ಅಥಣಿ: ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ರಸ್ತೆ ದಾಟುತ್ತಿದ್ದ ವೃದ್ಧರೊಬ್ಬರು ಟಿಪ್ಪರ್‌ಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಅಥಣಿಯ ಶಿವಯೋಗಿ ನಗರದ ನಿವಾಸಿ ಮಹಾಲಿಂಗಯ್ಯ ಭದ್ರಯ್ಯ ಪುರಣಿಕಮಠ (85) ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಅತಿವೇಗದಲ್ಲಿ ಬಂದ ಟಿಪ್ಪರ್ ರಸ್ತೆ ದಾಟುತ್ತಿದ್ದ ವೃದ್ಧರಿಗೆ ಡಿಕ್ಕಿ ಹೊಡೆದಿದ್ದು, ಬಳಿಕ ವಾಹನ ಅವರ ಮೇಲೆ ಹರಿದ ಪರಿಣಾಮ ತಲೆಗೆ ಗಂಭೀರ ಗಾಯಗಳಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದ ನಂತರ ಟಿಪ್ಪರ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಥಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಚಾಲಕನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.




