ಬಳ್ಳಾರಿ: ಜಿಲ್ಲೆಯಲ್ಲಿ ಪರವಾನಿಗೆ ಪಡೆಯದೇ ಅನಧಿಕೃತವಾಗಿ ತಂಬಾಕು ಉತ್ಪನ್ನ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಹೇಳಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ನಗರದ ಜಿಲ್ಲಾಧಿಕಾರಿಗಳ ಹಳೆಯ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾ ನಗರಾಭಿವೃದ್ಧಿ ಕೋಶ ಅಧೀನದ ವ್ಯಾಪ್ತಿಯಲ್ಲಿ ಬರುವ ಅಂಗಡಿ, ಹೋಟೆಲ್, ವಾಣಿಜ್ಯ ಮಳಿಗೆಗಳಲ್ಲಿ ತಂಬಾಕು ಉತ್ಪನ್ನಗಳ ವ್ಯಾಪಾರಕ್ಕೆ ಸರ್ಕಾರದ ಮಾನದಂಡಗಳಡಿ ಪರವಾನಿಗೆ ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯಡಿ ಬರುವ ಎಲ್ಲಾ ಶಾಲಾ-ಕಾಲೇಜುಗಳನ್ನು ತಂಬಾಕು ಮುಕ್ತ ಶಿಕ್ಷಣ ಸಂಸ್ಥೆಗಳನ್ನಾಗಿ ಘೋಷಿಸಿ ತ್ವರಿತವಾಗಿ ಟಿಒಎಫ್‌ಇಐ ಆಪ್ ನಲ್ಲಿ ನಮೂದಿಸಬೇಕು. ಇಲ್ಲವಾದಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಶಾಲಾ-ಕಾಲೇಜು ಮಕ್ಕಳು ಒಂದು ಬಾರಿ ತಂಬಾಕು ಉತ್ಪನ್ನಗಳಿಗೆ ದಾಸರಾದರೆ ಅದರಿಂದ ಹೊರಬರುವುದು ಕಷ್ಟಕರ. ಹಾಗಾಗಿ ಅಧಿಕಾರಿಗಳು ಹೆಚ್ಚಾಗಿ ಶಾಲಾ-ಕಾಲೇಜುಗಳಲ್ಲಿ, ಗ್ರಾಮೀಣ ಕ್ಷೇತ್ರಗಳಲ್ಲಿ ಮತ್ತು ಸಮುದಾಯಗಳಲ್ಲಿ ತಂಬಾಕು ಉತ್ಪನ್ನಗಳಿಂದಾಗುವ ದುಷ್ಪರಿಣಾಮ ಕುರಿತು ಹೆಚ್ಚು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿನ ಎಲ್ಲಾ ಬಾರ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಕಡ್ಡಾಯವಾಗಿ ಧೂಮಪಾನ ವಲಯ ಸ್ಥಾಪಿಸಿ, ಅವುಗಳ ಉಪಯೋಗ, ಕ್ರಮಬದ್ಧತೆ ಕುರಿತು ಅಬಕಾರಿ ಅಧಿಕಾರಿಗಳು ನಿಯಮಿತವಾಗಿ ಪರಿಶೀಲನೆ ನಡೆಸುತ್ತಿರಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯ ಎಲ್ಲಾ ಬಸ್ ನಿಲ್ದಾಣಗಳಲ್ಲಿ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲು ಕ್ರಮವಹಿಸಬೇಕು. ನಿಲ್ದಾಣ ಅಂದಗೆಡಿಸುವ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಸೇವಿಸಿ, ಎಲ್ಲೆಂದರಲ್ಲಿ ಉಗುಳುವವರ ಮೇಲೆ ದಂಡ ವಿಧಿಸಬೇಕು ಎಂದು ಕಕರಾರಸಾ ಸಂಸ್ಥೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಮರಿಯಂಬಿ ವಿ.ಕೆ ಮಾತನಾಡಿ, ಜಿಲ್ಲೆಯಲ್ಲಿ 2025ರ ಜುಲೈ ನಿಂದ ಸೆಪ್ಟೆಂಬರ್ ವರೆಗಿನ ಒಟ್ಟು 617 ಕ್ಷಯರೋಗಿಗಳಲ್ಲಿ 86 ತಂಬಾಕು ವ್ಯಸನಿಗಳಾಗಿದ್ದು, ಎಲ್ಲರನ್ನು ತಂಬಾಕು ವ್ಯಸನಮುಕ್ತ ಕೇಂದ್ರದಲ್ಲಿ ದಾಖಲಿಸಲಾಗಿದೆ ಎಂದರು.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಮಾತನಾಡಿ, ತಂಬಾಕು ವ್ಯಸನದಿಂದ ಮುಕ್ತರಾಗಿ ಬರುವ ವ್ಯಕ್ತಿಗಳಿಂದ ಅದರಿಂದಾಗುವ ಪರಿಣಾಮ ಕುರಿತು ಸಾರ್ವಜನಿಕರಿಗೆ ತಿಳಿಯಪಡಿಸಲು ಮತ್ತು ಅದರ ಜೊತೆಗೆ ಅಧಿಕಾರಿಗಳ ನಿರ್ದೇಶನ ಒಳಗೊಂಡ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು ಎಂದು ಸೂಚಿಸಿದರು
ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ತಂಬಾಕು ಉತ್ಪನ್ನಗಳಿಂದ ದೂರವಿರುತ್ತೇನೆ ಎಂಬ ಪ್ರತಿಜ್ಞಾ ವಿಧಿ ಸ್ವೀಕರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಇದರಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಸಹ ಭಾಗವಹಿಸುವಂತೆ ಕ್ರಮವಹಿಸಬೇಕು ಎಂದರು.
ಅಧಿಕಾರಿಗಳು ಹೆಚ್ಚಾಗಿ ಕ್ಷೇತ್ರ ಮಟ್ಟದಲ್ಲಿ ಸಂಚರಿಸಿದಾಗ ಮಾತ್ರ ತಂಬಾಕು ಬಳಕೆ ಮೇಲೆ ಕಡಿವಾಣ ಹಾಕಲು ಸಾಧ್ಯವಾಗುತ್ತದೆ ಎಂದರು.
ಇದೇ ವೇಳೆ ಜಿಲ್ಲೆಯಲ್ಲಿ ಡಿ.06 ರ ವರೆಗೆ ನಡೆಯುವ ‘ತಂಬಾಕು ಮುಕ್ತ ಯುವ ಅಭಿಯಾನ 3.0’ ಗೆ ಚಾಲನೆ ನೀಡಲಾಯಿತು.
ಸಭೆಯಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ., ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಷಿದ್ ಬೇಗಂ, ಜಿಲ್ಲಾ ತಂಬಾಕು ಸಲಹೆಗಾರ ಪ್ರಶಾಂತ್ ಸೇರಿದಂತೆ ಡಿಡಿಪಿಐ, ಡಿಡಿಪಿಯು, ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಎಲ್ಲಾ ತಾಲ್ಲೂಕು ವೈದ್ಯಾಧಿಕಾರಿಗಳು ಹಾಜರಿದ್ದರು.




