ನುಡಿ ಜಾತ್ರೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮೇಳನಕ್ಕೆ ಅದ್ದೂರಿ ಚಾಲನೆ
ಮಂಡ್ಯ: ಸಕ್ಕರೆನಾಡು,ಕಾವೇರಿಯ ನೆಲೆವೀಡು ಮಂಡ್ಯದಲ್ಲಿ ಸಾಹಿತ್ಯ ಸಂಭ್ರಮ ಮನೆ ಮಾಡಿದೆ. ಕನ್ನಡ ನುಡಿ ಜಾತ್ರೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮೇಳನಕ್ಕೆ ಅದ್ದೂರಿ ಚಾಲನೆ ಸಿಕ್ಕಿದೆ. ಧ್ವಜಾರೋಹಣ ನೆರವೇರಿಸುವ ಮೂಲಕ ಅಧಿಕೃತವಾಗಿ ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು. ಸಮೇಳನದ ಸರ್ವಾಧ್ಯಕ್ಷ ಜಾನಪದ ವಿದ್ವಾಂಸ ನಾಡೋಜ ಗೊ.ರು.ಚನ್ನಬಸಪ್ಪ ಅವರ ಉಪಸ್ಥಿತಿಯಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ರಾಷ್ಟ್ರ ಧ್ವಜಾರೋಹಣ ಮಾಡಿದರು. ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಷಿ, ಕನ್ನಡ ಸಾಹಿತ್ಯ ಪರಿಷತ್ ಧ್ವಜಾರೋಹಣ ನೆರವೇರಿಸಿದರೆ, ಮಂಡ್ಯ ಜಿಲ್ಲಾ ಕಸಾಪ ಸಂಚಾಲಕಿ ಮೀರಾ ಶಿವಲಿಂಗಯ್ಯ ನಾಡಧ್ವಜಾರೋಹಣ ನೆರವೇರಿಸಿದರು.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ವೈಭವದ ಮೆರವಣಿಗೆ, ಪೂರ್ಣಕುಂಭ ಸ್ವಾಗತ, ಜಾನಪದ ಕಲಾತಂಡಗಳ ಪ್ರದರ್ಶನದ ಮೂಲಕ ಸಮೇಳನದ ಅಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಅವರನ್ನು ವೇದಿಕೆಗೆ ಕರೆತರಲಾಯಿತು. ಈ ವೇಳೆ ನಾಡಿನ ಮೂಲೆಮೂಲೆಗಳಿಂದ, ದೇಶ-ವಿದೇಶಗಳಿಂದ ಜನಸಾಗರವೇ ಹರಿದುಬಂದಿತ್ತು. ಎಲ್ಲೆಡೆ ಕನ್ನಡದ ಕಹಳೆ ಮೊಳಗಿತು. ನಂತರ ಪ್ರಧಾನ ವೇದಿಕೆಯಲ್ಲಿ ಜ್ಯೋತಿ ಬೆಳಗಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನುಡಿ ಜಾತ್ರೆಗೆ ವಿದ್ಯುಕ್ತ ಚಾಲನೆ ನೀಡಿದರು.
ಸಮ್ಮೇಳನದ ಸರ್ವಾಧ್ಯಕ್ಷ ಭಾಷಣ ಮಾಡಿದ ಗೊ.ರು.ಚನ್ನಬಸಪ್ಪ, ಶಿಕ್ಷಣದಲ್ಲಿ ಹತ್ತನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲಿಷ್ ಮಾಧ್ಯಮದ ಶಾಲೆಗಳನ್ನು ಸರ್ಕಾರ ತೆರೆಯುವುದನ್ನಾಗಲಿ, ಖಾಸಗಿ ಶಾಲೆಗಳಿಗೆ ಅನುಮತಿ ಕೊಡುವುದನ್ನಾಗಲೀ ಕೂಡಲೇ ನಿಲ್ಲಿಸಬೇಕು ಎಂದು ಹಕ್ಕೊತ್ತಾಯ ಮಂಡಿಸಿದರು.
ತಮ್ಮ ಸುದೀರ್ಘ 48 ಪುಟಗಳ ಭಾಷಣದಲ್ಲಿ, ಭಾಷೆ ಎದುರಿಸುತ್ತಿರುವ ಬಿಕ್ಕಟ್ಟುಗಳು, ಅಂತರರಾಜ್ಯ ಭಾಷಾ ವಿನಿಮಯ, ಹಿಂದಿ ಹೇರಿಕೆ, ತಂತ್ರಜ್ಞಾನದ ಅವಲಂಬನೆ, ಗಡಿನಾಡ ಕನ್ನಡಿಗರ ಬವಣೆ, ಪುಸ್ತಕ ಸಂಸ್ಕೃತಿಯ ಪೋಷಣೆ, ಮಹಿಳೆಯರಿಗೆ ದೊರಕದ ಸ್ಥಾನಮಾನ ಸೇರಿದಂತೆ ಇಪ್ಪತ್ತೊಂದು ಪ್ರಮುಖ ಅಂಶಗಳ ಕಡೆಗೆ ಸಮ್ಮೇಳನದಲ್ಲಿದ್ದ ಸರ್ಕಾರದ ಪ್ರತಿನಿಧಿಗಳು ಮತ್ತು ಮತ್ತು ಸಾವಿರಾರು ಜನರ ಗಮನ ಸೆಳೆದರು.
ಹಕ್ಕೊತ್ತಾಯಗಳು: ಅಗತ್ಯವೆನಿಸಿರುವ ಇಂಗ್ಲಿಷ್ ಕಲಿಕೆಗೆ ಪ್ರತ್ಯೇಕ ವ್ಯವಸ್ಥೆ ಮಾಡಿ, ಬೋಧನೆಗೆ ತರಬೇತಿ ಪಡೆದ ಶಿಕ್ಷಕರನ್ನು ನೇಮಿಸಬೇಕು ಮತ್ತು ಗ್ರಾಮೀಣ ಭಾಗದ ಕನ್ನಡ ಶಾಲೆಗಳನ್ನು, ಎಲ್ಲ ಸೌಲಭ್ಯಗಳಿಂದ ಪೂರ್ಣವಾಗಿ ಸಜ್ಜುಗೊಳಿಸಬೇಕು. ರಾಜ್ಯದ ಆಯವ್ಯಯದಲ್ಲಿ ಕನಿಷ್ಠ ಶೇ.15ರಷ್ಟನ್ನು ಶಿಕ್ಷಣಕ್ಕೆ ಮೀಸಲಿಡಬೇಕು ಎಂದು ಒತ್ತಾಯಿಸಿದರು.
ಅನೇಕ ದಶಕಗಳಿಂದ ನನೆಗುದಿಗೆ ಬಿದ್ದಿರುವ ಸರೋಜಿನಿ ಮಹಿಷಿ ವರದಿಯನ್ನು ಕೂಡಲೇ ಶಾಸನಬದ್ಧಗೊಳಿಸಿ ಅನುಷ್ಠಾನಗೊಳಿಸಬೇಕು. ಅನುಷ್ಠಾನದ ಮೇಲ್ವಿಚಾರಣೆಯ ಹೊಣೆಗಾರಿಕೆಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ವಹಿಸಬೇಕು ಎಂದರು.
ಸಾರ್ವಜನಿಕವಿರಲಿ, ಖಾಸಗಿಯಿರಲಿ ಉದ್ಯೋಗಾವಕಾಶಗಳಲ್ಲಿ ವಿಶೇಷ ಅರ್ಹತೆಯ ಉನ್ನತ ಹುದ್ದೆಗಳ ಹೊರತಾಗಿ ಸಿ ಮತ್ತು ಡಿ ವರ್ಗದ ಹುದ್ದೆಗಳನ್ನು ಪೂರ್ಣವಾಗಿ ಕನ್ನಡಿಗರಿಗೇ ಮೀಸಲಿಡಬೇಕು. ಕಾಲ-ಕಾಲಕ್ಕೆ ಉದ್ಯೋಗ ಮಾಹಿತಿ ದೊರೆಯುವಂತಾಗಬೇಕು ಎಂದರು.
ನಾಡಿನ ವಿಶೇಷ ವ್ಯವಸ್ಥೆಗಳಾದ ಕನ್ನಡ ವಿಶ್ವವಿದ್ಯಾಲಯ ಮತ್ತು ಜಾನಪದ ವಿಶ್ವವಿದ್ಯಾಲಯಗಳು ಅನುಭವಿಸುತ್ತಿರುವ ಹಣಕಾಸು ಮತ್ತು ಬೋಧನಾ ಸಿಬ್ಬಂದಿ ಕೊರತೆಯನ್ನು ನಿವಾರಿಸಲು ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕನ್ನಡ ಶಾಸ್ತ್ರೀಯ ಭಾಷಾ ಕೇಂದ್ರವನ್ನು ಸ್ವತಂತ್ರ ಸ್ವಾಯತ್ತ ಕೇಂದ್ರವನ್ನಾಗಿ ಬೆಳೆಸಲು ಮತ್ತು ಕೇಂದ್ರದ ನೆರವನ್ನು ಪಡೆಯಲು ಅಗತ್ಯ ವ್ಯವಸ್ಥೆ ಮಾಡಬೇಕು. ಅಪಾರ ಸಂಭಾವ್ಯ ಸಾಮರ್ಥ್ಯವಿರುವ ಪ್ರವಾಸೋದ್ಯಮವನ್ನು ಸಾಂಸ್ಕೃತಿಕ ಮತ್ತು ಶೈಕ್ಷಣಿಕ ದೃಷ್ಟಿಯಿಂದಷ್ಟೇ ಅಲ್ಲದೆ ಆದಾಯ ಮತ್ತು ಉದ್ಯೋಗಾವಕಾಶ ದೃಷ್ಟಿಯಿಂದಲೂ ಅದನ್ನು ವಿಸ್ತರಣೆಯ ವಲಯವನ್ನಾಗಿ ಅಭಿವೃದ್ಧಿಗೊಳಿಸಬೇಕು ಎಂದರು.
ಕೈಗಾರಿಕೋದ್ಯಮಗಳ ಸ್ಥಾಪನೆ ಎಲ್ಲ ಜಿಲ್ಲೆಗಳಿಗೂ ಹಂಚಿಕೆಯಾಗಬೇಕು. ಯಾವುದೇ ಉದ್ಯಮವಿರಲಿ, ಅಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶದ ಕಟ್ಟುನಿಟ್ಟಿನ ಷರತ್ತು ವಿಧಿಸಿ, ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.
ಸರ್ಕಾರದ ಸಚಿವಾಲಯ ಕಚೇರಿಗಳ ಹೊರತಾಗಿ, ಉಳಿದ ಇಲಾಖೆಗಳ ನಿರ್ದೇಶನಾಲಯ ಕಚೇರಿಗಳನ್ನು ವಿವಿಧ ಜಿಲ್ಲಾ ಕೇಂದ್ರಗಳಿಗೆ ವರ್ಗಾಯಿಸಿ ಬೆಂಗಳೂರಿನ ಒತ್ತಡವನ್ನು ತಪ್ಪಿಸಬೇಕು ಎಂದರು.
ಶಿಕ್ಷಣ ಮಾಧ್ಯಮ ಅಂತಾರಾಜ್ಯ ಗಡಿ, ಜಲ ಮತ್ತು ವಲಸೆ ಸಮಸ್ಯೆಗಳನ್ನು ಪರಿಹರಿಸಲು ಒಂದು ರಾಷ್ಟ್ರೀಯ ನೀತಿಯನ್ನು ರೂಪಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು. ಪ್ರಾದೇಶಿಕ ಅಸಮಾನತೆಯನ್ನು ಸರಿಪಡಿಸುವ ದಿಸೆಯಲ್ಲಿ ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಭಾಗದ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಕಾಲಬದ್ಧ ಕ್ರಮಕೈಗೊಳ್ಳಬೇಕು ಎಂದರು.
ಬಸವಣ್ಣನವರನ್ನು ರಾಜ್ಯದ ‘ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿರುವ ಮತ್ತು ಬಸವ ಕಲ್ಯಾಣದಲ್ಲಿ ನೂತನ ಅನುಭವ ಮಂಟಪವನ್ನು ನಿರ್ಮಿಸುತ್ತಿರುವ ರಾಜ್ಯ ಸರ್ಕಾರ, ಹನ್ನೆರಡನೆಯ ಶತಮಾನದ ಶರಣರ ಕ್ಷೇತ್ರಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾರ್ಯಕ್ಕಾಗಿ ಸ್ವಾಯತ್ತ ಪ್ರಾಧಿಕಾರ ರಚಿಸಬೇಕು. ಈಗಾಗಲೇ ಆಶ್ವಾಸನೆ ನೀಡಿರುವಂತೆ ಮುಂದಿನ ಶೈಕ್ಷಣಿಕ ವರ್ಷದಿಂದ ವಚನ ವಿಶ್ವವಿದ್ಯಾಲಯವನ್ನು ಆರಂಭಿಸಬೇಕು ಎಂದರು.
ರಾಜ್ಯದ ಎಲ್ಲ ಸರ್ಕಾರಿ ಮತ್ತು ಖಾಸಗಿ ಕೈಗಾರಿಕೆಗಳು, ಕಛೇರಿಗಳು, ಅಂಗಡಿ ಮುಂಗಟ್ಟುಗಳ ನಾಮಫಲಕಗಳು ಕನ್ನಡದಲ್ಲಿರುವುದು ಕಡ್ಡಾಯವಾಗಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಪರಿಸರದ, ವಿಶೇಷವಾಗಿ, ಪಶ್ಚಿಮಘಟ್ಟಗಳ ರಕ್ಷಣೆಗೆ ಕಟ್ಟುನಿಟ್ಟಾದ ಕ್ರಮಕೈಗೊಳ್ಳಬೇಕು. ಅಲ್ಲಿ ಗಣಿಗಾರಿಕೆಗೆ ಅವಕಾಶ ನೀಡಬಾರದು ಎಂದರು.
ಜ್ಞಾನಪ್ರಸಾರದ ಕೇಂದ್ರದಂತಿರುವ ಗ್ರಂಥಾಲಯ ಪೋಷಣೆಯ ಕಡೆಗೆ ಪೂರ್ಣ ಗಮನಕೊಡಬೇಕು. ಗ್ರಂಥಗಳ ಸಗಟು ಖರೀದಿ ಪ್ರತಿ ವರ್ಷ ತಪ್ಪದೇ ನಡೆಯಬೇಕು. ಗ್ರಂಥಾಲಯ ತೆರಿಗೆಯಿಂದ ಸಂಗ್ರಹವಾದ ಹಣವನ್ನು ಗ್ರಂಥಾಲಯಗಳ ಅಭಿವೃದ್ಧಿಗೇ ಬಳಸಬೇಕು. ಹಿರಿಯ ಸಾಹಿತಿಗಳ ಸಮಗ್ರ ಸಾಹಿತ್ಯ ಪ್ರಕಟಣೆ ಒಂದು ಒಳ್ಳೆಯ ಯೋಜನೆಯಾಗಿದ್ದು, ಅದನ್ನು ಮುಂದುವರೆಸಿಕೊಂಡು ಹೋಗಬೇಕು ಎಂದರು.
ಆಡಳಿತದಲ್ಲಿ ಕನ್ನಡ ಬಳಕೆಯ ಬಗ್ಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಮುಖ್ಯವಾಗಿ ಕನ್ನಡ ಲಿಪಿಯನ್ನು ಆಧುನಿಕ ತಂತ್ರ ವಿಧಾನಗಳಿಗೆ ಹೊಂದಿಸುವ ಕೆಲಸ ತ್ವರಿತವಾಗಿ ನಡೆಯಬೇಕು. ಯಾಂತ್ರಿಕ ಬುದ್ಧಿಮತ್ತೆ ತಂತ್ರದ ಬಳಕೆ ಹೆಚ್ಚಾಗಬೇಕು ಎಂದರು.
ಸಾಹಿತ್ಯ-ಸಂಸ್ಕೃತಿ ಸಂಬಂಧದ ಸಂಘ-ಸಂಸ್ಥೆಗಳಿಗೆ ಉದಾರ ಧನ ಸಹಾಯ ದೊರಕಿಸಬೇಕು. ಯಾವುದೇ ಕಾರಣಕ್ಕೆ ಪ್ರಾದೇಶಿಕ ಭಾಷೆಗಳ ಮೇಲೆ ಹಿಂದಿ ಹೇರಿಕೆಗೆ ಅವಕಾಶ ಕೊಡಬಾರದು. ಕನ್ನಡದ ಕೃತಿಗಳನ್ನು ಅನ್ಯಭಾಷೆಗೆ ಅನುವಾದಿಸಿ ಪ್ರಕಟಿಸುವ ಕೆಲಸ ದೊಡ್ಡ ಪ್ರಮಾಣದಲ್ಲಿ ನಡೆಯಬೇಕು. ಇದಕ್ಕಾಗಿ ಭಾಷಾ ಪ್ರಾಧಿಕಾರಕ್ಕೆ ಅಗತ್ಯ ನೆರವು ಒದಗಿಸಬೇಕು ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ಒಂದು ಪ್ರಾತಿನಿಧಿಕ ಸಂಸ್ಥೆಯಾಗಿದ್ದು, ಅದು ನಡೆಸುವ ಇಂತಹ ಸಮ್ಮೇಳನಗಳಲ್ಲಿ ಕೈಗೊಳ್ಳುವ ನಿರ್ಣಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ವಿಳಂಬ ಮಾಡದೆ ಅದನ್ನು ಅನುಷ್ಠಾನಗೊಳಿಸಬೇಕು. ಕನ್ನಡ ಸಾಹಿತ್ಯ ಪರಿಷತ್ತು ಶಾಲಾ ಶಿಕ್ಷಕರಿಗೆ ಸಾಹಿತ್ಯ-ಸಂಸ್ಕೃತಿಗಳ ಬಗೆಗೆ ನಿಯತಕಾಲಿಕ ಶಿಬಿರಗಳನ್ನು ನಡೆಸಿ, ಅವರಲ್ಲಿ ಸಾಹಿತ್ಯದ ಅಧ್ಯಯನಾಸಕ್ತಿ ಬೆಳೆಸಬೇಕು ಎಂದರು.



