅಭ್ಯರ್ಥಿಗಳಿಗೆ ಯಾವುದೇ ಮಾಹಿತಿ ನೀಡದೆ, ಸಾಮಾನ್ಯ ಅಭ್ಯರ್ಥಿಗಳ ವರ್ಗಕ್ಕೆ ಸೇರ್ಪಡೆ ಮಾಡಿರುವ ಈ ಕ್ರಮ ಸರಿಯಲ್ಲ. ಅಂತೆಯೇ, ಪತಿಯ ಆದಾಯ ಮತ್ತು ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸುವಂತೆ ಕೋರುವುದು ಕಾನೂನಿಗೆ ವಿರುದ್ಧವಾದ ನಡೆ ಎಂದು ಆಕ್ಷೇಪಿಸಿದ್ದರು.

ಅಲ್ಲದೆ ಅರ್ಜಿದಾರರ ಪತಿಯ ಆದಾಯ ಹಾಗೂ ಜಾತಿ ಪ್ರಮಾಣಪತ್ರ ಪರಿಗಣಿಸಿ, 2022ರ ನವೆಂಬರ್ 18ರಂದು ಪ್ರಕಟಿಸಿರುವ 1:1ರ ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಬೇಕು ಎಂದು ಕೋರಿದ್ದರು.

Leave a Reply