ಭೂಸ್ವಾಧೀನ ಕಾಯ್ದೆ ಅನ್ವಯ ಪರಿಹಾರ ನೀಡಲು ಕ್ರಮ: ಸಿದ್ದರಾಮಯ್ಯ

2 years ago

#Action #provide #compensation #LandAcquisitionAct #Siddaramaiah #Seabird #MankalaVaidya

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಿರ್ಮಾಣವಾಗುತ್ತಿರುವ ಸೀಬರ್ಡ್‌ ನೌಕಾನೆಲೆಯು  ವಾಯುನೆಲೆಯನ್ನು ವಿಸ್ತರಿಸಿ, ಸಿವಿಲ್‌ ಎನ್‌ಕ್ಲೇವ್‌ ನಿರ್ಮಿಸುವ ಯೋಜನೆಗೆ ವಶಪಡಿಸಿಕೊಂಡ ಭೂಮಿಗೆ 2013ರ ಭೂಸ್ವಾಧೀನ ಕಾಯ್ದೆ ಅನ್ವಯ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಈ ಯೋಜನೆಗೆ ನಡೆದಿರುವ ಭೂಸ್ವಾಧೀನ ಪ್ರಕ್ರಿಯೆಯಲ್ಲಿ  ತಾರತಮ್ಯವಾಗಿದೆ ಎಂಬ ಅಹವಾಲಿನ  ಕುರಿತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಕಾರವಾರ ಶಾಸಕ ಸತೀಶ್‌ ಸೈಲ್‌ ನೇತೃತ್ವದ ನಿಯೋಗದ ಮನವಿ ಸ್ವೀಕರಿಸಿದ ನಂತರ ಅವರು ಮಾತನಾಡಿದರು.

ಮುಖ್ಯ ಕಾರ್ಯದರ್ಶಿ ಮತ್ತು ಸಂಬಂಧಿಸಿದ ಇತರ ಅಧಿಕಾರಿಗಳೊಂದಿಗೆ, ಭೂಸ್ವಾಧೀನ ಪರಿಹಾರ ನಿಗದಿ, ಭೂಮಿ ಕಳೆದುಕೊಂಡವರಿಗೆ ಉದ್ಯೋಗ ಮತ್ತು ಸೂಕ್ತ ನಿವೇಶನ ನೀಡುವ ಕುರಿತು ಚರ್ಚಿಸುವಂತೆ ಕೈಗಾರಿಕೆ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲರಿಗೆ ಮುಖ್ಯಮಂತ್ರಿ ಸೂಚಿಸಿದರು.

ಸಭೆಯಲ್ಲಿ ಹಾಜರಿದ್ದ ಭೂಮಿ ಕಳೆದುಕೊಂಡ ರೈತರ ಪ್ರತಿನಿಧಿಗಳು ಬಿಜೆಪಿ ಸರ್ಕಾರ ಮಾಡಿದ ಅನ್ಯಾಯ ಮತ್ತು ಮೋಸ ಸರಿಪಡಿಸಿ ಎಂದು ಮನವಿ ಸಲ್ಲಿಸಿದವು.

ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ಯೋಜನೆಯಿಂದ ಸಂತ್ರಸ್ತರಾಗುತ್ತಿರುವ  ಮೂರು ಗ್ರಾಮಗಳ ನಿರಾಶ್ರಿತ ಕುಟುಂಬಗಳ ಮನವಿಯ ಬಗ್ಗೆ, ವೈಜ್ಞಾನಿಕವಾಗಿ, ನಿಯಮಬದ್ದವಾಗಿ ಪರಿಶೀಲಿಸಿ ಪರಿಹಾರ ಕೊಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸೀಬರ್ಡ್‌ ಮೊದಲ ಹಂತದ ಯೋಜನೆಯಡಿ ಭೂಮಿ ಕಳೆದುಕೊಂಡವರ ಕುಟುಂಬದವರಿಗೂ ಉದ್ಯೋಗ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದೂ ಅವರು ತಿಳಿಸಿದರು.

Leave a Reply