ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆ ಜಾರಿ ತಡವಾಗುತ್ತಿಲ್ಲ. ಅರ್ಜಿ ಸಲ್ಲಿಸಲು ಪ್ರತ್ಯೇಕ ಆ್ಯಪ್ ತಯಾರಾಗಿದೆ. ಅದ್ಭುತವಾದ ಈ ಆ್ಯಪ್ ಅನ್ನು ಬುಧವಾರ ಸಾರ್ವಜನಿಕ ಸೇವೆಗೆ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಆಷಾಡ ಮಾಸ ಹಿನ್ನೆಲೆಯಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯೋಜನೆ ಜಾರಿಯಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆ್ಯಪ್ ರಚಿಸಿದ್ದೇವೆ. ಯೋಜನೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ. ಜೂನ್ 27ರಿಂದ ‘ಗೃಹಲಕ್ಷ್ಮೀ’ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ತಿಳಿಸಿದರು.
ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಯಾರೊಬ್ಬರೂ ಹಣ ಪಾವತಿಸಬಾರದು. ಸರ್ಕಾರ ಇದಕ್ಕಾಗಿ ವಿಶೇಷವಾಗಿ ರೂಪಿಸಿರುವ ಆಪ್ ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಅಪ್ಲೋಡ್ ಮಾಡಿದರೆ ಆಗಸ್ಟ್ 16 ಅಥವಾ 17ರಂದು ಮನೆ ಯಜಮಾನಿ ಖಾತೆಗೆ ಹಣ ಬರುತ್ತದೆ ಎಂದು ಹೇಳಿದರು.
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರುವುದಿಲ್ಲ. ಒಂದು ರೂಪಾಯಿ ಹಣವನ್ನು ಅರ್ಜಿ ಸಲ್ಲಿಕೆಗೆ ಕೊಡಬೇಡಿ. ಅರ್ಜಿ ಸಲ್ಲಿಸಿ ಸ್ವೀಕೃತಿ ಪತ್ರ ಸಿಕ್ಕರೆ ಅಲ್ಲಿಗೆ ನೀವು ಫಲಾನುಭವಿ ಪಟ್ಟಿಗೆ ಸೇರುತ್ತೀರ. ಇದರಲ್ಲಿ ಯಾವುದೇ ಗೊಂದಲಗಳು ಬೇಡ. ಗೃಹ ಲಕ್ಷ್ಮೀ ಯೋಜನೆ ಜಾರಿಗೆ ಹಣಕಾಸಿನ ತೊಂದರೆ ಇದೆ ಎಂಬುದರಲ್ಲಿ ಅರ್ಥವಿಲ್ಲ. ಎಲ್ಲಾ ರೀತಿಯ ಸಂಪನ್ಮೂಲ ನಮ್ಮ ಬಳಿ ಇದೆ ಎಂದು ಸ್ಪಷ್ಟಪಡಿಸಿದರು.




