ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಕಟ್ಟಿ ಹಾಕಲು ವಿರೋಧ ಪಕ್ಷಗಳು ತಮ್ಮ ಶಕ್ತಿ ಪ್ರದರ್ಶಿಸಲು ಮುಂದಾಗಿವೆ. ಪಾಟ್ನಾ ಸಭೆ ಬಳಿಕ ಬೆಂಗಳೂರಿನಲ್ಲಿ ಜುಲೈ 17 ಮತ್ತು 18 ರಂದು ಎರಡು ದಿನಗಳ ಕಾಲ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ಮಹಾ ಮೈತ್ರಿ ಸಭೆ ನಡೆಯಲಿದೆ.
ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ ಸಭೆಯಲ್ಲಿ 15 ವಿವಿಧ ಪಕ್ಷಗಳು ಹಾಜರಾಗಿದ್ದವು. ಈ ಬಾರಿ ಹೊಸದಾಗಿ ಇನ್ನೂ 9 ಪಕ್ಷಗಳು ಸೇರುತ್ತಿವೆ. ಈ ಮೂಲಕ 24ಕ್ಕೂ ಹೆಚ್ಚು ಪಕ್ಷಗಳು ಈ ಸಭೆಯಲ್ಲಿ ಭಾಗವಹಿಸಲಿವೆ. ಸಭೆಯ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಖಾಸಗಿ ಹೋಟೆಲ್‌ನಲ್ಲಿ ನಾಳೆ ರಾತ್ರಿ ಔತಣಕೂಟ ಆಯೋಜಿಸಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷದ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆದರೆ, ಔತಣಕೂಟದಲ್ಲಿ ಮಾತ್ರ ಪಾಲ್ಗೊಳ್ಳುವುದಿಲ್ಲ ಎಂದು ಹೇಳಲಾಗಿದೆ.
ರಾಹುಲ್ ಗಾಂಧಿ ಸಭೆ: ಈ ನಡುವೆ,ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವರ್ಗಾವಣೆಯ ಆರೋಪ ಕೇಳಿಬಂದ ಬೆನ್ನಲ್ಲೆ, ಎಲ್ಲ ಸಚಿವರ ಜೊತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚರ್ಚೆ ನಡೆಸಲಿದ್ದಾರೆ. ತಾಜ್ ವೆಸ್ಟೆಂಡ್ ಹೋಟೆಲ್‌ನಲ್ಲಿ ನಡೆಯಲಿರುವ ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಎಲ್ಲ ಸಚಿವರು ಭಾಗವಹಿಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಉಪಸ್ಥಿತರಿರಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
2024ರಲ್ಲಿ ಎದುರಾಗಲಿರುವ ಲೋಕಸಭೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆ, ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ಉತ್ತಮ ಆಡಳಿತ ನೀಡುವ ಕಡೆಗೆ ಗಮನ, ಯಾರ ಜತೆಗೂ ಹೊಂದಾಣಿಕೆ ಇಲ್ಲದಂತೆ ಕಾರ್ಯನಿರ್ವಹಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ರಾಜ್ಯದಲ್ಲಿನ ಸದ್ಯದ ರಾಜಕೀಯ ವಿದ್ಯಮಾನ ಮತ್ತು ಸರ್ಕಾರದ ಕಾರ್ಯವೈಖರಿಯ ಬಗ್ಗೆ ಈಗಾಗಲೇ ಪಕ್ಷದ ವರಿಷ್ಠರಿಗೆ ಕೆಲವು ನಾಯಕರು ಮಾಹಿತಿ ನೀಡಿದ್ದು, ಈ ಬಗ್ಗೆಯೂ ನಾಯಕರು ಸಮಾಲೋಚನೆ ನಡೆಸುವ ಸಾಧ್ಯತೆಯಿದೆ ಎಂದೂ ಮೂಲಗಳು ಹೇಳಿವೆ.




