ಬೆಳಗಾವಿ: ಬೆಳಗಾವಿಯ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮ, ಹುಬ್ಬಳ್ಳಿ-ಧಾರವಾಡ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಹೆಸರನ್ನು ನಾಮಕರಣ ಮಾಡಲು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್.ಕೆ.ಪಾಟೀಲ್ ವಿಧಾನಸಭೆಗೆ ಮಾಹಿತಿ ನೀಡಿದರು.
ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಇತಿಹಾಸ ಪುರುಷರ ಹೆಸರನ್ನು ಇರಿಸುವ ವಿಚಾರದಲ್ಲಿ ಸರಕಾರ ಸಕಾರಾತ್ಮಕವಾಗಿದೆ. ಸದಸ್ಯರ ಒತ್ತಾಯದಂತೆ ಎಲ್ಲರೂ ಒಪ್ಪಿ ಸದನ ಸರ್ವಾನುಮತದ ನಿರ್ಣಯ ಕೈಗೊಂಡರೂ ಸ್ವಾಗತಿಸುತ್ತದೆ ಎಂದರು.
ಶೂನ್ಯವೇಳೆಯಲ್ಲಿ ಆಡಳಿತ ಪಕ್ಷದ ಸದಸ್ಯ ಕೋನರೆಡ್ಡಿ ವಿಷಯ ಪ್ರಸ್ತಾಪಿಸಿ, ಹುಬ್ಬಳ್ಳಿ-ಧಾರವಾಡ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಮತ್ತು ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಹೆಸರನ್ನು ಇರಿಸಬೇಕು ಎಂದು ಒತ್ತಾಯಿಸಿದರು. ಇವರ ವಾದಕ್ಕೆ ಬಿಜೆಪಿ ಸದಸ್ಯ ಅರವಿಂದ ಬೆಲ್ಲದ್ ಸಾಥ್ ನೀಡಿದರು.
ಸದಸ್ಯರ ಕಳಕಳಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸದ್ಯದಲ್ಲಿಯೇ ನಾಮಕರಣ ಮಾಡುವ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಪರಿಶೀಲನೆ ನಡೆಸಿ ಕ್ರಮಕೈಗೊಳ್ಳಲಾಗುವುದು ಎಂದು ಎಚ್.ಕೆ.ಪಾಟೀಲ್ ಹೇಳಿದರು.




