ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಮಾಡುವುದು ಹಾಸ್ಯಾಸ್ಪದ: ಬೊಮ್ಮಾಯಿ

3 years ago

ಹುಬ್ಬಳ್ಳಿ: ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಕೆಲವು ನಾಯಕರು ಪಕ್ಷ ತೊರೆದಿದ್ದರಿಂದ ಕಿತ್ತೂರು ಕರ್ನಾಟಕ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆಯಾಗುವ ವಾತಾವರಣ ಗೋಚರಿಸಿದ್ದು ಅದನ್ನು ಯಶಸ್ವಿಯಾಗಿ ಹಿಮ್ಮೆಟ್ಟಿಸಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆರಿಸಿ ಬರುವಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸೂಚನೆ ನೀಡಿದ್ದಾರೆ

ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿರುವ ಅವರು ಹುಬ್ಬಳ್ಳಿಯ ನಗರದ ಡಿನಿಸನ್ಸ್ ಹೋಟೆಲ್ ನಲ್ಲಿ ಸಿಎಂ ಬೊಮ್ಮಾಯಿ ಮತ್ತು ಇತರೆ ನಾಯಕರೊಂದಿಗೆ ರಣತಂತ್ರದ ಸಭೆ ನಡೆಸಿದರು.

ಕಾಂಗ್ರೆಸ್ ಸಂಘಟಿತವಾಗಿ ಬಿಜೆಪಿ ವಿರುದ್ಧ ಪ್ರಚಾರದಲ್ಲಿ ತೊಡಗಿದೆ. ಲಿಂಗಾಯತ ವಿರೋಧಿ ಎಂಬ ಹಣೆಪಟ್ಟಿ ಕಟ್ಟುತ್ತಿದೆ. ಇದು ಆ ಪಕ್ಷಕ್ಕೆ ತಿರುಗುಬಾಣವಾಗುವಂತೆ ನೋಡಿಕೊಳ್ಳಬೇಕು. ಸಿದ್ದರಾಮಯ್ಯ ಲಿಂಗಾಯತ ವಿರೋಧಿ ಎಂದು ವ್ಯವಸ್ಥಿತವಾಗಿ ಪ್ರಚಾರ ಮಾಡಬೇಕು, ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಇನ್ನಷ್ಟು ಸಕ್ರಿಯವಾಗಿ ಪ್ರಚಾರದಲ್ಲಿ ತೊಡಗುವಂತೆ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿರುವುದಾಗಿ ಗೊತ್ತಾಗಿದೆ.

ಕಾಂಗ್ರೆಸ್ ನಾಯಕರು ಭಾವನಾತ್ಮಕ ವಿಷಯಗಳಿಗೆ ಸ್ಪಂದಿಸುವುದನ್ನು ಬಿಟ್ಟು ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುತ್ತಿದ್ದಾರೆ. ಇದನ್ನು ಹತ್ತಿಕ್ಕುವ ದೃಷ್ಟಿಯಿಂದ ಕಾಂಗ್ರೆಸ್ ಲಿಂಗಾಯತ ವಿರೋಧಿ ಎಂಬ ಅಂಶವನ್ನು ಹೆಚ್ಚು ಪ್ರಚಾರ ಮಾಡಬೇಕು. ಅಲ್ಪಸಂಖ್ಯಾತರಿಗೆ ಅವೈಜ್ಞಾನಿಕವಾಗಿ ಮೀಸಲಾತಿ ನೀಡಲಾಗಿತ್ತು. ನಮ್ಮ ಸರ್ಕಾರ ಅದನ್ನು ರದ್ದುಪಡಿಸಿ ಲಿಂಗಾಯತರಿಗೆ ನೀಡಿದೆ ಎಂಬ ವಿಷಯವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬಳಸಬೇಕು ಎಂದು ಸಲಹೆ ಮಾಡಿದರು ಎಂದು ತಿಳಿದುಬಂದಿದೆ.

ಈ ಮಾತುಕತೆಯ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಭ್ರಷ್ಟಾಚಾರ ಕಾಂಗ್ರೆಸ್ ನ ಅವಿಭಾಜ್ಯ ಅಂಗ. ಅವರು ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಮಾಡುವುದು ಹಾಸ್ಯಾಸ್ಪದ ಎಂದು ಹೇಳಿದರು.

ಬಿಜೆಪಿ ಪ್ರಚಾರ ಸಭೆಗಳಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದೆ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ. ರಾಜ್ಯ ಬಿಜೆಪಿ ಮಯವಾಗುವುದರಲ್ಲಿ ಅನುಮಾನವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ರಾಜ್ಯದಲ್ಲಿ ಬಿಜೆಪಿ ಗೆಲ್ಲಿಸಲು ಸೂಕ್ತ ಸಲಹೆ, ಸೂಚನೆಗಳನ್ನು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಹಾಗೂ ಕೇಂದ್ರ ಸರ್ಕಾರದ ಎಲ್ಲ ಕಾರ್ಯಕ್ರಮಗಳ ಪ್ರಚಾರ ಮಾಡಿ, ಜನರ ಮನವೊಲಿಸಲು ತಿಳಿಸಿದ್ದಾರೆ ಎಂದು ಹೇಳಿದರು.

Leave a Reply