ಮೈಸೂರು: ಗೃಹ ಇಲಾಖೆಗೆ ಸಂಪೂರ್ಣ ಹೊಸ ರೂಪ ನೀಡುವ ಮೂಲಕ ಜನಸ್ನೇಹಿ ಇಲಾಖೆಯಾಗಿ ಪರಿವರ್ತಿಸಲು ನಿರ್ಧರಿಸಲಾಗಿದ್ದು, ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಗೃಹ ಮಂತ್ರಿ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.
ಮಂತ್ರಿಯಾದ ನಂತರ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಅವರು, ಕುಟುಂಬ ಸಮೇತ ಚಾಮುಂಡಿ ಬೆಟ್ಟಕ್ಕೆ ತೆರಳಿ ಶ್ರೀಚಾಮುಂಡೇಶ್ವರಿ ದರ್ಶನ ಪಡೆದರು. ಬಳಿಕ ಅರಮನೆಗೆ ಆಗಮಿಸಿ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರೊಂದಿಗೆ ಮಾತುಕತೆ ನಡೆಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ 15 ಸಾವಿರ ಹುದ್ದೆಗಳು ಖಾಲಿ ಇದ್ದು, ಮೊದಲ ಹಂತದಲ್ಲಿ 4 ಸಾವಿರ ಪೊಲೀಸ್ ಪೇದೆ, 400 ಇನ್ ಸ್ಪೆಕ್ಟರ್ ಹುದ್ದೆ ಭರ್ತಿ ಮಾಡಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಇಲಾಖೆಗಳಲ್ಲಿ ಖಾಲಿ ಇರುವ 2.50 ಲಕ್ಷ ಹುದ್ದೆಗಳನ್ನ ಭರ್ತಿ ಮಾಡುವ ಕಾರ್ಯ ಶುರುವಾಗಿದೆ. ಪೊಲೀಸ್ ಇಲಾಖೆಯಲ್ಲಿ 15 ಸಾವಿರ ಹುದ್ದೆ ಖಾಲಿ ಇದ್ದು ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳಲಾಗುವುದು ಎಂದರು.
ಪೊಲೀಸ್ ಆಡಳಿತ ಸುಧಾರಣೆ ದೃಷ್ಟಿಯಿಂದ ಔರಾದ್ಕರ್ ವರದಿ ಈಗಾಗಲೆ ಅನುಷ್ಠಾನಕ್ಕೆ ತಂದಿದ್ದೇವೆ. ಈ ಹಿಂದೆ ನಮ್ಮ ಸರಕಾರ ಆಡಳಿತದಲ್ಲಿದ್ದಾಗ ಔರಾದ್ಕರ್ ವರದಿಯ ಬಗ್ಗೆ ಭಾಗಶಃ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಸಂಪೂರ್ಣ ಮಾಡಲು ಸಾಧ್ಯವಾಗಿರಲಿಲ್ಲ. ಆದರೆ ಔರಾದ್ಕರ್ ವರದಿ ಯಥಾವತ್ ಜಾರಿ ಮಾಡಲು ಸಾಧ್ಯವಿಲ್ಲ ಎಂದರು.
ಪೊಲೀಸರಿಗೆ ವಾರದ ರಜೆ ಕೊಡಬೇಕು ಎಂಬುದು ನಮ್ಮ ಉದ್ದೇಶ. ಈ ಸಂಬಂಧ ಪ್ರಣಾಳಿಕೆಯಲ್ಲೂ ಹೇಳಲಾಗಿದೆ. ಇದು ಅವರಿಗೆ ಅವಶ್ಯಕ. ಅವರಿಗೆ ಮಾನಸಿಕವಾಗಿ ವಿಶ್ರಾಂತಿ ಸಿಗುತ್ತದೆ. ನಂತರ ಉತ್ತಮವಾಗಿ ಕೆಲಸ ಮಾಡಲು ಅನುಕೂಲವಾಗುತ್ತದೆ. ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಿದವರಿಗೆ ವಿಶೇಷ ಭತ್ಯೆ ನೀಡುವ ಕುರಿತು ಆದಷ್ಟು ಬೇಗ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಪಿಎಸ್‌ಐ ಅಕ್ರಮ ನೇಮಕಾತಿ ಕುರಿತು ನ್ಯಾಯಾಲಯದಲ್ಲಿ ಇಚಾರಣೆ ನಡೆಯುತ್ತಿದ್ದು, ನ್ಯಾಯಾಲಯ ಸರಕಾರದ ಅಭಿಪ್ರಾಯ ಕೇಳಿದೆ. ನ್ಯಾಯಾಲಯಕ್ಕೆ ಜುಲೈ 5ರಂದು ನಮ್ಮ ಅಭಿಪ್ರಾಯ ಹೇಳುತ್ತೇವೆ. ನಂತರ ಇದರ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದರು.





One Response
My dream inspector so please select me