ಬಂಧನಕ್ಕೊಳಗಾಗಿರುವ ರೈತರನ್ನು ಕರೆತರಲು ಎಲ್ಲ ಪ್ರಯತ್ನ: ಡಾ.ಎಚ್.ಸಿ.ಮಹದೇವಪ್ಪ

2 years ago

ಬೆಂಗಳೂರು: ಕೃಷಿ ಉತ್ಪನ್ನಗಳಿಗೆ ನೀಡಲಾಗುತ್ತಿರುವ ಬೆಂಬಲ ಬೆಲೆಗೆ ಶಾಸನಾತ್ಮಕ ಮಾನ್ಯತೆ ನೀಡುವಂತೆ ಆಗ್ರಹಿಸಿ ದೆಹಲಿಯಲ್ಲಿ ನಡೆದಿರುವ ರೈತರ ಹೋರಾಟಕ್ಕೆ ರಾಜ್ಯದಿಂದ ತೆರಳುತ್ತಿದ್ದ ರೈತರನ್ನು ಬಂಧಿಸಲಾಗಿದ್ದು ಅವರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆ ತರಲು ಸರ್ಕಾರ ಎಲ್ಲ ಪ್ರಯತ್ನ ನಡೆಸಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹಾದೇವಪ್ಪ ವಿಧಾನಸಭೆಗೆ ತಿಳಿಸಿದರು.

ಶೂನ್ಯ ವೇಳೆಯಲ್ಲಿ ರೈತ ಸಂಘದ ದರ್ಶನ್ ಪುಟ್ಟಣ್ಣಯ್ಯ ಅವರು ಮಾಡಿದ ಪ್ರಸ್ತಾಪಕ್ಕೆ ಸರ್ಕಾರದ ಪರವಾಗಿ ಉತ್ತರಿಸಿದ ಅವರು, ರಾಜ್ಯದ ರೈತರನ್ನು ಮಧ್ಯಪ್ರದೇಶ ಸರ್ಕಾರ ಬಂಧಿಸಿದೆ. ಅಲ್ಲಿಂದ ಅವರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತದೆ ಎಂದರು.

ಮಧ್ಯ ಪ್ರದೇಶದಲ್ಲಿ ಬಂಧನಕ್ಕೆ ಒಳಗಾಗಿರುವ ರೈತರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಏನೆಲ್ಲಾ ಕ್ರಮ ಕೈಗೊಳ್ಳಪಬೇಕು, ಆ ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತದೆ ಎಂದು ಭರವಸೆ ನೀಡಿದರು.

ಇದಕ್ಕೂ ಮೊದಲು ವಿಷಯ ಪ್ರಸ್ತಾಪಿಸಿದ್ದ ದರ್ಶನ್ ಪುಟ್ಟಣ್ಣಯ್ಯ, ದೆಹಲಿಯಲ್ಲಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇಶದ ರೈತರು ಒಗ್ಗೂಡಿ ನಡೆಸಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ರಾಜ್ಯದ 70 ರೈತರು ರೈಲಿನ ಮೂಲಕ ಪ್ರಯಾಣಿಸುತ್ತಿದ್ದರು ಎಂದರು.

ಕಳೆದ ಸೋಮವಾರ ಮಧ್ಯಪ್ರದೇಶದ ಭೂಪಾಲ್ನಲ್ಲಿ ಅವರನ್ನು ಬಂಧಿಸಲಾಯಿತು. ಈಗ ಅವರನ್ನು ಉಜ್ಜಯಿನಿಗೆ ವರ್ಗಾಯಿಸಲಾಗಿದೆ ಎಂಬ ಮಾಹಿತಿ ಬಂದಿದೆ. ಈ ಬಂಧನ ಖಂಡನಾರ್ಹ. ಬಂಧಿಸಿರುವ ರೈತರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ದ್ವನಿಗೂಡಿಸಿ ಮಾತನಾಡಿದ ಸಭಾಧ್ಯಕ್ಷ ಯು.ಟಿ. ಖಾದರ್, ರಾಜ್ಯದ ರೈತರನ್ನು ಮಧ್ಯಪ್ರದೇಶದಲ್ಲಿ ಬಂಧಿಸಲಾಗಿದೆ. ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರದೇಶ ಸರ್ಕಾರದ ಜತೆ ಮಾತನಾಡಿ ರೈತರನ್ನು ಬಿಡುಗಡೆಗೊಳಿಸಿ ರಾಜ್ಯಕ್ಕೆ ಕರೆತರಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

Leave a Reply