ಬೆಂಗಳೂರು: ರಾಜ್ಯದ ದೇವಸ್ಥಾನಗಳ ಸುಪರ್ದಿಯಲ್ಲಿರುವ ಜಮೀನುಗಳನ್ನು ಮಂಜೂರು ಮಾಡಲು ಅರ್ಜಿ ಸಲ್ಲಿಸಿದರೆ ಕಾನೂನು ಪ್ರಕಾರ ಜಮೀನು ಮಂಜೂರಾತಿಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ವಿಧಾನಸಭೆಯಲ್ಲಿ ಹೇಳಿದರು.
ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ರಾಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಕೆಲ ಖಾಸಗಿ ದೇವಾಲಯಗಳು, ಗೋಮಾಳ, ಅರಣ್ಯ ಭೂಮಿಯಲ್ಲಿದೆ. ಸುಪ್ರೀಂ ಕೋರ್ಟ್‌ನ ತೀರ್ಪನ್ನು ಗಮನದಲ್ಲಿಟ್ಟುಕೊಂಡು ಎಲ್ಲವನ್ನು ಮಾಡಬೇಕಾಗುತ್ತದೆ. ಯಾವುದೇ ಜಮೀನು ಮಂಜೂರಾತಿ ಬಗ್ಗೆ ಸಚಿವ ಸಂಪುಟವೇ ತೀರ್ಮಾನ ಕೈಗೊಳ್ಳುತ್ತದೆ ಎಂದರು.
ದೇವಾಲಯಗಳ ಜಮೀನು ಮಂಜೂರಾತಿ ಬಗ್ಗೆ ಅರ್ಜಿ ಸಲ್ಲಿಸಿದರೆ ಆ ಅರ್ಜಿಗಳನ್ನು ಕಾನೂನು ಪ್ರಕಾರ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಶೃಂಗೇರಿ ವಿಧಾನಸಭಾ ಕ್ಷೇತ್ರದ 5 ದೇವಸ್ಥಾನಗಳಿಗೆ ಜಮೀನುಗಳನ್ನು ಮಂಜೂರು ಮಾಡಿದೆ. ಶೃಂಗೇರಿ ತಾಲ್ಲೂಕಿನಲ್ಲಿ ಜಮೀನು ಮಂಜೂರಾತಿಯ ಪ್ರಕರಣಗಳು ಬಾಕಿ ಇಲ್ಲ ಎಂದರು.



