ಬೆಂಗಳೂರು: ಮಳೆಯ ನಿರೀಕ್ಷೆಯಲ್ಲಿದ್ದ ರೈತ ಸಮುದಾಯಕ್ಕೆ ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ಸಂತಸವಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಇನ್ನು ಮೂರು ದಿನಗಳ ಕಾಲ ಮಳೆ ನಿರೀಕ್ಷಿಸಬಹುದಾಗಿದೆ. ರಾಜ್ಯಾದ್ಯಂತ ಉತ್ತಮ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ತಜ್ಞರು ತಿಳಿಸಿದ್ದಾರೆ.
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯು ವಾಯುಭಾರ ಕುಸಿತವಾಗಿ ಮಾರ್ಪಡಾಗುವ ಸಾಧ್ಯತೆಗಳಿವೆ. ಅಲ್ಲದೆ ಬಂಗಾಳಕೊಲ್ಲಿಯಲ್ಲಿ ಟ್ರಫ್ ನಿರ್ಮಾಣವಾಗಿರುವುದರಿಂದ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಇಂದು ವ್ಯಾಪಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ತಿಳಿಸಿದ್ದಾರೆ.
ಮಂಗಳವಾರ ಬೆಂಗಳೂರಿನ ಜಕ್ಕೂರಿನಲ್ಲಿ 164 ಮಿ.ಮೀನಷ್ಟು ಭಾರೀ ಮಳೆಯಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿದೆ. ರಾಜ್ಯದ ಒಳನಾಡಿನಲ್ಲೂ ಮಳೆಯಾಗಿದೆ. ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ತುಮಕೂರು, ಚಿತ್ರದುರ್ಗ, ಹಾವೇರಿ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ದಾವಣಗೆರೆ ಚಿಕ್ಕಮಗಳೂರು, ದಕ್ಷಿಣ ಕನ್ನಡ, ವಿಜಯನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ.




