ಬೆಂಗಳೂರು: ಲೋಕಸಭಾ ಚುನಾವಣೆ ದೃಷ್ಟಿಯಿಂದ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಾದ ನಂತರ ಎರಡೂ ಪಕ್ಷಗಳು ಒಟ್ಟಾಗಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಸಮರ ಘೋಷಿಸಿವೆ.
ಇದರ ಮೊದಲ ಹೆಜ್ಜೆಯಾಗಿ ಕಾವೇರಿ ಜಲ ವಿವಾದದಲ್ಲಿ ರಾಜ್ಯದ ಹಿತ ಕಾಯಯವಲ್ಲಿ ಸರ್ಕಾರ ಎಡವಿದೆ. ಬಿಕ್ಕಟ್ಟು ಬಗೆಹರಿಸುವ ವಿಚಾರದಲ್ಲಿ ಮೊದಲಿನಿಂದ ಎಡವಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದವು.
ಕಾವೇರಿ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕರೆ ನೀಡಿದ್ದ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಪಾಲ್ಗೊಂಡರು. ಈ ಪ್ರತಿಭಟನಾ ಧರಣಿಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಡಿ.ವಿ. ಸದಾನಂದಗೌಡ, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಸೇರಿದಂತೆ ಎರಡೂ ಪಕ್ಷಗಳ ಕೆಲ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಮುಖಂಡರು ಭಾಗಿಯಾಗಿದ್ದರು.
ರಾಜ್ಯದ ಕಾಂಗ್ರೆಸ್ ಸರ್ಕಾರ ಕಾವೇರಿ ವಿಚಾರದಲ್ಲಿ ರಾಜ್ಯದ ಹಿತವನ್ನು ಕಾಪಾಡದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆಯನ್ನು ಎರಡೂ ಪಕ್ಷಗಳ ನಾಯಕರು ನೀಡಿದರು.
ಈ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರವು ಡಿಎಂಕೆ ಏಜೆಂಟರಂತೆ ವರ್ತಿಸುತ್ತಿದೆ ಎಂದು ಟೀಕಿಸಿದರು.
ಡಿಎಂಕೆ ಜೊತೆ ಹೊಂದಾಣಿಕೆ ರಾಜಕಾರಣದಿಂದ ರಾಜ್ಯದ ಜನರಿಗೆ ದ್ರೋಹ ಬಗೆಯುತ್ತಿದ್ದಾರೆ. ಇದನ್ನು ಖಂಡಿಸುತ್ತೇನೆ. ಈ ವಿಚಾರವಾಗಿ ರಾಜ್ಯದ ಜನರು ಬೀದಿಗಿಳಿದು ಹೋರಾಡುತ್ತಿದ್ದು, ಬಿಜೆಪಿ- ಜೆಡಿಎಸ್ ಇದಕ್ಕೆ ಎಲ್ಲ ರೀತಿಯ ಬೆಂಬಲ ಕೊಡುತ್ತದೆ ಎಂದು ಪ್ರಕಟಿಸಿದರು.
ಈಗಲಾದರೂ ಇದನ್ನು ಸರಿಪಡಿಸಿ ಇಲ್ಲವಾದರೆ ಕಾನೂನು- ಸುವ್ಯವಸ್ಥೆ ಹದಗೆಡಲಿದೆ. ಅದಕ್ಕೆ ರಾಜ್ಯ ಸರಕಾರವೇ ಹೊಣೆ ಎಂದು ಎಚ್ಚರಿಸಿದರು.
ನಳಿನ್ಕುಮಾರ್ ಕಟೀಲ್ ಮಾತನಾಡಿ, ರಾಜ್ಯದ ಸರಕಾರ ಕೇವಲ ಕಾಂಗ್ರೆಸ್, ವಿಪಕ್ಷ ಮೈತ್ರಿಕೂಟದ ಹಿತ ಕಾಪಾಡುತ್ತಿದೆ. ಜನಹಿತವನ್ನು ಅದು ಮರೆತಿದೆ ಎಂದು ದೂರಿದರು.
ಧರಣಿ ನಿರತರನ್ನುದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ ರಾಜ್ಯ ಸರ್ಕಾರ ನಮ್ಮ ನಾಡಿನ ರೈತರ ಕುರಿತು ನಿರ್ಲಕ್ಷ್ಯ ತೋರಿದೆ. ನೀರಿನ ಲಭ್ಯತೆಗೆ ಅನುಗುಣವಾಗಿ ಕಾವೇರಿ ನೀರು ಬಿಡುವ ಕುರಿತು ನಿರ್ಧಾರ ಆಗಬೇಕು. ಪ್ರಾಧಿಕಾರದ ಮುಂದೆ ವಾಸ್ತವಾಂಶಗಳನ್ನು ಇಟ್ಟು ಎರಡೂ ರಾಜ್ಯಗಳಿಗೆ ಅನ್ಯಾಯ ಆಗದಂತೆ ಪರಿಹಾರ ಲಭಿಸಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು. ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂಬುದು ಕಾಂಗ್ರೆಸ್ ಸಣ್ಣತನವನ್ನು ತೋರಿಸುತ್ತದೆ ಎಂದು ಟೀಕಿಸಿದರು.




